ಕೇಂದ್ರದ ನಡೆ ಖಂಡಿಸಿ ಇಂದು ಕಾಂಗ್ರೆಸ್‌ನಿಂದ ಪ್ರತಿಭಟನೆ

ಕೇಂದ್ರದ ನಡೆ ಖಂಡಿಸಿ ಇಂದು ಕಾಂಗ್ರೆಸ್‌ನಿಂದ ಪ್ರತಿಭಟನೆ
Published on

ಹಾಸನ: ಭಾರತ ಆಹಾರ ನಿಗಮದಿಂದ ರಾಜ್ಯಕ್ಕೆ ಅಕ್ಕಿ ನೀಡದಂತೆ ತಡೆಯೊಡ್ಡುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿರುವ ಕೇಂದ್ರ ಸರ್ಕಾರದ ನಡೆ ಖಂಡಿಸಿ ಮಂಗಳವಾರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಮಾಧ್ಯಮ ವಕ್ತಾರ ದೇವರಾಜೆಗೌಡ ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಆರಂಭದಿಂದಲೂ ಜನರಿಗೆ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಆದರೆ, ಕೇಂದ್ರ ಸರ್ಕಾರ ಈಗ ಅಕ್ಕಿ ಕೊಡುವುದಿಲ್ಲ ಎಂದು ಹೇಳುವ ಮೂಲಕ ರಾಜ್ಯದ ಜನರಿಗೆ ಅನ್ಯಾಯ ಮಾಡುತ್ತಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ಮಲತಾಯಿ ಧೋರಣೆ ತೋರುವ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಬಿಜೆಪಿಯ ದ್ವೇಷ ರಾಜಕೀಯಕ್ಕಾಗಿ ಬಡವರ ಹೊಟ್ಟೆಯ ಮೇಲೆ ಹೊಡೆಯುವ ಕೆಲಸ ಮಾಡುತ್ತಿದೆ. ಬಿಜೆಪಿ ಬಡವರ ವಿರೋಧಿ ಎಂಬುದಕ್ಕೆ ಅಕ್ಕಿ ವಿಚಾರದಲ್ಲಿ ಮಾಡುತ್ತಿರುವ ಧೋರಣೆಯೇ ಸಾಕ್ಷಿ ಎಂದು ಅಸಮಾಧಾನ ವ್ಯಕ್ತಪಡಿಸಿದರು

ಕಾಂಗ್ರೆಸ್ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಜನಪರ ಯೋಜನೆಗಳನ್ನು ಸಹಿಸಿಕೊಳ್ಳಲು ಆಗದ ಬಿಜೆಪಿಗರು ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡಿ ಜನರಲ್ಲಿ ಗೊಂದಲ ಸೃಷ್ಟಿ ಮಾಡುವ ಕೆಲಸ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಲ್ಲಿ ಗೊಂದಲ ಬೇಡ. ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಕುಮಾರ್, ಮುನಿಸ್ವಾಮಿ, ವಿನಯ್ ಗಾಂಧಿ, ಎಸ್‌ಸಿ- ಎಸ್ಟಿ ವಿಭಾಗದ ಮಲ್ಲಿಗೇವಾಳು ದೇವಪ್ಪ, ಮುಜಾಮಿನ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net