ಕೋವಿಡ್ ನಿಯಂತ್ರಣ ಸವಾಲಾಗಿ ಸ್ವೀಕರಿಸಿ, ಸಂಸದ ಬಚ್ಚೇಗೌಡ ಕರೆ, ಕರೊನಾ ನಿರ್ವಹಣೆ ಪರಿಶೀಲನಾ ಸಭೆ

mp
Published on

ಬೆಂಗಳೂರು ಗ್ರಾಮಾಂತರ: ಕರೊನಾ ಎರಡನೇ ಅಲೆ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದ್ದು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಯಪಡದೆ ಸವಾಲಾಗಿ ಸ್ವೀಕರಿಸಬೇಕು ಎಂದು ಸಂಸದ ಬಿ.ಎನ್.ಬಚ್ಚೇಗೌಡ ತಿಳಿಸಿದರು.

ದೇವನಹಳ್ಳಿಯ ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮುಂಜಾಗ್ರತಾ ಕ್ರಮಗಳ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಕರೊನಾ ನಿಯಂತ್ರಣಕ್ಕೆ ಈಗಾಗಲೇ ಹಲವಾರು ಕ್ರಮ ಕೈಗೊಳ್ಳಲಾಗಿದ್ದು, ಸಂಸದರ ನಿಧಿಯಿಂದ ಜಿಲ್ಲಾಡಳಿತಕ್ಕೆ 25 ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗುವುದು ಎಂದ ಅವರು, ಹಣ ವರ್ಗಾವಣೆ ಪತ್ರವನ್ನು ಜಿಲ್ಲಾಧಿಕಾರಿಗೆ ನೀಡಿದರು.

ಜಿಲ್ಲಾಡಳಿತದ ಎಲ್ಲ ಅಧಿಕಾರಿಗಳು ಹಗಲು ರಾತ್ರಿ ಎನ್ನದೆ ಕರೊನಾ ನಿಯಂತ್ರಣಕ್ಕೆ ಶ್ರಮಿಸುತ್ತಿರುವುದು ಶ್ಲಾಘನೀಯ. ತಿಂಗಳಾಂತ್ಯಕ್ಕೆ ಕೋವಿಡ್ ಎರಡನೇ ಅಲೆ ಕಡಿಮೆಯಾಗಲಿದೆ ಎಂಬ ಮಾಹಿತಿ ಇದೆ. ಕೋವಿಡ್ ಮೂರನೇ ಅಲೆ ಬರುವ ಮುನ್ಸೂಚನೆ ಇರುವುದರಿಂದ ಈಗಿನಿಂದಲೇ ಅಗತ್ಯ ತಯಾರಿ ಮಾಡಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ನೋಂದಣಿಯಾಗದ ಖಾಸಗಿ ಕ್ಲಿನಿಕ್ ಹೆಚ್ಚಾಗಿದ್ದು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಅಂತಹ ಕ್ಲಿನಿಕ್‌ಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲೆಯ ಆಸ್ಪತ್ರೆಯಲ್ಲಿ ಬೆಡ್ ಹಾಗೂ ಆಕ್ಸಿಜನ್ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಹಾಗೂ ನಗರಸಭೆ, ಪುರಸಭೆ, ಗ್ರಾಮಮಟ್ಟದಲ್ಲಿ ರಚನೆಯಾಗಿರುವ ಕೋವಿಡ್ ಟಾಸ್ಕ್ ೆರ್ಸ್ ಸಮಿತಿಗಳು ಸೂಕ್ತ ರೀತಿಯಲ್ಲಿ ಕಾರ್ಯ ನಿರ್ವಹಿಸುವ ಬಗ್ಗೆ ಪರಿಶೀಲಿಸಬೇಕು ಎಂದು ಹೇಳಿದರು.

ಜಿಲ್ಲೆಯ ಎಲ್ಲ ಗ್ರಾಮಗಳಿಗೆ ಮೊಬೈಲ್ ಕ್ಲಿನಿಕ್ ಮುಖಾಂತರ ಆರೋಗ್ಯ ಸೇವೆ ನೀಡುತ್ತಿರುವುದು ಉತ್ತಮ ಕಾರ್ಯವಾಗಿದ್ದು, ಕೋವಿಡ್ ಪರೀಕ್ಷೆ ಹೆಚ್ಚಿಸುವಂತೆ ತಿಳಿಸಿದರು. ಜನರನ್ನು ನಿಯಂತ್ರಿಸುವ ಸಲುವಾಗಿ ಪೊಲೀಸರು ಲಾಠಿ ಪ್ರಹಾರ ಮಾಡದೆ, ಶಾಂತಿಯಿಂದ ಕಾರ್ಯನಿರ್ವಹಿಸಬೇಕು. ಕೋವಿಡ್ ಟಾಸ್ಕ್ ೆರ್ಸ್ ಸಮಿತಿಗೆ ಒಬ್ಬ ಪೊಲೀಸ್ ಸಿಬ್ಬಂದಿ ನೀಡಲು ಸೂಚಿಸಿದರು.

ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮಾತನಾಡಿ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಹಲವು ಅಧಿಕಾರಿಗಳನ್ನು ಟಾಸ್ಕ್ ೆರ್ಸ್ ಸಮಿತಿಗೆ ನಿಯೋಜಿಸಲಾಗಿದ್ದು, ಜಿಲ್ಲೆಯಲ್ಲಿ ಹದಿನೈದು ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗಿದೆ. 15,421 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ. 0.88 ಮರಣ ಪ್ರಮಾಣವಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಬ್ಲಾಕ್ ಫಂಗಸ್‌ಗೆ ಸಂಬಂಧಿಸಿದಂತೆ ಒಂದು ಪ್ರಕರಣ ಗಮನಕ್ಕೆ ಬಂದಿದ್ದು, ಈ ಸೋಂಕು ಮತ್ತಷ್ಟು ಹರಡದಂತೆ ಸರ್ಕಾರದ ನಿರ್ದೇಶನದ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ರೆಮ್‌ಡೆಸಿವಿರ್ ಹಾಗೂ ಕೋವಿಡ್ ಲಸಿಕೆ ಸಮಸ್ಯೆ ಇಲ್ಲ. ಅಲ್ಲದೆ, ಜಿಲ್ಲಾದ್ಯಂತ ಮೊಬೈಲ್ ಕ್ಲಿನಿಕ್‌ಗಳ ಮೂಲಕ ಗ್ರಾಮಗಳಿಗೆ ತೆರಳಿ ಗ್ರಾಮೀಣ ಜನರ ಕೋವಿಡ್ ತಪಾಸಣೆ ನಡೆಸುವ ಜತೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರು.

ಉಪವಿಭಾಗಾಧಿಕಾರಿ ಅರುಳ್‌ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಪ್ಪೇಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಧರ್ಮೇಂದ್ರ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀನಿವಾಸ್, ವೈದ್ಯಾಧಿಕಾರಿ ಡಾ.ಶಾಂತಲಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net