ಮದ್ದೂರು: ತಾಲೂಕಿನ ಸೋಮನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಲುಷಿತ ನೀರು ಕುಡಿದು ಕುರಿಗಳು ಮೃತಪಟ್ಟ ಹಿನ್ನೆಲೆಯಲ್ಲಿ ಶಾಸಕ ಕೆ.ಎಂ.ಉದಯ್ 2 ಲಕ್ಷ ರೂ.ಗಳ ಪರಿಹಾರ ಮೊತ್ತವನ್ನು ವೈಯಕ್ತಿಕವಾಗಿ ಕುರಿಗಾಹಿ ರಾಜಣ್ಣ ಕುಟುಂಬಕ್ಕೆ ವಿತರಿಸಿದರು.
ಮುಂದಿನ ದಿನಗಳಲ್ಲಿ ಸರ್ಕಾರದಿಂದಲೂ ಸೂಕ್ತ ಪರಿಹಾರ ಸಿಗುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕುಟುಂಬಕ್ಕೆ ಧೈರ್ಯ ತುಂಬಿದರು. ಸೋಮನಹಳ್ಳಿ ವಿಎಸ್‌ಎನ್‌ಬಿ ಅಧ್ಯಕ್ಷ ಸಿ.ಟಿ.ಶಂಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಲುವರಾಜು, ಕದಲೂರು ಗ್ರಾಪಂ ಅಧ್ಯಕ್ಷ ತಿಮ್ಮೇಗೌಡ, ಸ್ಥಳೀಯ ಮುಖಂಡರು ಹಾಜರಿದ್ದರು.
ಘಟನೆ ಸಂಬಂಧ ಸತ್ತ ಕುರಿಗಳ ಮರಣೋತ್ತರ ಪರೀಕ್ಷೆ ನಡೆಸಿದ ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಗೋವಿಂದು ಮತ್ತು ಪಶು ವೈದ್ಯರ ತಂಡ ಸತ್ತ ಕುರಿಗಳ ಕೆಲ ಭಾಗಗಳನ್ನು ಸಂಗ್ರಹಿಸಿ ಹೆಚ್ಚಿನ ಮಾಹಿತಿಗಾಗಿ ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ.