

ಸರಗೂರು: ತಾಲೂಕಿನ ಇಟ್ನಾ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಕೂಲಿಕಾರರಿಗೆ ಆರೋಗ್ಯ ಉಚಿತ ತಪಾಸಣಾ ಶಿಬಿರ ನಡೆಯಿತು.
ನರೇಗಾ ಯೋಜನೆಯಡಿ ಶುಕ್ರವಾರ ಹಮ್ಮಿಕೊಂಡಿದ್ದ ಶಿಬಿರದಲ್ಲಿ ಕೂಲಿಕಾರ್ಮಿಕರು, ಸಾರ್ವಜನಿಕರು ಸೇರಿದಂತೆ 220 ಜನರಿಗೆ ತಪಾಸಣೆ ಮಾಡಲಾಯಿತು. ರಕ್ತದೊತ್ತಡ ಮತ್ತು ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವ 43 ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸರಗೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಳುಹಿಸಲಾಯಿತು.
ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ಮಾತನಾಡಿ, ಗ್ರಾಮದ ಜನರಿಗಾಗಿ ಆರೋಗ್ಯ ಉಚಿತ ತಪಾಸಣೆ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳಬೇಕು. ರೋಗ ಪತ್ತೆಯಾದರೆ ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ನಾಗೇಂದ್ರ, ರವಿರಾಜ್, ಸಮುದಾಯ ಆರೋಗ್ಯ ಅಧಿಕಾರಿ ಮಂಜುಳಾ, ಸ್ವಯಂ ಸೇವಕ ಚಿಕ್ಕಮಾದು ಸೇರಿದಂತೆ ಗ್ರಾಮಸ್ಥರು ಇದ್ದರು.