ಕೈಗಾರಿಕೆಗಳಲ್ಲಿ ಸ್ಥಳೀಯರ ಆದ್ಯತೆಗೆ ಒತ್ತು

28rajesh3
Published on

ಚಾಮರಾಜನಗರ: ಜಿಲ್ಲೆಯ ಕೆಲ್ಲಂಬಳ್ಳಿ-ಬದನಗುಪ್ಪೆ ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿರುವ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಆದ್ಯತೆ ನೀಡಲಾಗುವುದು ಎಂದು ಎಂಎಸ್‌ಐಎಲ್ ಅಧ್ಯಕ್ಷ ಮತ್ತು ಶಾಸಕ ಸಿ.ಪುಟ್ಟರಂಗಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ಶುಕ್ರವಾರ ಆಯೋಜಿಸಿದ್ದ ಉದ್ಯೋಗ ಮೇಳನ್ನು ಉದ್ಘಾಟಿಸಿ ಮಾತನಾಡಿದರು.

ಇತ್ತೀಚೆಗೆ ವಿದ್ಯಾವಂತರ ಸಂಖ್ಯೆ ಹೆಚ್ಚಾಗುತ್ತಿದ್ದು, ಪ್ರತಿಯೊಬ್ಬರಿಗೂ ಉದ್ಯೋಗವನ್ನು ಕಲ್ಪಿಸಿಕೊಡುವಲ್ಲಿ ಸರ್ಕಾರಗಳಿಗೆ ಸಮಸ್ಯೆ ಉಂಟಾಗಿದೆ. ಪ್ರಸ್ತುತ ಸಂದರ್ಭದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಕೌಶಲ್ಯಯುತ ನೈಪುಣ್ಯತೆ ಅತ್ಯಗತ್ಯವಾಗಿದೆ. ಶಿಕ್ಷಣದಲ್ಲಿ ಕೌಶಲ್ಯ ನೈಪುಣ್ಯತೆ ಇಲ್ಲದೇ ಹೋದರೇ ಉದ್ಯೋಗ ದೊರೆಯುವುದು ಕಷ್ಟವಾಗುತ್ತದೆ ಎಂದರು.

ಜಿಲ್ಲೆಯ ಕೆಲ್ಲಂಬಳ್ಳಿ-ಬದನಗುಪ್ಪೆ ಕೈಗಾರಿಕಾ ಪ್ರದೇಶದಲ್ಲಿ ಹಲವಾರು ಕಾರ್ಖಾನೆಗಳು ಕಾರ್ಯನಿರ್ವಹಿಸುತ್ತಿದೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಖಾನೆಗಳು ಬರುವು ಸಾಧ್ಯತೆ ಇದೆ. ಇವುಗಳಲ್ಲಿ ಸ್ಥಳೀಯರಿಗೆ ಅವಕಾಶ ಮಾಡಿಕೊಡಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಮಾತನಾಡಿ, ಅಗತ್ಯ ಶಿಕ್ಷಣ ಮತ್ತು ಉದ್ಯೋಗ ಮಾಡುವ ಮನೋಭಾವ ಇದ್ದರೇ ನಿರುದ್ಯೋಗ ಸಮಸ್ಯೆ ಕಂಡು ಬರುವುದಿಲ್ಲ. ಯುವಕರು ಒಂದು ಉದ್ಯೋಗದಲ್ಲಿ ಆಸಕ್ತಿ ಬೆಳೆಸಿಕೊಂಡು, ಅದನ್ನೇ ಉತ್ತಮ ರೀತಿಯಲ್ಲಿ ಮಾಡುವುದರಿಂದ ಯಶಸ್ಸು ಸಾಧ್ಯವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ (ಮುನ್ನಾ), ನಗರಸಭಾ ಅಧ್ಯಕ್ಷ ಸುರೇಶ್, ಉಪಾಧ್ಯಕ್ಷೆ ಮಮತಾ ಬಾಲಸುಬ್ರಹ್ಮಣ್ಯಂ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್, ಉಪಕಾರ್ಯದರ್ಶಿ ಪಿ.ಲಕ್ಷ್ಮೀ, ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಗುರುಪ್ರಸಾದ್, ಕಿರಣ್ ಪಡ್ನೇಕರ್, ಮಹಮ್ಮದ್ ಅಕ್ಬರ್ ಹಾಗೂ ಇತರರು ಹಾಜರಿದ್ದರು.

400 ಯುವಕರಿಗೆ ಉದ್ಯೋಗ:

ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ 411 ಯುವಕ-ಯುವತಿಯರಿಗೆ ಉದ್ಯೋಗ ದೊರೆಯಿತು. ಮೇಳದಲ್ಲಿ 31 ಖಾಸಗಿ ಕಂಪನಿಗಳು ಭಾಗವಹಿಸಿದ್ದವು, ಒಟ್ಟು 914 ಉದ್ಯೋಗ ಆಕಾಂಕ್ಷಿಗಳು ಭಾಗವಹಿಸಿದ್ದರು. ವಿವಿಧ ಬ್ಯಾಂಕಿಂಗ್, ವಿಮೆ ಮತ್ತು ಹಣಕಾಸು ಕಂಪನಿಗಳು, ಮಾರ್ಕೆಟಿಂಗ್, ಹಾಸ್ಪಿಟಾಲಿಟಿ, ಡಾಟ ಎಂಟ್ರಿ, ಸೆಕ್ಯೂರಿಟಿ ಗಾರ್ಡ್, ಫಿಟ್ಟರ್, ಎಲೆಕ್ಟ್ರಾನಿಕ್ಸ್ ಹಾರ್ಡ್‌ವೇರ್, ಸ್‌ಟಾವೇರ್ ಸರ್ವೀಸಸ್‌ಗೆ ಸಂಬಂಧಿಸದ ಕಂಪನಿಗಳು ಮೇಳದಲ್ಲಿ ಭಾಗವಹಿಸಿದ್ದವು.

ಪ್ರಸ್ತುತ ಶಿಕ್ಷಣಕ್ಕೆ ತಕ್ಕಂತೆ ಉದ್ಯೋಗಗಳು ದೊರೆಯುತ್ತಿಲ್ಲ. ಪದವಿ, ಸ್ನಾತಕೋತ್ತರ ಪದವಿಗೆ ಪೂರಕವಾದ ಕೆಲಸ ಸಿಗುತ್ತಿಲ್ಲ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಉತ್ತಮವಾದ ಕೆಲಸವನ್ನು ಮಾಡಿದೆ. ಪ್ರತಿ 6 ತಿಂಗಳಿಗೊಮ್ಮೆ ಉದ್ಯೋಗ ಮೇಳವನ್ನು ಆಯೋಜನೆ ಮಾಡಿದರೇ ಯುವಜನಾಂಗಕ್ಕೆ ಅನುಕೂಲವಾಗುತ್ತದೆ.

-ಎಂ.ಮಹೇಶ್, ಸದಸ್ಯ, ನಗರಸಭೆ, ಚಾಮರಾಜನಗರ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net