ಕುಡಿವ ನೀರು ಪೂರೈಕೆ ಕೂಡಲೇ ಕ್ರಮ ವಹಿಸಿ

CTD 2 DC MEETNIG WATER,,--0003
Published on

ಚಿತ್ರದುರ್ಗ: ಜಿಲ್ಲೆಯ ನಗರ, ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶಗಳ ನಿವಾಸಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕೂಡಲೇ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬರ ನಿರ್ವಹಣೆ, ಕುಡಿವ ನೀರಿನ ಸಮಸ್ಯೆ ಕುರಿತು ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು.
ಜಿಲ್ಲೆಯ ಹಲವೆಡೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿರುವ ಕುರಿತು ದೂರುಗಳು ಬರುತ್ತಿದ್ದು, ಇದು ಪುನರಾವರ್ತನೆಯಾಗಬಾರದು ಎಂದು ಅಧಿಕಾರಿಗಳನ್ನು ಎಚ್ಚರಿಸಿದ ಅವರು, ಮಾನವೀಯ ನೆಲೆಯಲ್ಲಿ ಜವಾಬ್ದಾರಿಯಿಂದ ನೀರು ಒದಗಿಸುವ ಕೆಲಸ ಮಾಡಬೇಕು ಎಂದರು.
ಸಮಸ್ಯೆ ತಲೆದೋರಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರೊದಗಿಸಬೇಕು. ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಆನ್‌ಲೈನ್‌ನಲ್ಲಿ ನಿರ್ವಹಿಸಬೇಕು. ಟ್ಯಾಂಕರ್‌ಗಳಿಗೆ ಜಿಪಿಎಸ್ ಅಳವಡಿಸಿರಬೇಕು. ಟ್ಯಾಂಕರ್ ಮೂಲಕ ನೀರು ಪೂರೈಸುವ ವ್ಯವಸ್ಥಿತ ನಿರ್ವಹಣೆಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.
ಬಿಸಿಲು ಹೆಚ್ಚಳದಿಂದಾಗಿ ಉಂಟಾಗುವ ಆರೋಗ್ಯ ಸಮಸ್ಯೆಗಳ ಕಡೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಜನರಲ್ಲಿ ತಿಳಿವಳಿಕೆ ಮೂಡಿಸಬೇಕು. ಗ್ರಾಮಗಳಲ್ಲಿ ಸ್ವಚ್ಛತೆಗೆ ನಿಗಾ ವಹಿಸಬೇಕು ಎಂದರು.
ಜಿಪಂ ಸಿಇಒ ಎಸ್.ಜೆ. ಸೋಮಶೇಖರ್, ಎಡಿಸಿ ಬಿ.ಟಿ. ಕುಮಾರಸ್ವಾಮಿ, ಎಸಿ ಎಂ. ಕಾರ್ತೀಕ್, ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆ ಇಇ ಬಸವನಗೌಡ ಮೇಟಿ ಪಾಟೀಲ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಬಿ. ಮಂಜುನಾಥ್, ತಹಸೀಲ್ದಾರ್‌ಗಳಾದ ಡಾ.ನಾಗವೇಣಿ, ಬೀಬಿ ಫಾತಿಮಾ ಮತ್ತಿತರ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net