

ಕಾರವಾರ: ಕೆಎಸ್ಆರ್ಟಿಸಿ ನೌಕರರ ಮುಷ್ಕರದಿಂದ ಜಿಲ್ಲೆಯಲ್ಲಿ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗದಂತೆ ಬಸ್ಗಳನ್ನು , ಖಾಸಗಿ ವಾಹನಗಳನ್ನು ಓಡಿಸಲು ಸೂಕ್ತ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಕೆಎಸ್ಆರ್ಟಿಸಿ ಹಾಗೂ ಆರ್ಟಿಒ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಎಸ್ಆರ್ಟಿಸಿ, ಸಾರಿಗೆ ಇಲಾಖೆ ಹಾಗೂ ವಿವಿಧ ಖಾಸಗಿ ವಾಹನಗಳ ಸಂಸ್ಥೆಯ ಅಧಿಕಾರಿಗಳೊಂದಿಗೆ ಮಂಗಳವಾರ ಸಭೆ ನಡೆಸಿ ಅವರು ಮಾತನಾಡಿದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಏ.7ರಿಂದ ರಾಜ್ಯಾದ್ಯಂತ ಕೆಎಸ್ಆರ್ಟಿಸಿ ನೌಕಕರು ಬಸ್ ಸಂಚಾರ ಸ್ಥಗಿತಗೊಳಿಸಿ ಮುಷ್ಕರ ನಡೆಸಲು ತೀರ್ವನಿಸಿದ್ದಾರೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುವ ಸಾಧ್ಯತೆ ಇದೆ.
ಕೆಎಸ್ಆರ್ಟಿ ಹಾಗೂ ಆರ್ಟಿಒ ಅಧಿಕಾರಿಗಳು ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ, ಭದ್ರತೆಯಲ್ಲಿ ಬಸ್ಗಳ ಸಂಚಾರಕ್ಕೆ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಕೆಎಸ್ಆರ್ಟಿಸಿ ಬಸ್ಗಳು ಲಭ್ಯವಿಲ್ಲದಿದ್ದಲ್ಲಿ ಅಗತ್ಯವಿರುವಲ್ಲಿ ಖಾಸಗಿ ಮ್ಯಾಕ್ಸಿ ಕ್ಯಾಬ್, ಟೆಂಪೊಟ್ರಾವೆಲ್ಸ್ ಬಳಸಬೇಕು. ಸಾರ್ವಜನಿಕರ ಹಿತದೃಷ್ಟಿಯಿಂದ ಖಾಸಗಿ ವಾಹನಗಳ ಸಂಚಾರಕ್ಕೆ ಆರ್ಟಿಒ ಅಧಿಕಾರಿಗಳು ತಾತ್ಕಾಲಿಕ ಸಂಚಾರ ಪರವಾನಗಿ ನೀಡಬೇಕು ಎಂದರು.
ಪ್ರತಿಭಟನೆ ನಡೆಸಲು ಪ್ರತಿಯೊಬ್ಬರಿಗೂ ಕಾನೂನಿನಲ್ಲಿ ಅವಕಾಶವಿದೆ. ಆದರೆ, ಅದು ಕಾನೂನು ಚೌಕಟ್ಟಿನಲ್ಲಿರಬೇಕು. ಯಾರಾದರೂ ಪ್ರಯಾಣಿಕರಿಗೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯನ್ನುಂಟುಮಾಡಿದರೆ ಅಂಥವರ ವಿರುದ್ಧ ಕಾನೂನು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಎಸ್ಪಿ ಶಿವಪ್ರಕಾಶ ದೇವರಾಜು, ಮುಷ್ಕರದ ನೆಪದಲ್ಲಿ ಸಾರ್ವಜನಿಕರು, ವಾಹನ ಸವಾರರು, ಸಾರಿಗೆ ಸಂಸ್ಥೆಯ ವಾಹನಗಳಿಗೆ ಯಾರಾದರೂ ತೊಂದರೆ ಮಾಡಿದರೆ ಅಂತಹವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಅಪರ ಜಿಲ್ಲಾಧಿಕಾರಿ ಕೃಮೂರ್ತಿ ಎಚ್.ಕೆ., ಕಾರವಾರ ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಮಕೃಷ್ಣ ರೈ, ಕೆಎಸ್ಆರ್ಟಿಸಿ ಹಾಗೂ ಖಾಸಗಿ ವಾಹನಗಳ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
290 ಬಸ್ಗಳ ಸಂಚಾರ: ಕೆಎಸ್ಆರ್ಟಿಸಿ ಶಿರಸಿ ವಿಭಾಗೀಯ ನಿಯಂತ್ರಣಾಧಿಕಾರಿ ರಾಜಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ 290 ಬಸ್ಗಳನ್ನು ಓಡಿಸಲಾಗುತ್ತಿದ್ದು, ನೌಕರರ ಮುಷ್ಕರದ ಹಿನ್ನಲೆಯಲ್ಲಿ ಈ ಎಲ್ಲ ಬಸ್ಗಳ ಸಂಚಾರದಲ್ಲಿ ವ್ಯತ್ಯಯ ಕಾಣಬಹುದಾಗಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡಲು ಪ್ರಯತ್ನಿಸಲಾಗುವುದು ಎಂದರು.