

ಹಾಸನ: ಮಳೆಗಾಲ ಆರಂಭವಾಗಿದ್ದು, ಯಾವುದೇ ರೀತಿಯ ಕಾಯಿಲೆಗಳು ಹರಡದಂತೆ ಹೆಚ್ಚಿನ ಗಮನವಹಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಶಾಲೆಗಳು, ಆಸ್ಪತ್ರೆ, ದೇವಸ್ಥಾನಗಳು ಹಾಗೂ ಇನ್ನಿತರ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ವಿವಿಧ ಕಾಯಿಲೆಗಳ ಬಗ್ಗೆ ಸಾರ್ವಜನಿಕರಿಗೆ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ವಿಡಿಯೋ, ಛಾಯಾಚಿತ್ರಗಳನ್ನು ಡಿಜಿಟಲ್ ಡಿಸ್‌ಪ್ಲೇ ಬೋರ್ಡ್‌ಗಳಲ್ಲಿ ಪ್ರದರ್ಶಸಿಸುವಂತೆ ತಿಳಿಸಿದರು.
ಹೋಟೆಲ್‌ಗಳಿಗೆ ಉಪಾಹಾರ ಸೇವನೆಗೆ ಬರುವ ಗ್ರಾಹಕರಿಗೆ ಬಿಸಿ ನೀರನ್ನು ಕಡ್ಡಾಯವಾಗಿ ನೀಡುವಂತೆ ನಿರ್ದೇಶನ ನೀಡಿ. ಅಂಗನವಾಡಿಯ ಮಕ್ಕಳಿಗೆ ಪ್ರತಿನಿತ್ಯ ಪೌಷ್ಠಿಕಾಂಶ ಆಹಾರ ನೀಡುವುದರ ಜತೆಗೆ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಂಗನವಾಡಿ ಮೇಲ್ವಿಚಾರಕರು ಅಂಗನವಾಡಿಗಳಿಗೆ ಪ್ರತಿನಿತ್ಯ ಭೇಟಿ ನೀಡಿ ಆಹಾರ ಗುಣಮಟ್ಟ ಪರೀಕ್ಷೆ ಮಾಡಬೇಕು ಎಂದು ನಿರ್ದೇಶನ ನೀಡಿದರು. ಅಂಗನವಾಡಿಯಲ್ಲಿ ಮೂಲಭೂತ ಸೌಕರ್ಯಗಳಲ್ಲಿ ಯಾವುದೇ ರೀತಿಯ ಕೊರತೆಯಾಗದಂತೆ ನೋಡಿಕೊಳ್ಳಿ. ಪ್ರತಿ ಅಂಗನವಾಡಿಯಲ್ಲಿ ಕಡ್ಡಾಯವಾಗಿ ಶೌಚಾಲಯ ಇರಬೇಕು ಹಾಗೂ ಸ್ವಚ್ಛತೆ ಕಾಪಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಎಚ್.ಡಿ.ಗಿರೀಶ್ ಅವರು ಮಾತನಾಡಿ, ಇಲಾಖೆಗಳ ಮಾಹಿತಿಯನ್ನು ಪಡೆದುಕೊಂಡು ಇಲಾಖೆಗಳಿಗೆ ನೀಡಿರುವ ಗುರಿಯನ್ನು ನಿಗಧಿತ ಅವಧಿಯಲ್ಲಿ ಸಾಧಿಸುವಂತೆ ತಿಳಿಸಿದರು.
ಸಭೆಯಲ್ಲಿ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರವಿ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ದಿನೇಶ್, ತಾಲೂಕು ಪಂಚಾಯಿತಿ ಯೋಜನಾಧಿಕಾರಿ ವಿನಾಯಕ ಅಗಸಿ ಹಾಗೂ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.