

ಚಾಮರಾಜನಗರ: ಕೋವಿಡ್-19 ಪ್ರಕರಣಗಳ ಬಗ್ಗೆ ಜಾಗರೂಕರಾಗಿರಬೇಕು. ಯಾವುದೇ ಆತಂಕ ಪಡದೇ ಜ್ವರ, ಕೆಮ್ಮು, ಎದೆನೋವು ಅಥವಾ ಉಸಿರಾಟದ ತೊಂದರೆ ಕಂಡುಬಂದಲ್ಲಿ ತಕ್ಷಣವೇ ವೈದ್ಯಕೀಯ ಸಲಹೆ ಪಡೆಯುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸಾರ್ವಜನಿಕರಿಗೆ ಸಲಹೆ ಮಾಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19, ಮಲೇರಿಯಾ, ಡೆಂಗ್ಯೂ, ಚಿಕುನ್ ಗೂನ್ಯ, ಇನ್ನಿತರ ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು ಸೋಮವಾರ ನಡೆದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೋವಿಡ್ 19 ಪ್ರಕರಣಗಳ ತಡೆ, ಪತ್ತೆಹಚ್ಚುವಿಕೆ ಹಾಗೂ ಆರೈಕೆಗೆ ನಿರಂತರ ಮೇಲ್ವಿಚಾರಣೆ ಮತ್ತು ನಿರ್ವಹಣೆಯನ್ನು ಮುಂದುವರೆಸಲಾಗಿದೆ. ಸಾರ್ವಜನಿಕರು ಜನದಟ್ಟಣೆಯ ಸ್ಥಳಗಳಲ್ಲಿ ಮಾಸ್ಕ್ ಧರಿಸಿ ದೈಹಿಕ ಅಂತರವನ್ನು ಕಾಪಾಡಿಕೊಳ್ಳಬೇಕು. ಉತ್ತಮ ನೈರ್ಮಲ್ಯವನ್ನು ಅಭ್ಯಾಸ ಮಾಡಿಕೊಳ್ಳಬೇಕು. ಬೆಂಬಲ ಪರಿಕ್ಷೆ ಮತ್ತು ಕಣ್ಗಾವಲು ಇರಬೇಕು. ರ‌್ಯಾಂಡಂ ಮಾದರಿಗಳ ಪರೀಕ್ಷೆಗೆ ಸಹಕರಿಸಬೇಕು. ಯಾವುದೇ ಹೊಸ ರೂಪಾಂತರಗಳ ಅಥವಾ ಸಂಭಾವ್ಯ ಉಲ್ಬಣ ಪ್ರಕರಣಗಳನ್ನು ಪತ್ತೆಹಚ್ಚಲು ಮತ್ತು ನಿಯಂತ್ರಿಸಲು ಸಾರ್ವಜನಿಕರ ನಿರಂತರ ಸಹಕಾರ ಅತ್ಯಗತ್ಯವಾಗಿರುತ್ತದೆ. ಸಾರ್ವಜನಿಕರ ಆರೋಗ್ಯವೇ ನಮ್ಮ ಆದ್ಯತೆಯಾಗಿರುತ್ತದೆ ಎಂದು ತಿಳಿಸಿದರು.
ಕೋವಿಡ್ ಬಗ್ಗೆ ಆತಂಕ ಬೇಡ, ಆದರೆ ಜಾಗೂರಕರಾಗಿರಬೇಕು. ಅಧಿಕೃತ ಮೂಲಗಳ ಮೂಲಕ ಮಾಹಿತಿ ಪಡೆಯಬೇಕು. ಪರಿಶೀಲಿಸದ ಹೊರತು ಯಾವುದೇ ಮಾಹಿತಿಯನ್ನು ಪರಿಗಣಿಸಬಾರದು. ಆರೋಗ್ಯ ಸಿಬ್ಬಂದಿಯೊಂದಿಗೆ ಮಾಹಿತಿಯನ್ನು ಹಂಚಿಕೊಳ್ಳಬೇಕು. ಜವಾಬ್ದಾರಿಯುತ ನಡವಳಿಕೆಯನ್ನು ಅಭ್ಯಾಸ ಮಾಡಿಕೊಳ್ಳಬೇಕು. ರೋಗ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ವರದಿ ಮಾಡಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಶಾಲಾ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆ ಪ್ರಕಾರ ಎಲ್ಲಾ ಸರ್ಕಾರಿ ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಶಾಲಾ ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ ಹಾಗೂ ಇತರೆ ಲಕ್ಷಣಗಳು ಕಂಡು ಬಂದಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸದೇ ವೈದ್ಯರ ಸಲಹೆಯಂತೆ ಚಿಕಿತ್ಸೆ ಹಾಗೂ ಆರೈಕೆ ಕ್ರಮಗಳನ್ನು ಪಾಲಿಸಬೇಕು. ಸದರಿ ಲಕ್ಷಣಗಳು ಗುಣಮುಖವಾದ ನಂತರವೇ ಮಕ್ಕಳನ್ನು ಶಾಲೆಗೆ ಕಳುಹಿಸಬೇಕು. ಶಾಲಾ ಶಿಕ್ಷಕರು ಬೋಧಕೇತರ ಸಿಬ್ಬಂದಿಯಲ್ಲಿಯೂ ಜ್ವರ, ಕೆಮ್ಮು, ನೆಗಡಿ ಇತರೆ ಲಕ್ಷಣಗಳು ಕಂಡುಬಂದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು ಎಂದು ತಿಳಿಸಿದರು.
ನೈರ್ಮಲ್ಯ ಮತ್ತು ಪರಿಸರದ ಬಗ್ಗೆ ಜಾಗೃತಿ ಹೊಂದಬೇಕು. ತ್ಯಾಜ್ಯವನ್ನು ಸರಿಯಾಗಿ ವಿಲೇವಾರಿ ಮಾಡಬೇಕು. ಸಾರ್ವಜನಿಕ ಪ್ರದೇಶಗಳನ್ನು ಸ್ವಚ್ಛವಾಗಿಟ್ಟಿಕೊಳ್ಳಬೇಕು. ಆರೋಗ್ಯ ಸಲಹೆಗಾಗಿ ಉಚಿತ ಸಹಾಯವಾಣಿ ಸಂಖ್ಯೆ 1800 425 8330 ಗೆ ಕರೆ ಮಾಡಬೇಕು. ಸುರಕ್ಷಿತವಾಗಿರುವ ಮೂಲಕ ಸಂಭಾವ್ಯ ಅನಾರೋಗ್ಯಗಳನ್ನು ಶೀಘ್ರವಾಗಿ ಗುರುತಿಸಿ ನಿಯಂತ್ರಿಸಬಹುದಾಗಿದ್ದು, ಜಿಲ್ಲೆಯ ಸಾರ್ವಜನಿಕರು ಕೋವಿಡ್-19 ಕಣ್ಗಾವಲು ಮತ್ತು ಸುರಕ್ಷತೆ ಕುರಿತ ಸಲಹೆಗಳನ್ನು ಪಾಲಿಸಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಚಿದಂಬರ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರರಾಜೇಅರಸ್ ಹಾಗೂ ಇತರರು ಹಾಜರಿದ್ದರು.