ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ

06 CRP-2A.
Published on

ಚನ್ನರಾಯಪಟ್ಟಣ: ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ಸರ್ವತೋಮುಖ ಬೆಳವಣಿಗೆ ಸಾಧ್ಯ ಎಂದು ನವೋದಯ ವಿದ್ಯಾಸಂಸ್ಥೆಯ ಅಧ್ಯಕ್ಷ ಒ.ಆರ್.ರಂಗೇಗೌಡ ತಿಳಿಸಿದರು.

ಪಟ್ಟಣದ ನವೋದಯ ವಿದ್ಯಾಸಂಸ್ಥೆ ಆವರಣದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬುಧವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ವೈಯಕ್ತಿಕ ತಪ್ಪುಗಳನ್ನು ತಿದ್ದುಕೊಂಡು ಶಿಸ್ತು ಬೆಳೆಸಿಕೊಳ್ಳಲು ಕ್ರೀಡೆ ನೆರವಾಗುತ್ತದೆ. ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಈ ಮೂಲಕ ಧೈರ್ಯ ಮತ್ತು ಸಾಹಸ ಗುಣಗಳನ್ನು ವೃದ್ಧಿಸುತ್ತದೆ. ಕ್ರೀಡಾ ಕ್ಷೇತ್ರವು ಇಚ್ಛಾಶಕ್ತಿ, ಏಕಾಗ್ರತೆ ಮತ್ತು ಸ್ಪರ್ಧಾ ಮನೋಭಾವವನ್ನು ಬೆಳೆಸುತ್ತದೆ ಎಂದರು.

ನಿರಂತರ ಪ್ರಯತ್ನದಿಂದ ಮಾತ್ರ ಸಾಧನೆ ಸಾಧ್ಯ. ಕ್ರೀಡಾಪಟುಗಳಿಗೆ ಉತ್ತಮ ತರಬೇತಿ ಅಗತ್ಯ. ಮಕ್ಕಳು ಮುಂದಿನ ಹಂತದ ಸ್ಪರ್ಧೆಗಳಿಗೆ ತಯಾರಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ಕ್ರೀಡಾಪಟುಗಳಾದ ಜಿ.ಜಿ.ಲೋಕೇಶ್, ಎಸ್.ಕೆ.ಶ್ರವಂತ್ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ನಿರ್ದೇಶಕ ಶಿವಕುಮಾರ್, ಎಲ್ಲ ವಿಭಾಗದ ಮುಖ್ಯಸ್ಥರು, ಶಿಕ್ಷಕರು, ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net