ಕ್ರೀಡಾಕೂಟದಲ್ಲಿ ಮ.ಬೆಟ್ಟದ ವಿದ್ಯಾರ್ಥಿಗಳ ಸಾಧನೆ

01 HANUR 3
Published on

ಹನೂರು: ಪಟ್ಟಣದ ಶ್ರೀಮಲೆಮಹದೇಶ್ವರ ಕ್ರೀಡಾಂಗಣದಲ್ಲಿ ಸೋಮವಾರ ನಡೆದ 14 ವರ್ಷದೊಳಗಿನ ಶಾಲಾ ಮಕ್ಕಳ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಶ್ರೀಮಹದೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಜಯಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.

ಕ್ರೀಡಾಕೂಟದಲ್ಲಿ ಶಾಲೆಯ ಬಾಲಕಿಯರ ತಂಡ ಖೋ ಖೋ ಹಾಗೂ ಬಾಲ್ ಬ್ಯಾಡ್ಮಿಟನ್‌ನಲ್ಲಿ ಪ್ರಥಮ ಸ್ಥಾನ, ಎತ್ತರ ಜಿಗಿತದಲ್ಲಿ ಆರ್.ರೀನಾ ಪ್ರಥಮ ಸ್ಥಾನ ಹಾಗೂ 200 ಮೀಟರ್ ಓಟದ ಸ್ಪರ್ಧೆಯಲ್ಲಿ ತನುಶ್ರೀ ತೃತೀಯ ಸ್ಥಾನ ಪಡೆದಿದ್ದಾರೆ.

ಈ ಸಂಬಂಧ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ. ಶ್ರೀಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರು ವಿಜಯವಾಣಿಯೊಂದಿಗೆ ಮಾತನಾಡಿ, ಶ್ರೀಮಠದ ಸಂಸ್ಥೆಯಲ್ಲಿ ಶಿಕ್ಷಣ ಪಡೆಯುತ್ತಿರುವ ಮಕ್ಕಳು ಬಡ ಕುಟುಂಬ ಹಾಗೂ ಕಾಡಂಚಿನ ಗ್ರಾಮಕ್ಕೆ ಸೇರಿದ್ದಾರೆ. ಹಾಗಾಗಿ ಉಚಿತವಾಗಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಜತೆಗೆ ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿಯನ್ನು ಮೂಡಿಸಲಾಗುತ್ತಿದ್ದು, ಕಳೆದ ಹಲವು ವರ್ಷದಿಂದಲೂ ಮಕ್ಕಳು ಉತ್ತಮ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದಿದ್ದಾರೆ. ಇದೀಗ ನಡೆದ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲೂ ಸಂಸ್ಥೆಯ ಮಕ್ಕಳು ವಿವಿಧ ಪಂದ್ಯದಲ್ಲಿ ಭಾಗವಹಿಸಿ ಹೆಚ್ಚಿನ ರೀತಿಯಲ್ಲಿ ಜಯಗಳಿಸಿರುವುದು ಹೆಮ್ಮೆಯ ಸಂಗತಿ. ಸಾಧನೆಗೈದು ಸಂಸ್ಥೆಗೆ ಕೀರ್ತಿ ತಂದುಕೊಟ್ಟ ವಿದ್ಯಾರ್ಥಿಗಳು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಶ್ರಮ ಅಪಾರ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ತಾಲೂಕು, ಜಿಲ್ಲೆ ಹಾಗೂ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲೂ ಯಶಸ್ಸು ಲಭಿಸಲು ಎಂದು ಆಶಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net