

ಮೈಸೂರು: ಮುಂದಿನ ವರ್ಷ ಶತಮಾನೋತ್ಸವ ಆಚರಿಸಲಿರುವ ನಗರದ ಕೆ.ಆರ್.ಆಸ್ಪತ್ರೆ ಅಭಿವೃದ್ಧಿಗೆ ಅನುದಾನ ನೀಡುವ ಮೂಲಕ ರಾಜ್ಯದ ಮಾದರಿ ಆಸ್ಪತ್ರೆಯಾಗಿ ರೂಪಿಸುವಂತೆ ಶಾಸಕ ಟಿ.ಎಸ್.ಶ್ರೀವತ್ಸ ಸರ್ಕಾರವನ್ನು ಕೋರಿದ್ದಾರೆ.
ಬಜೆಟ್ ಅಧಿವೇಶನದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಮೀಸಲಿಡಬೇಕು. ಇತ್ತೀಚೆಗೆ ಮಂಡಿಸಿರುವ ಆಯವ್ಯಯದಲ್ಲಿ ಚಿತ್ರನಗರಿ ನಿರ್ಮಾಣ ಘೋಷಿಸಲಾಗಿದೆ. ಇದು ಪ್ರವಾಸೋದ್ಯಮ ಬೆಳವಣಿಗೆಗೆ ಪೂರಕವಾಗಿದೆ. ಆದರೆ ಮೈಸೂರು ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆ ಸಂಬಂಧ ಯಾವುದೇ ಪ್ರಸ್ತಾಪವಿಲ್ಲ. ಈ ಬಗ್ಗೆ ಸರ್ಕಾರ ಆದ್ಯತೆ ಮೇರೆಗೆ ಗಮನಹರಿಸಬೇಕು ಎಂದು ಒತ್ತಾಯಿಸಿದರು.
ಪಾರಂಪರಿಕ ಕಟ್ಟಡಗಳಾದ ಲ್ಯಾನ್ಸ್‌ಡೌನ್, ದೇವರಾಜ ಮಾರುಕಟ್ಟೆ, ವಾಣಿವಿಲಾಸ ಮಾರುಕಟ್ಟೆ, ಎಂ.ಜಿ.ರಸ್ತೆ ಮಾರುಕಟ್ಟೆ ಅಭಿವೃದ್ಧಿಗೆ ಅನುದಾನ ನೀಡಬೇಕಿತ್ತು. ಕರ್ನಾಟಕ ವಸ್ತುಪ್ರದರ್ಶನವನ್ನು ರಾಜ್ಯ ಸರ್ಕಾರ ಪ್ರಗತಿ ಮೈದಾನ ಎಂದು ಘೋಷಿಸಿದೆ. ಆದರೆ, ಇದಕ್ಕೆ ಯಾವುದೇ ರೀತಿಯ ಅನುದಾನ ಘೋಷಣೆ ಆಗಿಲ್ಲ. ಮುಂದಿನ ದಿನಗಳಲ್ಲಿ ಹೆಚ್ಚು ಅನುದಾನ ಕೊಡಬೇಕು ಎಂದರು.
ಚಾಮುಂಡಿ ಅಭಿವೃದ್ಧಿ ಪ್ರಾಧಿಕಾರ ಘೋಷಿಸಿರುವುದು ಹೆಮ್ಮೆಯ ಸಂಗತಿ. ಆದರೆ ದಸರಾ ಪ್ರಾಧಿಕಾರ ರಚನೆಗೆ ಬಜೆಟ್‌ನಲ್ಲಿ ಯಾವುದೇ ಪ್ರಸ್ತಾವನೆ ಇಲ್ಲ. ಇದು ಬೇಸರ ತಂದಿದೆ. ಸರ್ಕಾರ ಜಿಲ್ಲೆಗೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಘೋಷಣೆ ಮಾಡಬೇಕು ಎಂದು ಕೋರಿದರು.