ಕಾರ್ಮಿಕ ಕಾಯ್ದೆಗಳ ಅರಿವು ಇರಲಿ

20 YERRISWAMY 03
Published on

ಬಳ್ಳಾರಿ : ಎಲ್ಲ ವರ್ಗಗಳ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿಗಾಗಿ ವಿವಿಧ ಕಾಯ್ದೆಗಳನ್ನು ಜಾರಿಗೆ ತಂದಿದ್ದು, ಅವುಗಳ ಬಗ್ಗೆ ಅರಿವು ಹೊಂದಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್. ಹೊಸಮನೆ ಹೇಳಿದರು.
ನಗರದ ಕೊಟ್ಟೂರುಸ್ವಾಮಿ ಮಠದ ಕಾಂಪ್ಲೆಕ್ಸ್‌ನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಕಾರ್ಖಾನೆಗಳು, ಬಾಯ್ಲರಗಳ ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥೃ ಇಲಾಖೆ, ಕಾರ್ಮಿಕರ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆ, ಜಿಲ್ಲಾ ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲೆಯ ಉದ್ಯೋಗದಾತರಿಗೆ, ಗುತ್ತಿಗೆದಾರರಿಗೆ, ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳಿಗೆ ಹಾಗೂ ಕಾರ್ಮಿಕರಿಗೆ ವಿವಿಧ ಕಾರ್ಮಿಕ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಕಾರ್ಮಿಕ ಇಲಾಖೆಯ ಕಾರ್ಯಚಟುವಟಿಕೆಗಳು ಹಾಗೂ ಯೋಜನೆಗಳ ಬಗ್ಗೆ ಸಂಬಂಧಿಸಿದ ಕಾರ್ಮಿಕರು, ಮಾಲೀಕರು ಹಾಗೂ ಸಾರ್ವಜನಿಕರಿಗೆ ತಿಳುವಳಿಕೆ ನೀಡುವ ನಿಟ್ಟಿನಲ್ಲಿ ಕಾರ್ಯಾಗಾರ ಆಯೋಜಿಸಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಈ ಭಾಗದಲ್ಲಿ ಮಹಿಳೆಯರು ಗಾರ್ಮೆಂಟ್ಸ್ ಕ್ಷೇತ್ರದಲ್ಲಿ ಹೆಚ್ಚಾಗಿ ತೊಡಗಿಸಿಕೊಂಡಿದ್ದು, ಮಹಿಳೆಯರು ವಿವಿಧ ಕಾರ್ಮಿಕ ಕಾಯ್ದೆಗಳನ್ನು ಅರಿಯಬೇಕು ಎಂದು ನಿರ್ದೇಶಿಸಿದರು. ಸರ್ಕಾರವು ಹಲವಾರು ಯೋಜನೆಗಳನ್ನು ಕಾರ್ಮಿಕರಿಗೆ ಒದಗಿಸಲಾಗುತ್ತಿದ್ದು, ಅರ್ಹ ಕಾರ್ಮಿಕರಿಗೆ ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳು ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ಇಎಸ್‌ಐಸಿಯ ಶಾಖಾ ವ್ಯವಸ್ಥಾಪಕ ಶಿವಕುಮಾರ, ಜಿಲ್ಲಾ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಸಿದ್ದಪ್ಪ ಜಿ. ಖೈನೂರು ಮಾತನಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net