

ಕುಶಾಲನಗರ: ಕೃಷ್ಣಮೃಗದ ಚರ್ಮ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಸಿಬ್ಬಂದಿ ಬಂಧಿಸಿದ್ದಾರೆ. ಚಿತ್ರದುರ್ಗದ ನಿವಾಸಿಗಳಾದ ನರಸಿಂಹಮೂರ್ತಿ, ನಾಗರಾಜು ಬಂಧಿತರು.
ಕುಶಾಲನಗರದ ಕಾರ್ಯಪ್ಪ ವೃತ್ತದಿಂದ ಬುಧವಾರ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ತೆರಳುವ ರಸ್ತೆಯಲ್ಲಿ ಆರೋಪಿಗಳು ಕೃಷ್ಣಮೃಗದ ಚರ್ಮವನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿ ದಾಳಿ ನಡೆಸಿದರು. ಬಂಧಿತರಿಂದ ಕೃಷ್ಣಮೃಗದ ಚರ್ಮ ವಶಕ್ಕೆ ಪಡೆಯಲಾಗಿದೆ.
ಸಿಐಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ.ಶರತ್‌ಚಂದ್ರ ನಿರ್ದೇಶನದ ಮೇರೆಗೆ ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಅಧೀಕ್ಷಕ ಕೆ.ಬಿ.ವಿಶ್ವನಾಥ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿಎಸ್‌ಐ ಸಿ.ಯು.ಸವಿ, ಸಿಬ್ಬಂದಿ ಶೇಖರ್, ರಾಘವೇಂದ್ರ, ಯೋಗೇಶ್, ಮೋಹನ, ಸ್ವಾಮಿ, ಮಂಜುನಾಥ ಪಾಲ್ಗೊಂಡಿದ್ದರು.