ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಿ

Meeting
Published on

ಚಿತ್ರದುರ್ಗ: ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇದ್ದು, ಸಮಸ್ಯಾತ್ಮಕ ಗ್ರಾಮಗಳನ್ನು ತಕ್ಷಣ ಗುರುತಿಸಿ. ಮುಂದಿನ 6 ತಿಂಗಳವರೆಗೆ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಕ್ರಿಯಾಯೋಜನೆ ತಯಾರಿಸಿ, ಅಗತ್ಯ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಜಿ.ಆರ್.ಜೆ.ದಿವ್ಯಾಪ್ರಭು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಬರ ನಿರ್ವಹಣೆ ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿ, 2024ರ ಜನವರಿಯಿಂದ ಏಪ್ರಿಲ್ ತಿಂಗಳವರೆಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳನ್ನು ಗುರುತಿಸಿ, ಮುಂಜಾಗ್ರತಾ ಕ್ರಮವಾಗಿ ಬರ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ಜಿಲ್ಲೆಯಲ್ಲಿ ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಆದರೆ, ಮಳೆಯ ಕೊರತೆ ಕಾರಣದಿಂದ ಸಮಸ್ಯೆ ತಲೆದೋರಬಹುದು. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಈಗಿನಿಂದಲೇ ಅಗತ್ಯ ಸಿದ್ಧತೆ ಮಾಡಿಟ್ಟುಕೊಳ್ಳಿ. ಕೊಳವೆಬಾವಿಗಳ ಅವಶ್ಯಕತೆ ಇದ್ದಲ್ಲಿ ತಕ್ಷಣ ಕೊರೆಸಲು ನಿಗದಿತ ಸ್ಥಳಗಳನ್ನು ಗುರುತಿಸಿ. ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ, ಜಲಜೀವನ್ ಮಿಷನ್, ಗ್ರಾಪಂ 15ನೇ ಹಣಕಾಸು ಯೋಜನೆಯಡಿ ಇದಕ್ಕಾಗಿ ಅನುದಾನ ಬಳಸಿಕೊಳ್ಳಲು ಅವಕಾಶವಿದೆ ಎಂದರು.

ಆರ್‌ಒ ಘಟಕ ದುರಸ್ತಿಪಡಿಸಿ: ಪ್ರಸ್ತುತ ದಿನಗಳಲ್ಲಿ ಬಹಳಷ್ಟು ಜನರು ಶುದ್ಧ ಕುಡಿಯುವ ನೀರಿನ ಘಟಕಗಳ ನೀರನ್ನು ಬಳಸುತ್ತಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಹಾಳಾಗಿರುವ ಎಲ್ಲಾ ಆರ್‌ಒ ಘಟಕಗಳನ್ನು ತ್ವರಿತವಾಗಿ ದುರಸ್ತಿಪಡಿಸಬೇಕು ಎಂದು ತಾಕೀತು ಮಾಡಿದರು.

ಮೇವು ಲಭ್ಯತೆ ನಿಖರ ಮಾಹಿತಿ ನೀಡಿ: ಜಿಲ್ಲೆಯಲ್ಲಿ ಮೇವು ಲಭ್ಯತೆಯ ನಿಖರ ಮಾಹಿತಿ ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ನೀಡಬೇಕು. ಮುಂದಿನ 90 ದಿನಗಳಿಗೆ ಎಷ್ಟು ಮೇವು ಬೇಕು, ಬೇಡಿಕೆಗೆ ಅನುಗುಣವಾಗಿ ಗೋಶಾಲೆ ತೆರೆಯುವುದು ಸೇರಿ ಅಗತ್ಯ ಮೂಲಸೌಕರ್ಯಕ್ಕೆ ಸಿದ್ಧತೆ ಮಾಡಿಕೊಳ್ಳಿ. ಈ ವರದಿ ಬಹಳ ಮುಖ್ಯವಾಗಿದ್ದು, ಬರ ಪರಿಹಾರ ಕಾರ್ಯ ಕೈಗೊಳ್ಳಲು ಅನುಕೂಲವಾಗಲಿದೆ ಎಂದು ತಿಳಿಸಿದರು.

ಜಾಬ್‌ಕಾರ್ಡ್ ಮೇಳ ಆಯೋಜಿಸಿ: ಜಿಲ್ಲೆಯ ಜನರ ವಲಸೆ ತಪ್ಪಿಸುವ ನಿಟ್ಟಿನಲ್ಲಿ ನರೇಗಾದಲ್ಲಿ ಉದ್ಯೋಗ ನೀಡುವುದು ಬಹಳ ಮುಖ್ಯವಾಗಿದ್ದು, ಅರ್ಹರನ್ನು ನೋಂದಣಿ ಮಾಡಿಸಬೇಕು. ಈ ನಿಟ್ಟಿನಲ್ಲಿ ಜಾಬ್‌ಕಾರ್ಡ್ ಮೇಳ ಆಯೋಜಿಸಬೇಕು ಎಂದು ಹೇಳಿದರು.

ಚಳ್ಳಕೆರೆ ಹಾಗೂ ಮೊಳಕಾಲ್ಮುರು ತಾಲೂಕಿನಲ್ಲಿ ಜನರು ವಲಸೆ ಹೋಗುತ್ತಿರುವುದು ಗಮನಕ್ಕೆ ಬಂದಿದೆ. ಈ ಭಾಗಗಳಲ್ಲಿ ವಿಶೇಷವಾಗಿ ಜಾಬ್‌ಕಾರ್ಡ್ ನೋಂದಣಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

15 ದಿನಕ್ಕೊಮ್ಮೆ ನೀರಿನ ಪರೀಕ್ಷೆಗೆ ಸೂಚನೆ: ಪ್ರತಿ 15 ದಿನಕ್ಕೊಮ್ಮೆ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಗೆ ಒಳಪಡಿಸಬೇಕು. ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಅದರ ವರದಿ ಇಟ್ಟುಕೊಳ್ಳಬೇಕು. ಆರೋಗ್ಯ ಇಲಾಖೆಯಿಂದ ಮೈಕ್ರೋ ಬಯೋಲಾಜಿ ಟೆಸ್ಟ್, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯಿಂದ ಕೆಮಿಕಲ್ ಟೆಸ್ಟ್ ಮಾಡಿಸುವಂತೆ ದಿವ್ಯಾಪ್ರಭು ಸೂಚಿಸಿದರು.

ಜಿಪಂ ಸಿಇಒ ಎಸ್.ಜೆ.ಸೋಮಶೇಖರ್, ಎಡಿಸಿ ಬಿ.ಟಿ.ಕುಮಾರಸ್ವಾಮಿ, ಎಸಿ ಎಂ.ಕಾರ್ತಿಕ್, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಮಂಜುನಾಥ್, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ಬಾಬುರತ್ನ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net