ಕೃಷ್ಣಾ ತೀರದಲ್ಲಿ ಮುನ್ನೆಚ್ಚರಿಕೆ ಕ್ರಮ

13Manju11
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪ ವಿಭಾಗದ ವಿವಿಧ ತಾಲೂಕುಗಳ ಕೃಷ್ಣಾ ನದಿ ತೀರದ ಗ್ರಾಮಗಳಿಗೆ ಬುಧವಾರ ಡಿಸಿ ನಿತೇಶ ಪಾಟೀಲ, ಸಿಇಒ ದರ್ಶನ್ ಎಚ್.ವಿ. ಭೇಟಿ ನೀಡಿ ಪರಿಶೀಲಿಸಿದರು. ಎಸಿ ಸಂತೋಷ ಕಾಮಗೌಡ ಇದ್ದರು.
Published on

ಬೆಳಗಾವಿ/ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮತ್ತು ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ನದಿಗಳಲ್ಲಿ ನೀರಿನ ಮಟ್ಟದ ಏರಿಕೆಯಾಗುತ್ತಿದೆ. ಹಾಗಾಗಿ, ನದಿ ತೀರದ ಗ್ರಾಮಗಳು ಹಾಗೂ ಸೇತುವೆಗಳ ಬಗ್ಗೆ ನಿರಂತರ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದರು.

ಕಳೆದ ನಾಲ್ಕೈದು ದಿನಗಳಿಂದ ಜಿಲ್ಲಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಚಿಕ್ಕೋಡಿ ಉಪ ವಿಭಾಗದ ವಿವಿಧ ತಾಲೂಕುಗಳ ಕೃಷ್ಣಾ ನದಿತೀರದ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ನೆರೆಯ ಮಹಾರಾಷ್ಟ್ರದ ಜಲಾಶಯಗಳು ಇದುವರೆಗೆ ಸಂಪೂರ್ಣ ಭರ್ತಿಯಾಗಿಲ್ಲ. ಸದ್ಯಕ್ಕೆ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉದ್ಭವಿಸಿರುವುದಿಲ್ಲ. ಆದ್ದರಿಂದ ನದಿತೀರದ ಗ್ರಾಮಸ್ಥರು ಆತಂಕಪಡುವ ಅಗತ್ಯವಿಲ್ಲ. ಆದಾಗ್ಯೂ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ತುರ್ತು ಸಂದರ್ಭದಲ್ಲಿ
ಎನ್‌ಡಿಆರ್‌ಎಫ್ ಹಾಗೂ ಅಗ್ನಿಶಾಕಮ ದಳದ ಸಮನ್ವಯದೊಂದಿಗೆ ಜನರ ರಕ್ಷಣಾ ಕಾರ್ಯಾಚರಣೆ ನಡೆಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. 30ಕ್ಕೂ ಅಧಿಕ ಬೋಟ್ ಸಜ್ಜುಗೊಳಿಸಲಾಗಿದೆ ಎಂದರು.

ಚಿಕ್ಕೋಡಿ, ಕಾಗವಾಡ, ಅಥಣಿ, ರಾಯಬಾಗ ಸೇರಿದ ಪ್ರವಾಹ ಅಂಚಿನಲ್ಲಿರುವ ಎಲ್ಲ ತಾಲೂಕುಗಳಿಗೆ ಭೇಟಿ ನೀಡಲಾಗುತ್ತಿದೆ. ಈಗಾಗಲೇ ವೇದಗಂಗಾ, ದೂಧಗಂಗಾ ನದಿಗಳ ನೀರಿನ ಮಟ್ಟವನ್ನು ಪರಿಶೀಲನೆ ಮಾಡಲಾಗಿದೆ. ಸದ್ಯದ ಪರಿಹಾರವಾಗಿ ಮನೆಗಳಿಗೆ ನೀರು ನುಗ್ಗಿದರೆ 10 ಸಾವಿರ ಪರಿಹಾರ ನೀಡಲಾಗುತ್ತಿದೆ. ಅದೇ ರೀತಿ ಸಂಪೂರ್ಣ ಹಾನಿಯಾದ ಮನೆಗಳಿಗೆ 5 ಲಕ್ಷ ರೂ.ಪರಿಹಾರ ನೀಡಲಾಗುವುದು. ಸಮೀಕ್ಷೆ ವರದಿಯ ಪ್ರಕಾರ ಜೂನ್ ಹಾಗೂ ಜುಲೈನಲ್ಲಿ 317 ಮನೆಗಳು ಹಾನಿಯಾಗಿದೆ ಎಂದರು.

ನದಿ ಪ್ರವಾಹ ಉಂಟಾಗುವ ಗ್ರಾಮಗಳಲ್ಲಿಯೇ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳೀಯ ಶಾಲೆಗಳನ್ನು ಕಾಳಜಿ ಕೇಂದ್ರಗಳನ್ನಾಗಿ ಬಳಸಿಕೊಳ್ಳಲಾಗುತ್ತಿದೆ. ಪ್ರವಾಹ ಸಂಭಾವ್ಯ ಇರುವ ಸ್ಥಳಗಳಿಗೆ ಹಾಗೂ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ, ವ್ಯವಸ್ಥೆ ಪರಿಶೀಲನೆ ಮಾಡಲಾಗುತ್ತಿದೆ. ಶಾಲಾ ಕಟ್ಟಡಗಳ ದುರಸ್ತಿ ಮತ್ತು ಮೂಲಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿದ್ದು, ಕಾಳಜಿ ಕೇಂದ್ರಗಳ ಸ್ಥಾಪನೆಗೆ ಅಗತ್ಯವಾದ ಸೌಲಭ್ಯ ಕೂಡ ತಕ್ಷಣವೇ ಒದಗಿಸಲು ಅನುಕೂಲವಾಗುವಂತೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಒಟ್ಟಿನಲ್ಲಿ ಮಹಾರಾಷ್ಟ್ರದ ಕೊಯ್ನ ಜಲಾಶಯ ಶೇ.38 ಮಾತ್ರ ಭರ್ತಿಯಾಗಿದೆ. ಇಲ್ಲಿಯವರೆಗೆ ಮಹಾರಾಷ್ಟ್ರದ ಜಲಾಶಯದಿಂದ ನೀರು ಬಿಡುತ್ತಿಲ್ಲ. ಆದರೆ
ಮುಂದಿನ ದಿನಗಳಲ್ಲಿ ಜಲಾಶಯಗಳು ಪೂರ್ಣ ಪ್ರಮಾಣ ಭರ್ತಿಯಾಗಿ, 2 .90 ಲಕ್ಷ ಕ್ಯೂಸೆಕ್‌ಗಿಂತ ಹೆಚ್ಚು ನೀರು ಬಂದರೆ ಪ್ರವಾಹ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ ಎಂದು ಹೇಳಿದರು. ಜಿಪಂ ಸಿಇಒ ದರ್ಶನ್ ಎಚ್.ವಿ.,ಚಿಕ್ಕೋಡಿ ಉಪ ವಿಭಾಗಾಧಿಕಾರಿ ಸಂತೋಷ ಕಾಮಗೌಡ, ತಾಲೂಕು ತಹಸೀಲ್ದಾರ್‌ಗಳು, ಗ್ರಾಮ ಲೆಕ್ಕಾಧಿಕಾರಿಗಳು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net