ಕೆಂಪೇಗೌಡರಿಂದ ನಗರ ನಿರ್ಮಾಣದ ಪರಿಕಲ್ಪನೆ ಸಾಕಾರ: ಸಿಇಓ ಪ್ರಸನ್ನ

udp-27-ceo
Published on

ಉಡುಪಿ: ನಗರ ನಿರ್ಮಾಣದಲ್ಲಿ ವಿಶೇಷ ಆಸಕ್ತಿ ವಹಿಸಿ ನಗರ ನಿರ್ಮಾಣದ ಪರಿಕಲ್ಪನೆಯನ್ನು ಸಾಕಾರಗೊಳಿಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ. ದೇಶ- ವಿದೇಶಿಗರಿಗೆ ಚಿರಪರಿಚಿತವಾದ ಬೆಂಗಳೂರು ನಗರವನ್ನು ನಿರ್ಮಾಣ ಮಾಡಿದ ಹೆಗ್ಗಳಿಕೆ ಅವರದ್ದಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್. ಹೇಳಿದರು.


 ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ಸಂಯುಕ್ತ ಆಶ್ರಯದಲ್ಲಿ ನಡೆದ ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಮಾತನಾಡಿದರು.

  ಕೆಂಪೇಗೌಡರು ನಗರ ನಿರ್ಮಾಣದ ಜೊತೆ ಜೊತೆಗೆ ಕೃಷಿಗೆ ಸಹ ಆದ್ಯತೆಯನ್ನು ನೀಡಿದ್ದು. ಹಲವಾರು ಕೆರೆ, ಕೋಟೆ-ಕೊತ್ತಲೆಗಳು, ದೇವಾಲಯಗಳನ್ನು, ಪ್ರಮುಖ ನಾಲ್ಕು ದ್ವಾರಗಳನ್ನು ನಿರ್ಮಾಣ ಮಾಡಿದ್ದಾರೆ.  ಪ್ರಸ್ತುತ ಬೆಂಗಳೂರು ನಗರವು ಜನಸಾಮಾನ್ಯರಿಗೆ ಬದುಕು ಕಟ್ಟಿಕೊಳ್ಳಲು ಪ್ರಮುಖ ನಗರವಾಗಿದೆ ಎಂದರು.


  ಸಾಹಿತಿ ಹಾಗೂ ನಿವೃತ್ತ ಪ್ರಾಧ್ಯಾಪಕ ಶ್ರೀಕಾಂತ ಸಿದ್ಧಾಪುರ ಉಪನ್ಯಾಸ ನೀಡಿ, ಕೆಂಪೇಗೌಡರು ಕೃಷಿಗೆ ಆದ್ಯತೆ ನೀಡುವ ಉದ್ದೇಶದಿಂದ ನಗರದಲ್ಲಿ ಹಲವಾರು ಕೆರೆಗಳನ್ನು ಸ್ಥಾಪಿಸಿದ್ದಾರೆ. ತನ್ನನ್ನು ಬೇಟೆಯಾಡಲು ಬಂದ ನಾಯಿಯನ್ನು ಮೊಲವೊಂದು ಧೈರ್ಯದಿಂದ ಅಟ್ಟಿಸಿಕೊಂಡು ಹೋಗುತ್ತಿರುವ ಪ್ರದೇಶದಲ್ಲಿ ಬೆಂಗಳೂರು ನಗರ ನಿರ್ಮಾಣ ಮಾಡಲು ಕೆಂಪೇಗೌಡರು ನಿರ್ಧರಿಸಿದರು ಎಂದು ಇತಿಹಾಸ ತಿಳಿಸುತ್ತದೆ. ನಾಲ್ಕೂ ದಿಕ್ಕಿನಲ್ಲೂ ಗಡಿ ರೇಖೆಯನ್ನು ಗುರುತಿಸಲು ಎತ್ತುಗಳಿಗೆ ನೇಗಿಲನ್ನು ಕಟ್ಟಿ ಎತ್ತುಗಳು ನಿಲ್ಲುವ ಪ್ರದೇಶವನ್ನು ಗಡಿ ಪ್ರದೇಶ ಎಂದು ನಿರ್ಧರಿಸಿ, ಅದರ ಒಳಗೆ ಬೆಂಗಳೂರು ನಗರವನ್ನು ನಿರ್ಮಿಸಿದರು ಎಂಬ ದಂತಕಥೆಗಳೂ ಇವೆ ಎಂದರು.


 ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಚುನಾವಣಾ ಶಾಖೆಯ ತಹಶೀಲ್ದಾರ್ ಪರಶುರಾಮ್, ಉಡುಪಿ ಜಿಲ್ಲಾ ಒಕ್ಕಲಿಗ ಸಮಾಜದ ಅಧ್ಯಕ್ಷ ತುಕಾರಾಂ, ಉಪಾಧ್ಯಕ್ಷ ಹಾಗೂ ಪದಾಧಿಕಾರಿಗಳು, ಕ.ಸಾ.ಪ ಕಾರ್ಯದರ್ಶಿ ನರಸಿಂಹಮೂರ್ತಿ, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
   ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ರಾಮಾಂಜಿ ನಿರೂಪಿಸಿದರೆ, ಕ.ಸಾ.ಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net