

ಹಾಸನ : ಕೃಷಿಕರಿಗೆ ಅನುಕೂಲವಾಗುವಂತೆ ಈಗಾಗಲೇ ವಿವಿಧ ಇಲಾಖೆಗಳ ಮೂಲಕ ಕೊರೆದಿರುವ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಪರಿಶಿಷ್ಟ ಜಾತಿ ಉಪ ಯೋಜನೆ ಹಾಗೂ ಪರಿಶಿಷ್ಟ ಪಂಗಡದ ಉಪ ಯೋಜನೆಯಡಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ವಿದ್ಯುತ್ ಸಂಪರ್ಕ ಕಲ್ಪಿಸುವುದನ್ನು ವಿಳಂಬ ಮಾಡುವುದರಿಂದ ರೈತರು ತೊಂದರೆ ಅನುಭವಿಸುವಂತಾಗುತ್ತದೆ ಎಂದು ಹೇಳಿದರು.
ಹಿಮ್ಸ್ ಆಸ್ಪತ್ರೆಯಲ್ಲಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಿಟ್ಟ ಅನುದಾನವನ್ನು ಅದೆ ಸಮುದಾಯದ ಫಲಾನುಭವಿಗಳಿಗೆ ವೆಚ್ಚ ಮಾಡಬೇಕು. ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಗೆ ಬಾಕಿ ಇರುವವರನ್ನು ಗುರುತಿಸಿ ನೋಂದಣಿ ಮಾಡಿಸಲು ಕ್ರಮವಹಿಸಲು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಜಿಲ್ಲೆಯಲ್ಲಿ ಸಿರಿಧಾನ್ಯ ಮೇಳ ಆಯೋಜಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಹಳೇಬೀಡಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ಗೆ ಜಾಗ ಗುರುತಿಸಲು ಸೂಚಿಸಿದರು. ಪಶುಪಾಲನಾ ಇಲಾಖೆಯಿಂದ ಹಾಲು ಉತ್ಪಾದಕರಿಗೆ ಉತ್ತೇಜನ ಜಾನುವಾರುಗಳ ಮೇವಿನ ಬಗ್ಗೆ ಗಮನಹರಿಸಿ ಎಂದು ಹೇಳಿದರು.
ಎಸ್.ಎಸ್.ಎಲ್.ಸಿ.ಪರೀಕ್ಷಾ ಫಲಿತಾಂಶದ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು. ಬರಗಾಲದ ಹಿನ್ನಲೆಯಲ್ಲಿ ಕುಡಿಯುವ ನೀರಿಗೆ ತೊಂದರೆ ಆಗದಂತೆ ಅಗತ್ಯ ಕ್ರಮವಹಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕಾರ್ಮಿಕ ಇಲಾಖೆವತಿಯಿಂದ ಸಾರ್ವಜನಿಕರಿಗೆ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಅರಿವು ಮೂಡಿಸಿ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಲಭ್ಯವಿರುವ ಅನುದಾನವನ್ನು ವೆಚ್ಚ ಮಾಡುವಂತೆ ತಿಳಿಸಿದರಲ್ಲದೆ, ಕಲಾಭವನದ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಚವಾಗಿಡಲು ಸೂಚಿಸಿದರು.
ಸಭೆಯಲ್ಲಿ ಹಿಮ್ಸ್ ನಿರ್ದೇಶಕ ಡಾ.ಸಂತೋಷ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣ ಮೂರ್ತಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಲಕ್ಷ್ಮೇಗೌಡ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.