

ಬಾಗಲಕೋಟೆ: ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆಗಳ ಕುರಿತು ಗುರುವಾರ ನಡೆದ ವಿಡಿಯೋ ಸಂವಾದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆದುಕೊಂಡರು.
ಸಂವಾದ ಸಭೆಯಲ್ಲಿ ಪ್ರಸಕ್ತ ವರ್ಷ ವಾಡಿಕೆಗಿಂತ ಮಳೆಯ ಹೆಚ್ಚಾಗಿದ್ದು, ಕೃಷಿ ಚಟುವಟಿಕೆಗಳು ಪ್ರಾರಂಭವಾಗಿವೆ. ಚುನಾವಣಾ ನೀತಿ ಸಂಹಿತೆ ಜೂನ್ 6 ವರೆಗೆ ಇದ್ದು, ನೀತಿ ಸಂಹಿತೆ ಸಡಿಲಿಸಿದೆ. ತುರ್ತು ಕೆಲಸಗಳಿಗೆ ಗಮನ ಹರಿಸಿ ಅಭಿವೃದ್ದಿಯತ್ತ ಗಮನ ಹರಿಸಿ ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡುವಂತೆ ಸೂಚನೆ ನೀಡಿದ್ದಾರೆ. ಟೆಂಡರ ಕರೆಯಲು ಯಾವುದೇ ನೀತಿ ಸಂಹಿತೆ ಅಡ್ಡಿ ಬರುವದಿಲ್ಲ. ಟೆಂಡರ ಕರೆದು ಕಾರ್ಯಾದೇಶ ಹೊರಡಿಸುವಲ್ಲಿ ವಿಳಂಬ ಮಾಡಿದಲ್ಲಿ ಅಭಿವೃದ್ದಿಯಲ್ಲಿ ವಿಳಂಬ ಮಾಡಿದಂತಾಗುತ್ತದೆ ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ತಿಳಿಸಿದರು.
ವಾಡಿಕೆಗಿಂತ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಪ್ರವಾಹ ಸಂಭವಿಸುವ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮುಜಾಗ್ರತಾ ಕ್ರಮಕೈಗೊಳ್ಳಲು ಸೂಚಿಸಿದರು.
ಜಿಲ್ಲೆಯ ಬರ ಮತ್ತು ಕೃಷಿ ಚಟವಟಿಕೆಗಳ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅವರು ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ. ಈ ಕುರಿತು ಅಧಿಕಾರಿಗಳೊಂದಿಗೆ ಸಭೆ ಕೂಡಾ ಮಾಡಲಾಗಿದ್ದು, ಸಮರ್ಪಕ ಬೀಜ ಮತ್ತು ಗೊಬ್ಬರ ಪೂರೈಕೆಗೆ ದಾಸ್ತಾನು ಲಭ್ಯವಿದೆ. ಅಲ್ಲದೇ ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಅಭಾವ ಸೃಷ್ಟಿಯಾಗದಂತೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರೈತ ಸಂಪರ್ಕ ಕೇಂದ್ರಗಳಿಗೆ ಆಗಾಗ್ಗೆ ಭೇಟಿ ನೀಡಿ ದಾಸ್ತಾನು ಪರಿಶೀಲಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಕುಡಿಯುವ ನೀರಿಗೆ ಸಂಬಂಧಿಸಿದಂತೆ ಗ್ರಾಮೀಣಭಾಗದಲ್ಲಿ ನೀರಿನ ತೊಂದರೆಯಾಗದಂತೆ 1045 ಖಾಸಗಿ ಕೊಳವೆಬಾವಿಗಳನ್ನು ಗುರುತಿಸಿಕೊಂಡಿದ್ದು, ಸಮಸ್ಯೆ ಬಂದಲ್ಲಿ ನೀರು ಪೂರೈಸಲು ಸಿದ್ದತೆ ಮಾಡಿಕೊಳ್ಳಲಾಗಿದೆ. ನಗರ ಪ್ರದೇಶಕ್ಕೆ ಸಂಬಂಧಿಸಿದಂತೆ ರಬಕವಿ-ಬನಹಟ್ಟಿ, ಜಮಖಂಡಿ ತೇರದಾಳ ಭಾಗದಲ್ಲಿ ಮೇ ಮಾಹೆಯಲ್ಲಿ ನೀರಿನ ತೊಂದರೆ ಇರುವುದಿಲ್ಲ. ಜೂನ್ ಮಾಹೆಯಲ್ಲಿ ಖಾಸಗಿ ಕೊಳವೆಭಾವಿಯಿಂದ ನೀರು ಪೂರೈಕೆ ಕ್ರಮವಹಿಸಲಾಗಿದ್ದು, ಅಗತ್ಯ ಬಿದ್ದಲ್ಲಿ ನೀರಿನ ಲಭ್ಯತೆಗೆ ಅನುಗುಣವಾಗಿ ಬೋರವೆಲ್ ಕೊರೆಯಿಸಲಾಗುವುದು. ಬರ ನಿರ್ವಹಣೆಯನ್ನು ಸಮರ್ಥವಾಗಿ ನಿಭಾಯಿಸಲು ಪ್ರತಿ ಗುರುವಾರ ಅಧಿಕಾರಿಗಳೊಂದಿಗೆ ಸಭೆ ಸಹ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಸದ್ಯ 16 ಕೋಟಿ ರೂ. ಇದ್ದು, ಪ್ರತಿ ತಾಲೂಕಿಗೆ ಈಗಾಗಲೇ 1 ಕೋಟಿ ರೂ.ಗಳ ಸಹ ನೀಡಲಾಗಿದೆ ಎಂದು ತಿಳಿಸಿದರು. ಸಾರ್ವಜನಿಕರಿಗೆ ಸಮರ್ಪಕ ಕುಡಿಯುವ ನೀರು ಪೂರೈಸಬೇಕು. ಕಲುಷಿತ ನೀರು ಪೂರೈಕೆಯಾಗದಂತೆ ಮುಂಜಾಗ್ರತಾ ಕ್ರಮಜರುಗಲಿಸಲು ತಿಳಿಸಿದ ಮುಖ್ಯಮಂತ್ರಿಗಳ ಸೂಚನೆಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಈ ಕುರಿತು ಕ್ರಮ ಜರುಗಿಸಲಾಗುವುದೆಂದು ತಿಳಿಸಿದರು.
ಸಂವಾದ ಸಭೆಯಲ್ಲಿ ಜಿಲ್ಲಾ ಪಂಚಾಯುತ ಸಿಇಓ ಶಶಿಧರ ಕುರೇರ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಜಿ.ಪಂ ಉಪಕಾರ್ಯದರ್ಶಿ ಅಮರೇಶ ನಾಯಕ, ಜಂಟಿ ಕೃಷಿ ನಿರ್ದೇಶಕ ಲಕ್ಷ್ಮಣ ಕಳ್ಳೇನ್ನವರ, ತೋಟಗಾರಿಕೆ ಉಪನಿರ್ದೇಶಕ ರವೀಂದ್ರ ಹಕಾಟೆ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ವಿಜಯ ಮೆಕ್ಕಳಕಿ, ಉಪವಿಭಾಗಾಧಿಕಾರಿಗಳಾದ ಸಂತೋಷ ಜಗಲಾಸರ, ಸಂತೋಷ ಕಾಮಗೌಡ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.