

ಬಾಗಲಕೋಟೆ: ಜಿಲ್ಲೆಯಲ್ಲಿ ಕೈಗೊಂಡ ಜಲಜೀವನ ಮಿಷನ್ ಹಾಗೂ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗಳ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ರ್ಪೂಗೊಳಿಸುವ ಮೂಲಕ ಜನರಿಗೆ ನೀರು ಪೂರೈಸುವ ಕಾರ್ಯವಾಗಬೇಕೆಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕರು ಹಾಗೂ ಪದನಿಮಿತ್ಯ ಸರಕಾರದ ಜಂಟಿ ಕಾರ್ಯದರ್ಶಿ ನಾಗೇಂದ್ರ ಪ್ರಸಾದ ಹೇಳಿದರು.
ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಶನಿವಾರ ಜಲಜೀವನ ಮಿಷನ್ ಹಾಗೂ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೊಜನೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕುಡಿಯುವ ನೀರಿನ ಯೋಜನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಿ ಗ್ರಾಮೀಣ ಕುಟುಂಬಗಳಿಗೆ ಕೃಷ್ಣಾ ನದಿಯಿಂದ ಶುದ್ದೀಕರಿಸಿದ ಶುದ್ದ ಕುಡಿಯುವ ನೀರನ್ನು ಸರಬರಾಜು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ ಮುಧೋಳ ತಾಲೂಕಿನ ಹಲಗಲಿ ಗ್ರಾಮವು ಜಲ ಜೀವನ ಮೀಷನ್ ಯೋಜನೆ ಯಶಸ್ವಿಯಾಗಿ ನಿರ್ವಹಿಸುತ್ತಿದೆ. ಈ ಮಾದರಿಯಲ್ಲಿ ಜಿಲ್ಲೆಯ ಆಯ್ದ 55 ಗ್ರಾಮಗಳನ್ನು ಗುರಿಸಿಕೊಳ್ಳಲಾಗಿದ್ದು, ಕುಡಿಯುವ ನೀರಿನ ಯೋಜನೆಯಾದ ಜಲ ಜೀವನ ಮಿಷನ್ ಯಶಸ್ವಿಯಾಗಿ ಮಾಡಲು ಮುಂದಾಗಿರುವುದಾಗಿ ತಿಳಿಸಿದರು ಅವರು ನೀರಿನ ಮೂಲಕ್ಕೆ ಸಮಸ್ಯೆ ಇಲ್ಲವೆಂದು ತಿಳಿಸಿದರು.
ಸರಕಾರ ಕುಡಿಯುವ ನೀರಿನ ಯೋಜನೆಗಳಿಗೆ ಸಾಕಷ್ಟು ಹಣ ಖರ್ಚು ಮಾಡುತ್ತಿದೆ. ಈ ಸರಕಾರದ ಹಣ ನಿಗದಿತ ಅವಧಿಯಲ್ಲಿ ಖರ್ಚು ಮಾಡಿ ಜನರಿಗೆ ನೀರು ಪೂರೈಸುವಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕಿದೆ. ಈ ಹಿನ್ನಲೆಯಲ್ಲಿ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಬಗ್ಗೆ ಪ್ರತಿ 15 ದಿನಗಳಿಗೊಮ್ಮೆ ಭೇಟಿ ನೀಡಿ ಕಾಮಗಾರಿ ವೀಕ್ಷಣೆ ಮಾಡಿ ಗುಣಮಟ್ಟದಿಂದ ಕೂಡಿರುವ ಬಗ್ಗೆ ಗಮನ ಹರಿಸಬೇಕು. ಆ ಬಗ್ಗೆ ಮಾಹಿತಿ ಛಾಯಾಚಿತ್ರದೊಂದಿಗೆ ಮಾಹಿತಿ ನೀಡಲು ತಿಳಿಸಿದರು. ಅರಣ್ಯ, ಲೋಕೋಪಯೋಗಿ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿಗಳಿಂದ ಬೇಗನೆ ಎನ್.ಓ.ಸಿ ಪಡೆದುಕೊಂಡು ಕಾಮಗಾರಿ ಪೂರ್ಣಗೊಳಿಸಲು ತಿಳಿಸಿದರು.
ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳು ಜಲ ಜೀವನ ಮಿಷನ್ ಪೂರ್ಣಗೊಂಡ ಕಾಮಗಾರಿಗಳನ್ನು ಹಸ್ತಾಂತರಿಸಿ ಕಾರ್ಯಾಚರಣೆ ನಿರ್ವಹಣೆ ನೀತಿ ಅಳವಡಿಸಿಕೊಳ್ಳುವ ಮೂಲಕ ಮುಂದಿನ ರೂಪುರೇಷೆಗಳಲ್ಲಿ ಒಂದಾದ 24/7 ಅನುಷ್ಠಾನಕ್ಕೆ ಮುಂದಾಗಲು ನಾಗೇಂದ್ರ ಪ್ರಸಾದ ಕರೆ ಕೊಟ್ಟರು.
ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮುಖ್ಯ ಅಭಿಯಂತರ ಏಜಾಜ್ ಹುಸೇನ್, ಉಪ ಕಾರ್ಯದರ್ಶಿ ಜಾಫರ್ ಶರೀಪ್ ಸುತಾರ, ಬೆಳಗಾವಿಯ ಅಧೀಕ್ಷಕ ಅಭಿಯಂತರ ಬಸವರಾಜ ಕುಂಬಾರ, ಉಪ ಅರಣ್ಯ ಸಂರಕ್ಷಣಾಧಿಕಾರಿ ರುಥ್ರೇನ್, ಜಿ.ಪಂ ಉಪ ಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ, ಸಹಾಯಕ ನಿರ್ದೇಶಕ ಕಾಂಬಳೆ, ಗ್ರಾಮೀಣ ಮತ್ತು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಆಕಾಶ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.