

ಚಿಟ್ಟಗುಪ್ಪ: ಬೇಸಿಗೆ ಧಗೆಯಿಂದ ತಾಪಮಾನದಲ್ಲಿ ಭಾರಿ ಏರಿಕೆಯಾಗಿದ್ದು, ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ತ್ವರಿತ ಸ್ಪಂದನೆ ಅಗತ್ಯವಿದೆ. ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಪಿಡಿಒಗಳು ಕೇಂದ್ರ ಸ್ಥಾನದಲ್ಲಿರಬೇಕು. ಎಲ್ಲಿಯೂ ನೀರಿನ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪಟ್ಟಣದ ತಾಪಂ ಕಚೇರಿ ಸಭಾಂಗಣದಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ವ್ಯಾಪ್ತಿಗೆ ಬರುವ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಕುರಿತು ಬುಧವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಬೇಸಿಗೆಯಲ್ಲಿ ಜನರಷ್ಟೇ ಅಲ್ಲ, ಜಾನುವಾರುಗಳೂ ನೀರಿನ ಕೊರತೆಯಿಂದ ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ವನ್ಯಜೀವಿಗಳೂ ದಾಹ ತೀರಿಸಿಕೊಳ್ಳಲು ಪರಿತಪಿಸುವಂತಹ ಪರಿಸ್ಥಿತಿ ಹಲವೆಡೆ ಸೃಷ್ಟಿಯಾಗುವ ಸಾಧ್ಯತೆ ಹೆಚ್ಚಿರುತ್ತದೆ. ಕಾರಣ ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಬೇಕು. ಗೋಶಾಲೆಗಳಲ್ಲಿ ಜಾನುವಾರುಗಳಿಗೆ ನೀರಿನ ಹಾಗೂ ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಗ್ರಾಪಂ ವತಿಯಿಂದ ಜಾನುವಾರುಗಳಿಗೆ ನೀರಿನ ತೊಟ್ಟಿ ನಿರ್ಮಾಣ ಮಾಡಿ ನೀರು ಸಂಗ್ರಹಿಸಿ ದನಕರುಗಳಿಗೆ ನೀರು ಪೂರೈಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀ ಬಿರಾದಾರ, ಕುಡಿಯುವ ನೀರು ನೈರ್ಮಲ್ಯ ಇಲಾಖೆ ಅಧಿಕಾರಿಗಳು, ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇದ್ದರು.
ಎಲ್ಲ ಪಿಡಿಒಗಳು ಹಾಗೂ ಸಂಬಂಧಿತ ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಬೇಕು. ಸಮಸ್ಯೆ ಕಂಡು ಬಂದಲ್ಲಿ ತಕ್ಷಣ ಕ್ರಮ ವಹಿಸಬೇಕು. ನಿರ್ಲಕ್ಷ್ಯ ಮಾಡಿದರೆ ಸಹಿಸುವುದಿಲ್ಲ.
| ಡಾ.ಶೈಲೇಂದ್ರ ಬೆಲ್ದಾಳೆ ಶಾಸಕ
ಬೇಸಿಗೆ ಇರುವುದರಿಂದ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಹಾಗೂ ಪೂರೈಕೆಯಲ್ಲಿ ಸಣ್ಣಪುಟ್ಟ ಸಮಸ್ಯೆ ಕಂಡು ಬಂದಲ್ಲಿ ತಕ್ಷಣವೇ ಕ್ರಮ ವಹಿಸಲು ಎಲ್ಲ ಪಿಡಿಒಗಳಿಗೆ ಸೂಚಿಸಲಾಗಿದೆ. ಈ ನಿಟ್ಟಿನಲ್ಲಿ ವಿಶೇಷ ನಿಗಾವಹಿಸಬೇಕು.
| ಲಕ್ಷ್ಮೀ ಬಿರಾದಾರ
ಇಒ ತಾಪಂ ಚಿಟಗುಪ್ಪ