ಕೆಲವರು ಜಾತಿಗಳ ನಡುವೆ ಕಂದಕ ಸೃಷ್ಟಿಸಿ ಸಮಾಜ ಒಡೆಯುವ ಕೆಲಸ: ಶಾಸಕ ರಾಮದಾಸ್

ramadas 2
Published on

ಮೈಸೂರು: ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 2-3 ತಿಂಗಳಿಂದ ಕೆಲವರು ಜಾತಿ ಜಾತಿಗಳ ನಡುವೆ ಕಂದಕ ಸೃಷ್ಟಿಸಿ ಸಮಾಜ ಒಡೆಯುವ ಕೆಲಸ ಮಾಡುತ್ತಿರುವುದು ದುರ್ದೈವದ ಸಂಗತಿ ಎಂದು ಶಾಸಕ ಎಸ್.ಎ.ರಾಮದಾಸ್ ವಿಷಾದ ವ್ಯಕ್ತಪಡಿಸಿದರು.


ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂ.59ರಲ್ಲಿ ಸೋಮವಾರ ಆಯೋಜಿಸಲಾಗಿದ್ದ ಯೋಗಕ್ಷೇಮಯಾತ್ರೆ ವೇಳೆ ಮಾತನಾಡಿದರು.


ಬಿಜೆಪಿ ಅಭಿವೃದ್ಧಿಯ ಮಂತ್ರ ಪಠಿಸುತ್ತದೆಯೇ ಹೊರತು, ಅನ್ಯ ವಿಚಾರಗಳತ್ತ ಗಮನ ಹರಿಸುವುದಿಲ್ಲ ಎಂಬುದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೇಂದ್ರದಲ್ಲಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಸಾಬೀತು ಮಾಡಿದ್ದಾರೆ. ಆ ದಿಕ್ಕಿನಲ್ಲಿ ನಮ್ಮೆಲ್ಲರ ಚಿತ್ತ ಇರಬೇಕು ಎಂದು ಸೂಚ್ಯವಾಗಿ ತಿಳಿಸಿದರು.


ಅಭಿವೃದ್ಧಿ ವಿಚಾರದಲ್ಲಿ ಇಂದು ಕೆ.ಆರ್.ಕ್ಷೇತ್ರ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಇದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಸಾರ್ವಜನಿಕವಾಗಿ ಹೇಳಿದ್ದಾರೆ. ಈ ಮಾಹಿತಿ ತಿಳಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತುಂಬಿದ ಸಮಾವೇಶದಲ್ಲಿ ಬೆನ್ನು ತಟ್ಟಿ ಆಶೀರ್ವದಿಸಿದ್ದಾರೆ. ಈ ಎಲ್ಲ ಫಲ ಕ್ಷೇತ್ರದ ಜನರಿಗೆ ಸಲ್ಲಲಿದೆ ಎಂದ ಅವರು ಯಾರೋ ಕೆಲವರ ಮಾತಿಗೆ ಮನ್ನಣೆ ನೀಡುವ ಅಗತ್ಯವಿಲ್ಲ ಎಂದು ಮಾರ್ಮಿಕವಾಗಿ ನುಡಿದರು.


ಏಪ್ರಿಲ್‌ನಲ್ಲಿ ನಾನು ಹಾಗೂ ನಮ್ಮ ಕಾರ್ಯಕರ್ತರು ಕ್ಷೇತ್ರದ ಪ್ರತಿ ಮನೆ ಬಾಗಿಲಿಗೆ ಬರಲಿದ್ದೇವೆ. ನಿಮ್ಮ ಆಶೀರ್ವಾದ ನನಗೆ ಬೇಕಿದೆ. ಭ್ರಷ್ಟಾಚಾರ ರಹಿತ ಕ್ಷೇತ್ರ ಮಾಡುವ ಸಲುವಾಗಿ ದೇವರ ಮುಂದಿಟ್ಟ ಹತ್ತು ರೂ. ನೀಡಿ ಆಶೀರ್ವದಿಸಿ ಎಂದು ಮನವಿ ಮಾಡಿದರು.


ಕಳೆದ ಸಾಲಿನಲ್ಲಿ ಸರ್ಕಾರ ರಚನೆ ವೇಳೆ ಸಂಖ್ಯೆಯ ಕೊರತೆ ಉಂಟಾಯಿತು. ಆದರೆ, ಈ ಬಾರಿ ಹಾಗಾಗದಂತೆ ಎಚ್ಚರ ವಹಿಸಬೇಕಿದೆ. ಕನಿಷ್ಠ 150 ಸ್ಥಾನ ಬಿಜೆಪಿ ಗೆಲ್ಲಲೇಬೇಕಿದೆ. ಈ ಮೂಲಕ ಸಂಘಟನಾತ್ಮಕ ಹೋರಾಟ ಮಾಡಬೇಕಿದೆ ಎಂದು ಹೇಳಿದರು.


ಕ್ಷೇತ್ರ ವ್ಯಾಪ್ತಿಯ 482 ಕಿಮೀ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ಶೇ.80ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಈ ತಿಂಗಳ ಅಂತ್ಯದ ವೇಳೆಗೆ ಎಲ್ಲ ಕಾಮಗಾರಿ ಮುಗಿಯಲಿದೆ. ಮುಂದಿನ 10 ವರ್ಷಗಳ ಕಾಲ ಕ್ಷೇತ್ರದಲ್ಲಿ ಯಾವುದೇ ರೀತಿಯ ಸಮಸ್ಯೆ ಕಂಡುಬಾರದ ರೀತಿಯಲ್ಲಿ ದೂರದೃಷ್ಟಿಯ ಯೋಜನೆ ಅನುಷ್ಠಾನ ಮಾಡಲಾಗಿದೆ ಎಂದರು.


ಜಾತಿ, ಧರ್ಮ ಮೀರಿ ಈ ಕ್ಷೇತ್ರದ ಜನ ನನ್ನನ್ನು ಮನೆ ಮಗನಂತೆ ಕಂಡಿದ್ದಾರೆ, ಆಶೀರ್ವದಿಸಿದ್ದಾರೆ. ಅದರಂತೆಯೇ ನಾನು ಶಾಸಕನಾಗಿದ್ದ ಅಷ್ಟೂ ವರ್ಷಗಳ ಕಾಲ ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿ ಇದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net