ಖಾಸಗಿ ಶಾಲೆಗಳಿಗೆ ಪರವಾನಗಿ ನೀಡಬೇಡಿ

2-RNR-04
Published on

ರಾಣೆಬೆನ್ನೂರ: ರಾಜ್ಯ ಸರ್ಕಾರ ನೂತನ ಖಾಸಗಿ ಶಾಲೆಗಳಿಗೆ ಪರವಾನಗಿ ನೀಡುವುದನ್ನು ನಿಲ್ಲಿಸುವ ಮೂಲಕ ಖಾಸಗಿ ಶಾಲೆಗಳ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿ ಜನ ಜಾಗೃತಿ ವೇದಿಕೆ ವತಿಯಿಂದ ಸೋಮವಾರ ನಗರದ ಮಿನಿ ವಿಧಾನಸೌಧ ಎದುರು ಪ್ರತಿಭಟನೆ ನಡೆಸಲಾಯಿತು.

ಸಂಘಟನೆಯ ಅಧ್ಯಕ್ಷ ಮಲ್ಲಿಕಾರ್ಜುನ ತೆಗ್ಗಿನ ಮಾತನಾಡಿ, ರಾಜ್ಯದಲ್ಲಿ ಈಗಾಗಲೇ 50 ಸಾವಿರಕ್ಕೂ ಅಧಿಕ ಖಾಸಗಿ ಶಾಲೆಗಳಿವೆ. 1500ಕ್ಕೂ ಅಧಿಕ ಸರ್ಕಾರಿ ಶಾಲೆಗಳು ಮುಚ್ಚುತ್ತ ಬಂದಿವೆ. ಖಾಸಗಿ ಶಾಲೆಯವರು ಮಕ್ಕಳಿಂದ ಹೆಚ್ಚಿನ ಪ್ರಮಾಣದಲ್ಲಿ ಡೊನೇಷನ್ ವಸೂಲಿ ಮಾಡುತ್ತಿದ್ದಾರೆ. ಇದು ಬಡವರಿಗೆ ಹೊರೆಯಾಗಿ ಪರಿಣಮಿಸಿದೆ. ಆದ್ದರಿಂದ ರಾಜ್ಯ ಸರ್ಕಾರ ಪ್ರಸಕ್ತ ವರ್ಷದಿಂದ ನೂತನ ಖಾಸಗಿ ಶಾಲೆ ಆರಂಭಕ್ಕೆ ಪರವಾನಗಿ ನೀಡುವುದನ್ನು ಸ್ಥಗಿತಗೊಳಿಸಬೇಕು. ಇದರಿಂದ ಸರ್ಕಾರಿ ಶಾಲೆಗಳನ್ನು ಬೆಳೆಸಲು ಅನುಕೂಲವಾಗುತ್ತದೆ. ಈ ಕುರಿತು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಶಿರಸ್ತೇದಾರ್ ಎಂ.ಎನ್. ಹಾದಿಮನಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಪ್ರಮುಖರಾದ ಸಿದ್ದಪ್ಪ ಗುಡಿಮುಂದ್ಲರ, ಮಂಜಪ್ಪ ಬಿ.ಎಚ್., ಹನುಮಂತಪ್ಪ ಡಿ., ಬಸವರಾಜ ಸಾವಕ್ಕನವರ, ಬಿ.ಡಿ. ಸವಣೂರ, ಶ್ರೀಧರ ಚಲವಾದಿ, ಚಿಕ್ಕಪ್ಪ ಚಲವಾದಿ ಮತ್ತಿತರರು ಪಾಲ್ಗೊಂಡಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net