

ಚಿತ್ರದುರ್ಗ: ಅಗತ್ಯ ಸೌಲಭ್ಯಗಳನ್ನು ಪಡೆಯಲು ಕಾರ್ಮಿಕರಿಗೆ ಕಾನೂನು ಅರಿವಿನ ಅಗತ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ,ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ‌್ಯದರ್ಶಿ ಎಂ.ವಿಜಯ್ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಹಾಗೂ ಸ್ಟಾರ್ ಇನ್ಪ್ರಾಟೆಕ್ ಸಂಯುಕ್ತಾಶ್ರಯದಲ್ಲಿ ಕಾರ್ಮಿಕ ದಿನಾಚರಣೆ ಅಂಗವಾಗಿ ನಿರ್ಮಾಣ ಹಂತದಲ್ಲಿರುವ ನಗರದ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲ ಯದ ಕಟ್ಟಡ ಸಂಕೀರ್ಣದಲ್ಲಿ ಮಂಗಳವಾರ ಆಯೋಜಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾಯ್ದೆಗೆ ಅನುಗುಣವಾಗಿ ಕಾರ್ಮಿಕರಿಗೆ ಸಿಗಬೇಕಾದ ಕನಿಷ್ಠ ವೇತನ ಹಾಗೂ ಸೌಲಭ್ಯಗಳನ್ನು ನೀಡಲು ಸಂಬಂಧಿಸಿದ ಏಜೆನ್ಸಿ, ಕಾರ್ಮಿಕ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಹೇಳಿದರು.
ಕೆಲಸದ ಸ್ಥಳದಲ್ಲಿ ಮಹಿಳಾ ಕಾರ್ಮಿಕರಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ, ಶೌಚಗೃಹ, ಸ್ನಾನದ ಗೃಹ ಸೇರಿ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು. ಏನಾದರೂ ಸಮಸ್ಯೆಗಳು ಉದ್ಭವಿಸಿದರೆ ಕಾರ್ಮಿಕ ಅಧಿಕಾರಿಗಳು, ಪ್ರಾಧಿಕಾರಕ್ಕೆ ತಿಳಿಸುವ ಮೂಲಕ ಕಾನೂನು ನೆರವು ಪಡೆದುಕೊಳ್ಳುವಂತೆ ನ್ಯಾಯಾಧೀಶರು ಕಾರ್ಮಿಕರಿಗೆ ಸಲಹೆ ನೀಡಿದರು.
ವಕೀಲರ ಸಂಘದ ಅಧ್ಯಕ್ಷ ವೈ. ತಿಪ್ಪೇಸ್ವಾಮಿ ಮಾತನಾಡಿ, ಕಾರ್ಮಿಕರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಬೇಕು. ಒಪ್ಪತ್ತಿನ ಊಟಕ್ಕಾಗಿ ಬೇರೆ ಬೇರೆ ರಾಜ್ಯಗಳಿಂದ ಉದ್ಯೋಗ ಅರಿಸಿ ಬಂದಿರುವ ಕಾರ್ಮಿಕರು ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕಿದೆ ಎಂದರು.
ಕಾರ್ಮಿಕ ಅಧಿಕಾರಿ ಅನಿಲ್‌ಬಾಲಚಂದ್ರ ಬಗಟಿ ಮಾತನಾಡಿ, ಪಶ್ವಿಮ ಬಂಗಾಳ, ಬಿಹಾರ, ಆಂಧ್ರಪ್ರದೇಶ ಸೇರಿ ವಿವಿಧ ರಾಜ್ಯ ದ 31 ಕಾರ್ಮಿಕರು ಇಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಇವರಿಗೆ ಕಾರ್ಡ್ ವಿತರಿಸಲಾಗುವುದು. ಆರೋಗ್ಯ ತಪಾಸಣೆ ಮಾಡಿಸಲಾಗುವುದು ಎಂದರು.
ಕಾರ್ಮಿಕ ನಿರೀಕ್ಷಕ ಪಿ. ಭೀಮೇಶ್, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಪಿ. ಸತೀಶ್‌ಕುಮಾರ್, ಸೇಫ್ಟಿ ಇಂಜಿನಿಯರ್ ದೀಪಕ್, ಸ್ಟಾರ್ ಇನ್ಪ್ರಾಟೆಕ್ ಪ್ರಾಜೆಕ್ಟ್ ಮ್ಯಾನೇಜರ್ ಸುಧೀರ್ ಮತ್ತಿತರರು ಇದ್ದರು.