

ಚಾಮರಾಜನಗರ: ಪಾಲಕರ ನಿರ್ಲಕ್ಷ್ಯ, ಬಡತನ, ಜೀವನ ನಿರ್ವಹಣೆ ಹಾಗೂ ಇನ್ನಿತರೆ ಕಾರಣಗಳಿಂದ ಇಂದಿಗೂ ಹಲವಾರು ಬಾಲಕರು ಶಿಕ್ಷಣದಿಂದ ವಂಚಿತರಾಗಿ ದುಡಿಮೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಜಿಲ್ಲೆಯ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ನೀಡಿರುವ ಮಾಹಿತಿಯ ಪ್ರಕಾರ ಈ ವರ್ಷದ ಏಪ್ರಿಲ್ ನಿಂದ ಸೆಪ್ಟೆಂಬರ್ ವರೆಗೆ ವಿವಿಧ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದ 14 ಬಾಲಕಾರ್ಮಿಕರನ್ನು ಪತ್ತೆಮಾಡಲಾಗಿದೆ. ಚಾಮರಾಜನಗರ 6, ಗುಂಡ್ಲುಪೇಟೆ 6 ಮತ್ತು ಹನೂರು ತಾಲೂಕಿನ ವ್ಯಾಪ್ತಿಯಲ್ಲಿ 2 ಬಾಲಕಾರ್ಮಿಕರು ಪತ್ತೆಯಾಗಿದ್ದಾರೆ. ಶಿಕ್ಷಣದಿಂದ ವಂಚಿತರಾಗಿ ಬಡತನ, ಕುಟುಂಬದ ಸಮಸ್ಯೆ ಹಾಗೂ ಇನ್ನಿತರೆ ಸಮಸ್ಯೆಗಳಿಂದ ಹೋಟೆಲ್, ಗ್ಯಾರೇಜ್, ದಿನಸಿ ಅಂಗಡಿ ಹಾಗೂ ಇತರೆ ಕಡೆಗಳಲ್ಲಿ ಕೆಲಸ ಮಾಡುತ್ತಿದ್ದ ಮಕ್ಕಳನ್ನು ಗುರುತಿಸಿ, ಅವರನ್ನು ಕೆಲಸದಿಂದ ಬಿಡಿಸಿ ಪುನರ್ವಸತಿಗೊಳಿಸಲಾಗಿದೆ. ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡು ದುಡಿಸುತ್ತಿದ್ದ ಮಾಲೀಕರ ವಿರುದ್ಧ ಈಗಾಗಲೇ ಒಂದು ಎ್ಐಆರ್ ದಾಖಲಿಸಲಾಗಿದ್ದು, ಉಳಿದ ಪ್ರಕರಣಗಳಲ್ಲಿ ಮಾಲೀಕರ ವಿರುದ್ಧ ಮೊಕದ್ದಮೆ ಹೂಡಲು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಸಿದ್ಧತೆ ಮಾಡಲಾಗಿದೆ. ಬಾಲ್ಯಾವಸ್ಥೆ ಮತ್ತು ಕಿಶೋರವಸ್ಥೆ ಕಾರ್ಮಿಕ ಪದ್ಧತಿಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ, ಬಾಲಕಾರ್ಮಿಕ ಯೋಜನಾ ಸೊಸೈಟಿ ವತಿಯಿಂದ ಸಾರ್ವಜನಿಕರಿಗೆ, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಅದಾಗ್ಯೂ ಬಾಲಕಾರ್ಮಿಕರು ಪತ್ತೆಯಾಗುತ್ತಲೇ ಇದ್ದಾರೆ. ಪಾಲಕರ ಸೂಕ್ತ ಮಾರ್ಗದರ್ಶನವಿಲ್ಲದೇ, ಶಿಕ್ಷಣದಿಂದ ವಂಚಿತರಾಗಿ ಬಾಲಕಾರ್ಮಿಕರಾಗುತ್ತಿದ್ದಾರೆ. ಉತ್ತಮ ಬದುಕನ್ನು ರೂಪಿಸಿಕೊಳ್ಳಬೇಕಿದ್ದ ಬಾಲಕರು ದುಡಿಮೆಯ ಹಾದಿಯನ್ನು ಹಿಡಿದು ತಮ್ಮ ಬದುಕನ್ನು ನಾಶಮಾಡಿಕೊಳ್ಳುತ್ತಿದ್ದಾರೆ. ಈ ನಿಟ್ಟನಲ್ಲಿ ಸಾರ್ವಜನಿಕರಲ್ಲಿ ಮತ್ತಷ್ಟು ಜಾಗೃತಿ ನೀಡುವುದು ಅಗತ್ಯವಾಗಿದೆ.
6 ತಿಂಗಳಲ್ಲಿ 14 ಪ್ರಕರಣ:
ಈ ವರ್ಷದಲ್ಲಿ ಕೇವಲ ಆರು ತಿಂಗಳಲ್ಲಿ 14 ಬಾಲಕಾರ್ಮಿಕರು ಪತ್ತೆಯಾಗಿದ್ದಾರೆ. ಅದಲ್ಲದೇ 2022-23 ನೇ ಸಾಲಿನಲ್ಲಿ ಸುಮಾರು 242 ಕಡೆಗಳಲ್ಲಿ ಅಧಿಕಾರಿಗಳು ತಪಾಸಣೆ ನಡೆಸಿ 22 ಬಾಲಕಾರ್ಮಿಕರನ್ನು ಪತ್ತೆ ಹಚ್ಚಿದ್ದು, 15 ಪ್ರಕರಣಗಳಲ್ಲಿ ದೂರು ದಾಖಲಾಗಿತ್ತು. 2023-24 ಸಾಲಿನಲ್ಲಿ ಸುಮಾರು 523 ಕಡೆಗಳಲ್ಲಿ ದಾಳಿ ನಡೆಸಿ 29 ಬಾಲಕಾರ್ಮಿಕರನ್ನು ಪತ್ತೆ ಹಚ್ಚಿದ್ದು, 17 ಪ್ರಕರಣಗಳಲ್ಲಿ ದೂರು ದಾಖಲಾಗಿತ್ತು.
ನಿರ್ಮೂಲನೆ ಸಾಧ್ಯವಾಗಿಲ್ಲ:
ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ)ಕಾಯ್ದೆ 1986 ರ ಅನ್ವಯ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಅಪರಾಧಕ್ಕೆ ಮಾಲೀಕರಿಗೆ 6 ತಿಂಗಳಿಂದ 2 ವರ್ಷಗಳ ವರೆಗೆ ಜೈಲುಶಿಕ್ಷೆ ಮತ್ತು ದಂಡವನ್ನು ವಿಧಿಸಲಾಗುತ್ತದೆ. ಅದಲ್ಲದೇ ಬಾಲ ಕಾರ್ಮಿಕ ಪದ್ಧತಿಯ ವಿರುದ್ಧ ನಿರಂತರವಾಗಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದರೂ, ಬಾಲ ಕಾರ್ಮಿಕ ಪದ್ಧತಿಯ ನಿರ್ಮೂಲನೆ ಸಾಧ್ಯವಾಗುತ್ತಿಲ್ಲ. ಬಡತನ ಮತ್ತು ಇನ್ನಿತರೆ ಸಮಸ್ಯೆಗಳಿಂದ ಪಾಲಕರು ಮಕ್ಕಳನ್ನು ಕೆಲಸಕ್ಕೆ ಸೇರಿಸುತ್ತಾರೆ. ಬಹುತೇಕ ಪ್ರಕರಣಗಳಲ್ಲಿ ಈ ಮಕ್ಕಳಿಗೆ ತಂದೆ ಅಥವಾ ತಾಯಿ ಇರುವುದಿಲ್ಲ. ಜೀವನ ಸಾಗಿಸುವುದಕ್ಕಾಗಿ ದುಡಿಯುವುದು ಅನಿವಾರ್ಯ ಎಂಬ ಸ್ಥಿತಿ ಇರುತ್ತದೆ. ಅಧಿಕಾರಿಗಳು ಕಾರ್ಯಾಚರಣೆ ಮಾಡಿದ ಸಂದರ್ಭದಲ್ಲಿ ಬಾಲಕಾರ್ಮಿಕರು ಸಿಕ್ಕಿದರೆ ಅವರನ್ನು ಉದ್ಯೋಗದಿಂದ ಬಿಡಿಸಿ ಶಾಲೆಗೆ ಸೇರಿಸಲಾಗುತ್ತದೆ. ಅದಲ್ಲದೇ ಅಂತವರ ಕುಟುಂಬಕ್ಕೆ ಅನೇಕ ಸೌಕರ್ಯಗಳನ್ನು ಕಲ್ಪಿಸಲಾಗುತ್ತದೆ. ಕೆಲವು ಕಡೆಗಳಲ್ಲಿ ಬಾಲಕಾರ್ಮಿಕರ ಬಗ್ಗೆ ಮಾಹಿತಿ ನೀಡದೆ ಇರುವುದು ಕೂಡ ಇದು ನಿಮೂರ್ಲನೆಯಾಗದಿರಲು ಕಾರಣವಾಗಿದೆ.
ಮಾಲೀಕರಿಗೆ ದಂಡ:
ಬಾಲಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡು ದುಡಿಸುತ್ತಿದ್ದ ಮಾಲೀಕರಿಗೆ, ಈ 6 ತಿಂಗಳಲ್ಲಿ 1.30 ಲಕ್ಷ ರೂ. ದಂಡವನ್ನು ವಿಧಿಸಲಾಗಿದೆ. ಈ ಹಣವನ್ನು ಪುನರ್ವಸತಿಗೊಂಡ ಬಾಲಕಾರ್ಮಿಕ ಮಕ್ಕಳ ಹೆಸರಿಗೆ ನಿಶ್ಚಿತ ಠೇವಣಿ ಇಡಲು ಕ್ರಮವಹಿಸಲಾಗಿದೆ. ಬಾಲಕಾರ್ಮಿಕತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಬಾಲಕಾರ್ಮಿಕ ಯೋಜನಾ ಸೊಸೈಟಿ ವತಿಯಿಂದ 6 ತಿಂಗಳ ಅವಧಿಯಲ್ಲಿ ಒಟ್ಟು 16 ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಗ್ರಾಮೀಣ ಪ್ರದೇಶದಲ್ಲೂ ಸಹ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ, ಕಾರ್ಮಿಕ ಪದ್ಧತಿಯನ್ನು ತಡೆಗಟ್ಟುವ ದೃಷ್ಟಿಯಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಪಂಚಾಯತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ. ಚಾಮರಾಜನಗರ, ಯಳಂದೂರು ತಾಲೂಕಿನಲ್ಲಿ ಈಗಾಗಲೇ ತರಬೇತಿಯನ್ನು ನಡೆಸಲಾಗಿದ್ದು, ಉಳಿದ ತಾಲೂಕುಗಳಲ್ಲಿ ಮತ್ತಷ್ಟು ತರಬೇತಿ ಕಾರ್ಯಕ್ರಮಗಳನ್ನು ನಡೆಸಲು ಸಿದ್ಧತೆ ಮಾಡಲಾಗಿದೆ.
ಮಾಹಿತಿ ನೀಡಿ:
ಬಾಲಕಾರ್ಮಿಕರು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ-1098, ಕಾರ್ಮಿಕ ಸಹಾಯವಾಣಿ-155214 ಗೆ ಕರೆಮಾಡಿ ಮಾಹಿತಿ ನೀಡಬಹುದಾಗಿದೆ. ಅದಲ್ಲದೇ ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ರೇಷ್ಮೆ ಇಲಾಖೆ, ಸಮಾಜಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೃಷಿ ಇಲಾಖೆ ಅಧಿಕಾರಿಗಳಿಗೆ ದೂರು ಸಲ್ಲಿಸಬಹುದಾಗಿದೆ.