ಕೀಟನಾಶಕ ಬಳಕೆ ರೈತರಿಗೆ ಅಗತ್ಯ ಮಾಹಿತಿ ನೀಡಿ

Meet
Published on

ಕಲಬುರಗಿ: ಬೆಳೆಗಳಿಗೆ ಕೀಟನಾಶಕ ಸಿಂಪಡಿಸುವ ಸಂದರ್ಭದಲ್ಲಿ ರೈತರು ಅನುಸರಿಸಬೇಕಾದ ಅಗತ್ಯ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ಹಾಗೂ ಅರಿವು ಮೂಡಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಕೃಷಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಕೀಟನಾಶಕ ಸಿಂಪಡಿಸಿದ ರೈತರು ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಕುರಿತು ಕಳವಳ ವ್ಯಕ್ತಿಪಡಿಸಿ, ಈ ಕುರಿತು ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಮದ್ ಪಟೇಲ್‌ರಿಂದ ಮಾಹಿತಿ ಪಡೆದರು.

ಮಾಹಿತಿ ನೀಡಿದ ಪಟೇಲ್, ರೈತರು ಮೊನೊಕ್ರೊಟಫಾಸ್ ಜತೆಗೆ ಫಂಗಸ್‌ಗಾಗಿ ಬಳಸುವ ಕೀಟನಾಶಕ ಮಿಶ್ರಣ ಮಾಡಿ ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದೆ ಕೇವಲ ಬನಿಯನ್ ಧರಿಸಿ ಸಿಂಪಡಿಸಿದ್ದಾರೆ. ಹೀಗಾಗಿ ಅವರಿಗೆ ಆರೋಗ್ಯ ಸಮಸ್ಯೆ ಎದುರಾಗಿದೆ. ನಾಲವಾರದ ತರಕಸಪೇಟ್ ಗ್ರಾಮದಲ್ಲಿಯೂ ಸೋರುತ್ತಿರುವ ಕೀಟನಾಶಕ ಸಿಂಪಡಿಸಿದ್ದರಿಂದ ರೈತರ ಬೆನ್ನಿಗೆ ಗಾಯಗಳಾಗಿವೆ ಎಂದರು. ಆಗ ಮಧ್ಯೆ ಪ್ರವೇಶಿಸಿದ ಸಚಿವರು, ಕೀಟನಾಶಕಗಳ ಬಳಕೆ ಹಾಗೂ ಸಿಂಪಡಿಸುವ ವಿಧಾನ ಕುರಿತು ರೈತರಿಗೆ ಅಗತ್ಯ ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಸಾಧನೆ ಸ್ಪೂರ್ತಿದಾಯಕವಾಗಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದ ಸಚಿವರು, ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಕಳೆದ ವರ್ಷ ನೆಟೆರೋಗ ಬಂದು ತೊಗರಿ ಸಂಪೂರ್ಣ ಹಾಳಾಗಿತ್ತು. ಈ ಬಾರಿ ಮುಂಗಾರು ಹಂಗಾಮಿನಲ್ಲಿ ಹೆಸರು ಹಾಗೂ ಉದ್ದು ಹಾಳಾಗಿದೆ. ಈಗ ಮತ್ತೆ ತೊಗರಿ ಹಾಳಾಗುತ್ತಿದೆ. ಬಿತ್ತನೆಗೆ ರೈತರು ಸಾಲ ಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ರೈತರಿಗೆ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಇಲಾಖೆ ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಶಾಸಕ ಅಲ್ಲಮಪ್ರಭು ಪಾಟೀಲ್, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಜಿಪಂ ಸಿಇಓ ಭಂವರ್‌ಸಿAಗ್ ಮೀನಾ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net