ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆ

Published on

ಚಾಮರಾಜನಗರ : ಕೊಳ್ಳೇಗಾಲ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.

ತಾಲೂಕಿನ ಸಂತೇಮರಹಳ್ಳಿ ಎಪಿಎಂಸಿ ಆವರಣದಲ್ಲಿ ಶನಿವಾರ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಗ್ರಾಮೀಣ ಕೈಗಾರಿಕೆ, ಮೀನುಗಾರಿಕೆ ಇಲಾಖೆ, ಅಲೆಮಾರಿ, ಅರೆ ಅಲೆಮಾರಿ ನಿಗಮದಿಂದ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಿಸಿ ಮಾತನಾಡಿದರು. ಕೊಳ್ಳೇಗಾಲ ಕ್ಷೇತ್ರದ ನೀರಾವರಿ ಯೋಜನೆಗೆ 500 ಕೋಟಿ ರೂ.ಗಿಂತಲೂ ಹೆಚ್ಚು ಅನುದಾನವನ್ನು ಸರ್ಕಾರ ನೀಡಿದೆ. ಯಳಂದೂರು ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ 35 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಈಗಾಗಲೇ ಕಾಮಗಾರಿ ಆರಂಭವಾಗಿದೆ. ಕೊಳ್ಳೇಗಾಲದಲ್ಲಿ ಮತ್ತೊಂದು ಜಿಲ್ಲಾಸ್ಪತ್ರೆ ಮಂಜೂರಾಗಿದ್ದು, ರೇಷ್ಮೆ ಕಾರ್ಖಾನೆಗಳ ಪುನಶ್ವೇತನ, ಮುಡಿಗುಂಡ ಸೇತುವೆ ನಿರ್ಮಾಣ, ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನ ಬಿಡುಗಡೆಯಾಗಿದೆ ಎಂದು ತಿಳಿಸಿದರು.

ಜಾತಿಗೊಂದು ನಿಗಮ ಸ್ಥಾಪನೆಯಾಗಿದ್ದು, ಗುರಿ ಕಡಿಮೆಯಾಗಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಪ್ರಸ್ತುತ 235 ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ ಮಾಡಲಾಗುತ್ತಿದೆ. ಜನರು ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್.ವಿ.ಚಂದ್ರು, ಚಾಮುಲ್ ಸದಸ್ಯ ಕಮರವಾಡಿ ರೇವಣ್ಣ, ಡಾ.ಬಿ.ಆರ್.ಅಂಬೇಡ್ಕರ್ ನಿಗಮದ ಜಿಲ್ಲಾ ವ್ಯವಸ್ಥಾಪಕ ರಾಜು, ಸಮಾಜ ಕಲ್ಯಾಣ ಇಲಾಖೆಯ ಕೇಶವಮೂರ್ತಿ, ಗ್ರಾಮೀಣ ಕೈಗಾರಿಕಾ ಇಲಾಖೆಯ ಪುಷ್ಪಲತಾ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net