

ಹಾಸನ: ಕೇಂದ್ರ ಸರ್ಕಾರ ಕಾರ್ಮಿಕರ ದುಡಿಮೆಯ ಅವಧಿಯನ್ನು ದಿನಕ್ಕೆ 12 ಗಂಟೆಗೆ ಹೆಚ್ಚಿಸಿರುವ ಆದೇಶ ಹಿಂಪಡೆಯುವುದು ಹಾಗೂ ಕನಿಷ್ಠ ವೇತನವನ್ನು 31,500 ರೂ. ಗೆ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿತು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್, ಕೇಂದ್ರದ 9 ವರ್ಷಗಳ ಬಿಜೆಪಿ ಸರ್ಕಾರದ ಕಡೆ ಹೊರಳಿ ನೋಡಿದರೆ ಜನಸಾಮಾನ್ಯರಿಗೆ ಸಂಕಷ್ಟಗಳ ಸರಮಾಲೆಯನ್ನೇಉಡುಗೊರೆಯಾಗಿ ನೀಡಿದೆ. ಅಸಹನೀಯವಾದ ಬೆಲೆ ಏರಿಕೆ ಒಂದೆಡೆಯಾದರೆ ವೇತನ ಹೆಚ್ಚಳವಿಲ್ಲದೆ ನಿರ್ಗತಿಕತನದಿಂದಾಗಿ ಹಸಿವಿನ ಸೂಚ್ಯಂಕ ಅಪಾಯಕಾರಿ ಮಟ್ಟಕ್ಕೆ ಕುಸಿದಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿ ಬಿದ್ದಿವೆ. ಸಾರ್ವಜನಿಕ ಉದ್ದಿಮೆಗಳನ್ನು ಬಿಡಿಗಾಸಿಗೆ ಖಾಸಗಿಯವರಿಗೆ ಮಾರಲಾಗುತ್ತಿದ್ದು ಅವರು ದೊಡ್ಡ ಸಂಖ್ಯೆಯಲ್ಲಿ ನೌಕರರನ್ನು ವಜಾಗೊಳಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹೋರಾಟದ ಮುಂದುವರಿಕೆಯಾಗಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವಿವಿಧ ಹಂತಗಳಲ್ಲಿ ರಾಷ್ಟ್ರವ್ಯಾಪಿ ಕ್ವಿಟ್ ಇಂಡಿಯಾ ದಿನದಂದು ದೇಶಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗಿದೆ ಎಂದರು.
ಕಾರ್ಮಿಕ ವಿರೋಧಿ ಲೇಬರ್ ಕೋಡ್ ರದ್ದಾಗಬೇಕು, ಸಾರ್ವತ್ರಿಕ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಿ ಕನಿಷ್ಠ 8000 ಪಿಂಚಣಿ ನೀಡಬೇಕು. ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ಮತ್ತು ನಗದೀಕರಣ ನಿಲ್ಲಿಸಸಬೇಕು. ಉದ್ಯೋಗ ಖಾತ್ರಿ ಯೋಜನೆ, ನರೇಗಾ ಮಾನವ ದಿನಗಳನ್ನು 200ಕ್ಕೆ ಹೆಚ್ಚಿಸಸಬೇಕು, ಸ್ಕೀಮ್ ಕಾರ್ಮಿಕರಾದ ಆಶಾ, ಅಂಗನವಾಡಿ ಮತ್ತು ಬಿಸಿಯೂಟ ಕಾರ್ಮಿಕರನ್ನು ಕನಿಷ್ಠ ವೇತನ ವ್ಯಾಪ್ತಿಗೆ ಒಳಪಡಿಸಬೇಕು, ವಲಸೆ ಕಾರ್ಮಿಕರಿಗೆ ಸೇವಾ ಭದ್ರತೆ ಮತ್ತು ಸಾರ್ವತ್ರಿಕ ಪಡಿತರ ವ್ಯವಸ್ಥೆ ಜಾರಿ ಮಾಡಬೇಕು, ಅಸಂಘಟಿತ ವಲಯದ ಕಾರ್ಮಿಕರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಬೇಕು, ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿಗೊಳಿಸಿ ಮತ್ತು ಜಿಎಸ್ಟಿ ವ್ಯಾಪ್ತಿಯಿಂದ ಹೊರಗಿಡಬೇಕು, ವಿದ್ಯುತ್ ಶಕ್ತಿ ಮಸೂದೆ 2020 ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಎಐಟಿಯುಸಿ ಜಿಲ್ಲಾಧ್ಯಕ್ಷ ಎಂ.ಸಿ. ಡೋಂಗ್ರೆ, ಅರವಿಂದ್, ಧರ್ಮರಾಜ್, ಸೌಮ್ಯಾ, ಮುಬಾಶಿರ್ ಅಹಮದ್ ಮತ್ತಿತರೆ ಕಾರ್ಮಿಕ ಸಂಘಗಳ ಮುಖಂಡರು ಭಾಗವಹಿಸಿದ್ದರು.