ಕ್ಷಯರೋಗ ತಡೆಗೆ ಸಹಕಾರ ಅಗತ್ಯ

bkt-7-2
ಬಾಗಲಕೋಟೆ ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜಿಲ್ಲೆಯ ಕೈಗಾರಿಕಾ ಸಂಸ್ಥೆಗಳಿಗೆ ಕ್ಷಯರೋಗ ಅರಿವು ಕಾರ್ಯಾಗಾರವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಶ್ರೀ ಎಮ್ಮಿ ಉದ್ಘಾಟಿಸಿದರು. ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಸುವರ್ಣ ಕುಲಕರ್ಣಿ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಬಿ.ಜಿ.ಹುಬ್ಬಳ್ಳಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕುಸುಮಾ ಮಾಗಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಅನೀಲ ಬಗಟಿ ಉಪಸ್ಥಿತರಿದ್ದರು.
Published on

ಬಾಗಲಕೋಟೆ: ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತಿರುವ ಕ್ಷಯರೋಗ ತಡೆಗೆೆ ಎಲ್ಲರ ಸಹಕಾರ ಅಗತ್ಯವಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಶ್ರೀ ಎಮ್ಮಿ ಹೇಳಿದರು.

ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜಿಲ್ಲೆಯ ಕೈಗಾರಿಕಾ ಸಂಸ್ಥೆಗಳಿಗೆ ಕ್ಷಯರೋಗ ಅರಿವು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಸದ್ಯ ೨೮೩೩ ಕ್ಷಯರೋಗ ಪ್ರಕರಣಗಳು ಇವೆ. ಇಂದಿನ ತಂತ್ರಜ್ಞಾನದ ಯುಗದಲ್ಲಿಯೂ ಸಹ ಕ್ಷಯರೋಗವನ್ನು ನಿಭಾಯಿಸಬೇಕಾಗಿದೆ ಎಂದರು.

ಕ್ಷಯರೋಗ ತಡೆಯಲು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಾಗಿದೆ. ರೋಗ ತಡೆಯುವುದು ಸಮಾಜದ ಮುಖ್ಯ ಕೆಲಸವೆಂದು ತಿಳಿದು ಎಲ್ಲರೂ ಕೈಜೋಡಿಸಿದಾಗ ರೋಗ ಪತ್ತೆಗೆ ಅನುಕೂಲವಾಗುತ್ತದೆ. ತಪಾಸಣೆಗೆ ಒಳಗಾದಾಗ ಮಾತ್ರ ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ. ಒಂದು ಪಾಜಿಟಿವ್ ಕೇಸ್ ಪತ್ತೆಯಾದಲ್ಲಿ ಅದರ ಹಿಂದೆ ಮೂರು ಜನರನ್ನು ಪರೀಕ್ಷೆಗೆ ಒಳಪಡಿಸಬೇಕಿದೆ. ಕಾರ್ಖಾನೆಗಳಲ್ಲಿ ಸತತ ಮೂರು ವಾರಗಳ ಕಾಲ ಜ್ವರ, ಕೆಮ್ಮು ಇದ್ದರೆ ತಿಳುವಳಿಕೆ ನೀಡಿ ಪರೀಕ್ಷೆಗೆ ಒಳಪಡಿಸುವ ಕಾರ್ಯವಾಗಬೇಕು ಎಂದು ಹೇಳಿದರು.

ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಸುವರ್ಣ ಕುಲಕರ್ಣಿ, ಬರುವ ೨೦೨೫ ರೊಳಗಾಗಿ ಕ್ಷಯ ಮುಕ್ತ ರಾಜ್ಯ, ಜಿಲ್ಲೆಯನ್ನಾಗಿಸಲು ಎಲ್ಲರ ಸಹಕಾರ ಅಗತ್ಯವಾಗಿದೆ. ಕೆಮ್ಮುವಾಗ, ಸೀನುವಾಗ ಒಬ್ಬರಿಂದ ಮತ್ತೊಬ್ಬರಿಗೆ ಕ್ಷಯರೋಗ ಹರಡುತ್ತಿದೆ. ೨೦೨೦-೨೧ರ ಸಮೀಕ್ಷೆಯ ಪ್ರಕಾರ ದೇಶದಲ್ಲಿ ಒಂದು ಲಕ್ಷ ಜನರ ತಪಾಸಣೆಯಿಂದ ೩೧೬ ಜನರಲ್ಲಿ ಕ್ಷಯರೋಗ ಕಂಡುಬರುತ್ತಿವೆ. ರಾಜ್ಯದಲ್ಲಿ ಒಂದು ಲಕ್ಷ ಜನರ ಪೈಕಿ ೧೬೭ ಜನರಲ್ಲಿ ಕಂಡು ಬರುತ್ತಿದೆ. ಇದನ್ನು ಮುಕ್ತವಾಗಿಸಲು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಕ್ಷಯರೋಗ ನಿರ್ಮೂಲನೆ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಶ್ರೀ ಎಮ್ಮಿ ಪ್ರತಿಜ್ಞಾವಿಽಯನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಎಚ್ ಅಽಕಾರಿ ಬಿ.ಜಿ.ಹುಬ್ಬಳ್ಳಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕುಸುಮಾ ಮಾಗಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಅನೀಲ ಬಗಟಿ, ವಿಶ್ವ ಆರೋಗ್ಯ ಇಲಾಖೆಯ ಸಲಹೆಗಾರ ಸತೀಶ ಘಾಟಗೆ ಸೇರಿದಂತೆ ಸಂತೋಷ ಹುನ್ನೂರ, ರಾಘವೇಂದ್ರ ಕುಲಕರ್ಣಿ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net