

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:
ವಿಧಾನಸಭೆ ಹಾಗೂ ಲೋಕಸಭೆ ಕ್ಷೇತ್ರಗಳ ಮರು ವಿಂಗಡಣೆಯಲ್ಲಿ ಜನಸಂಖ್ಯೆಯನ್ನು ಪ್ರಮುಖ ಮಾನದಂಡವನ್ನಾಗಿ ಪರಿಗಣಿಸಬಾರದು. ಇದಕ್ಕೆ ಭೌಗೋಳಿಕ ಅಂಶಗಳನ್ನು ಪರಿಗಣಿಸದಿದ್ದರೆ ದೇಶದ ಸಮಗ್ರತೆಗೆ ಭಂಗ ಬರುವ ಸಾಧ್ಯತೆಗಳಿವೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅಭಿಪ್ರಾಯಿಸಿದರು.
ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಇತ್ತೀಚಿನ ದಶಕಗಳಲ್ಲಿ ಜನಸಂಖ್ಯೆಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿವೆ. ಕ್ಷೇತ್ರ ಮರು ವಿಗಂಡಣೆಯಲ್ಲಿ ಜನಸಂಖ್ಯೆಯನ್ನು ಮಾನದಂಡವಾಗಿ ಪರಿಗಣಿಸಿದರೆ ಈ ರಾಜ್ಯಗಳಿಗೆ ಅನ್ಯಾಯವಾಗಲಿದೆ. ಮೇಲಾಗಿ ರಾಷ್ಟ್ರದ ಹಿತದೃಷ್ಟಿಯಿಂದ ಜನಸಂಖ್ಯೆಯನ್ನು ನಿಯಂತ್ರಣಕ್ಕೆ ತಂದಿದ್ದಕ್ಕೆ ಶಿಕ್ಷೆ ಕೊಟ್ಟಂತೆ ಆಗಲಿದೆ ಎಂದರು.
ವಿಧಾನಸಭೆ ಹಾಗೂ ಲೋಕಸಭೆ ಕ್ಷೇತ್ರಗಳ ಮರು ವಿಂಗಡಣೆಯಲ್ಲಿ ಜನಸಂಖ್ಯೆ ಮಾನದಂಡ ಆಗಬಾರದು. ಜನಸಂಖ್ಯೆಯನ್ನು ಮಾನದಂಡವನ್ನಾಗಿ ಪರಿಗಣಿಸಿದರೆ ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶ ರಾಜ್ಯಗಳಿಗೆ ಲಾಭವಾಗಲಿದೆ ಎಂದರು.
ರಾಜ್ಯದಲ್ಲಿ ಹನಿಟ್ರ್ಯಾಪ್ನಂತಹ ವಿಚಾರ ಹೊಸದೇನಲ್ಲ. ವಿರೋಧ ಪಕ್ಷದವರು ಇಂತಹ ವಿಷಯಗಳನ್ನು ಹುಡುಕುತ್ತಲೇ ಇರುತ್ತಾರೆ. ಅವರ ಪ್ರಚೋದನೆಗೆ ಯಾರೂ ಒಳಗಾಗಾಗಬಾರದು. ಈ ವಿಚಾರದಲ್ಲಿ ಸದನದಲ್ಲಿ ವಿರೋಧ ಪಕ್ಷದವರು ಸಭ್ಯತೆಯನ್ನು ಮೀರಿದ್ದರಿಂದ ಅವರನ್ನು ಅಮಾನತು ಮಾಡಲಾಗಿದೆ ಎಂದು ವಿಧಾನಸಭಾಧ್ಯಕ್ಷರ ಕ್ರಮವನ್ನು ಸಮರ್ಥಿಸಿಕೊಂಡರು.
ಕಾಂಗ್ರೆಸ್ ಪಕ್ಷದೊಳಗೆ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆಗಳಾಗಬಾರದು. ಇಂತಹ ಚರ್ಚೆಗಳಿಂದ ಸರ್ಕಾರಕ್ಕೆ ಅಭದ್ರತೆ ಕಾಡುವುದು ನಿಶ್ಚಿತ. ವಿರೋಧ ಪಕ್ಷದವರು ಅದನ್ನೇ ಅಸ್ತ್ರವನ್ನಾಗಿ ಬಳಕೆ ಮಾಡುತ್ತಾರೆ. ವಿರೋಧ ಪಕ್ಷದವರಿಗೆ ಅಸ್ತ್ರವನ್ನಾಗಿ ಮಾಡಿಕೊಳ್ಳುವ ಪರಿಸ್ಥಿತಿ ತಂದುಕೊಳ್ಳುವುದು ಸರಿಯಲ್ಲ. ಅಧಿಕಾರ ಹಂಚಿಕೆ ಈ ಮೊದಲೇ ನಿರ್ಣಯವಾಗಿದೆಯೋ ಅಥವಾ ಇಲ್ಲವೋ ಎಂಬುದು ನನಗೆ ಗೊತ್ತಿಲ್ಲ. ಆ ಬಗ್ಗೆ ಪಕ್ಷದ ಹೈಕಮಾಂಡ್ ನೋಡಿಕೊಳ್ಳುತ್ತೆ. ಆದರೆ, ಪಕ್ಷದಲ್ಲಿ ಈ ವಿಚಾರವಾಗಿ ಚರ್ಚೆ ನಡೆಸುವುದು ಸೂಕ್ತವಲ್ಲ ಎಂದರು.
ಇಂಡಿ ಒಕ್ಕೂಟದಲ್ಲಿ ಯಾವುದೇ ಗೊಂದಲವಿಲ್ಲ. ಕಳೆದ ಲೋಕಸಭೆ ಚುನಾವಣೆಯಲ್ಲಿ 350-400 ಸೀಟ್ಗಳನ್ನು ಗೆಲ್ಲುತ್ತೇವೆ ಎಂದು ಹೇಳಿಕೊಂಡಿದ್ದ ಬಿಜೆಪಿ ನೇತೃತ್ವದ ಎನ್ಡಿಎಗೆ ಬ್ರೇಕ್ ಹಾಕಿದ್ದೇ ಇಂಡಿ ಒಕ್ಕೂಟ. ವಿಧಾನಸಭೆ ಚುನಾವಣೆಯಲ್ಲಿ ಲೆಕ್ಕಾಚಾರ ಬೇರೆ ಇರುತ್ತದೆ. ಪ್ರಾದೇಶಿಕ ಪಕ್ಷಗಳು ತಮ್ಮದೇ ನಿರ್ಧಾರ ಕೈಗೊಳ್ಳಲು ಸ್ವತಂತ್ರರಾಗಿರುತ್ತಾರೆ. ಅವರಿಗೆ ಅವರದ್ದೇ ಆದ ನೀತಿ, ಧೋರಣೆಗಳು ಇರುತ್ತವೆ. ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ತಾಕತ್ತು ಇಂಡಿ ಒಕ್ಕೂಟಕ್ಕೆ ಇದೆ ಎಂದು ಹೇಳಿದರು.