ಕ್ರಿಯಾಶೀಲರಾಗಿ ಕರ್ತವ್ಯ ನಿರ್ವಹಿಸಿ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಸೂಚನೆ

2807-Kpl-Ravi-3
Published on

ಕೊಪ್ಪಳ: ಸರ್ಕಾರದ ಯೋಜನೆಗಳನ್ನು ಜನತೆಗೆ ಸರಿಯಾಗಿ ತಲುಪಿಸಿ. ಜಿಲ್ಲಾಮಟ್ಟದ ಅಧಿಕಾರಿಗಳು ಜಿಲ್ಲಾದ್ಯಂತ ಸುತ್ತಾಡಿ ಜನರ ಸಮಸ್ಯಗಳಿಗೆ ಸ್ಪಂದಿಸುವಂತೆ ವಸತಿ ಇಲಾಖೆ ಕಾರ್ಯದರ್ಶಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಸೂಚಿಸಿದರು.


ನಗರದ ಜಿಪಂ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಶುಕ್ರವಾರ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.


ಆಯಾ ಇಲಾಖೆಯಿಂದ ರೂಪಗೊಂಡ ಕಾರ್ಯಕ್ರಮಗಳನ್ನು ಸರಿಯಾಗಿ ಅನುಷ್ಠಾನ ಮಾಡಿ. ಗ್ರಾಮೀಣ ಭಾಗಕ್ಕೆ ಯೋಜೆನಗಳನ್ನು ತಲುಪಿಸಿ. ಮುಂಗಾರು ಆರಂಭವಾಗಿದ್ದು, ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ. ನಿರಂತರ ಮಳೆ ಸುರಿದಿದ್ದು, ಹಾನಿ ಬಗ್ಗೆ ಗಮನಹರಿಸಿ. ಬೆಳೆಗಳಲ್ಲಿ ಕಂಡುಬರುವ ರೋಗಗಳು, ನಿಯಂತ್ರಣ, ಹತೋಟಿ ಕ್ರಮಗಳ ಕುರಿತು ಮಾಹಿತಿ ನೀಡಿ. ಜಾನುವಾರುಗಳಿಗೆ ಲಸಿಕೆ ಹಾಕಿಸುವಂತೆ ತಾಕೀತು ಮಾಡಿದರು.


ನಗರ, ಪಟ್ಟಣ ಹಾಗೂ ಗ್ರಾಮೀಣ ಭಾಗಗಳಲ್ಲಿ ಕುಡಿವ ನೀರು ಸಮಸ್ಯೆಯಾಗದಂತೆ ನೋಡಿಕೊಳ್ಳಿ. ಮಳೆಗಾಲ ಹಿನ್ನೆಲೆಯಲ್ಲಿ ಪೈಪ್‌ಲೈನ್ ಹಾಗೂ ಬೋರವೆಲ್‌ಗಳಲ್ಲಿ ಕಲುಷಿತ ನೀರು ಬೆರೆಯದಂತೆ ಎಚ್ಚರವಹಿಸಿ. ರಿಪೇರಿ ಅಗತ್ಯವಿದ್ದಲ್ಲಿ ತಕ್ಷಣ ಮಾಡಿ. ಯಾವುದೇ ವಿಳಂಬ ಮಾಡುವಂತಿಲ್ಲ. ಏನಾದೂ ಅನಾಹುತಗಳಾದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಯಾಗಿಸಲಾಗುವುದೆಂದು ಎಚ್ಚರಿಸಿದರು.
ಎಡಿಸಿ ಸಾವಿತ್ರಿ ಕಡಿ ಮಾತನಾಡಿ, ಜಿಲ್ಲೆಯಲ್ಲಿ ಈವರೆಗೆ ಸಿಡಿಲಿನಿಂದ ಐವರು ಹಾಗೂ ಮನೆ ಕುಸಿದು ಇಬ್ಬರು ಮೃತಪಟ್ಟಿದ್ದು, ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. ಈವರೆಗೆ 80 ಮನೆ ಹಾನಿಯಾಗಿದ್ದು, 41 ಜಾನುವಾರು ಮೃತಪಟ್ಟಿದ್ದು, ಸಂಬಂಧಿಸಿದವರಿಗೆ ನಿಯಮನುಸಾರ ಪರಿಹಾರ ಮೊತ್ತ ಬಿಡುಗಡೆಗೊಳಿಸಲಾಗಿದೆ ಎಂದರು.


ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಮಾತನಾಡಿ, ಜಿಲ್ಲೆಯಲ್ಲಿ ಜುಲೈನಲ್ಲಿ ವಾಡಿಕೆಗಿಂತ ಶೇ.64ರಷ್ಟು ಹೆಚ್ಚುವರಿ ಮಳೆಯಾಗಿದೆ. 3.08ಲಕ್ಷ ಹೆಕ್ಟರ್ ಬಿತ್ತನೆ ಗುರಿ ಇದ್ದು, 1.96ಲಕ್ಷ ಹೆಕ್ಟರ್ ಬಿತ್ತನೆಯಾಗಿದೆ. ಭತ್ತ, ಜೋಳ, ಮೆಕ್ಕೆಜೋಳ, ಸಜ್ಜೆ, ನವಣೆ, ತಿಗರಿ, ಹುರುಳಿ, ಹೆಸರು, ಅಲಸಂದಿ, ಅವರೆ, ಸೂರ್ಯಕಾಂತಿ, ಹತ್ತಿ, ಕಬ್ಬು ಬೆಳೆ ಬಿತ್ತನೆಯಾಗಿದೆ. ಬೇಡಿಕೆಗೆ ತಕ್ಕಂತೆ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನಿದ್ದು, ರೈತರಿಗೆ ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.


ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು, ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ, ಎಸ್ಪಿ ಯಶೋದಾ ವಂಟಗೋಡಿ, ಸಹಾಯಕ ಆಯುಕ್ತ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಪಂ ಉಪ ಕಾರ್ಯದರ್ಶಿ ಮಲ್ಲಪ್ಪ ಕೆ., ಜಿಪಂ ಯೋಜನಾ ನಿರ್ದೇಶಕ ಟಿ.ಕೃಷ್ಣಮೂರ್ತಿ, ಮುಖ್ಯ ಯೋಜನಾಧಿಕಾರಿ ಮಂಜುನಾಥ ಡಿ. ಇತರ ಅಧಿಕಾರಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net