

ಚಿಕ್ಕಬಳ್ಳಾಪುರ : ಆತ್ಮಹತ್ಯೆ ಯಾವುದೇ ಸಮಸ್ಯೆಗೆ ಪರಿಹಾರವಲ್ಲ. ಖಿನ್ನತೆ ಒಳಗಾಗದೇ ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸುವ ಮೂಲಕ ಉತ್ತಮ ಜೀವನ ನಡೆಸಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಭೈರಪ್ಪ ಶಿವಲಿಂಗ ನಾಯಕ ತಿಳಿಸಿದ್ದಾರೆ.
ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಆತ್ಮಹತ್ಯೆ ತಡೆ ಸಪ್ತಾಹದಲ್ಲಿ ಮಾತನಾಡಿದರು.
ಖಿನ್ನತೆಯೇ ಆತ್ಮಹತೆಗೆ ಪ್ರಮುಖ ಕಾರಣ, ಶೇ.70% ರಷ್ಟು ಜನ ಈ ಸಮಸ್ಯೆ ಎದುರಿಸುತ್ತಿದ್ದು ಇದರಲ್ಲಿ ಮಹಿಳೆಯರ ಪಾಲು ಹೆಚ್ಚಿದೆ, ಆತ್ಮಹತ್ಯೆ ಪ್ರಕರಣಗಳಲ್ಲಿ ಭಾರತ ವಿಶ್ವದಲ್ಲಿ 21ನೇ ಸ್ಥಾನದಲ್ಲಿದೆ ಎಂದರು.
ನಿರಾಸೆ ಭಾವನೆಯಿಂದ ಆತ್ಮಹತ್ಯೆಗಳು ನಡೆಯುತ್ತಿವೆ. ಸಕಾಲಕ್ಕೆ ಮಳೆ ಬೆಳೆ ಬಾರದಿರುವುದು ಮತ್ತು ಸಾಲದ ಸಂಕಷ್ಟ, ನೆರವಿನ ಕೊರತೆ ಹಿನ್ನೆಲೆಯಲ್ಲಿ ಬೇರೆ ದಾರಿ ಕಾಣದೇ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಧೈರ್ಯ ತುಂಬುವ ಉತ್ತಮ ಮಾರ್ಗದರ್ಶನ ಅಗತ್ಯ ಎಂದರು.
ಆತ್ಮಹತ್ಯೆ ವಿರುದ್ಧ ಜನರಲ್ಲಿ ತಿಳಿವಳಿಕೆ ಮೂಡಿಸುವ ಉದ್ದೇಶದಿಂದಲೇ ವಿಶ್ವಸಂಸ್ಥೆ ಆತ್ಮಹತ್ಯೆ ತಡೆ ದಿನ ಜಾರಿಗೆ ತಂದಿದೆ. ಮಾನಸಿಕ ಸಮಸ್ಯೆಯಿಂದ ಬಳಲುವವರನ್ನು ಗುರುತಿಸಿ, ಆತ್ಮಸ್ಥೈರ್ಯ ತುಂಬುವ ಜತೆಗೆ ಸಕಾಲದಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಇಂದಿರಾ ಆರ್ ಕಬಾಡೆ ಎಂದರು.
ಆತ್ಮಹತ್ಯೆ ತಡೆಗಟ್ಟುವ ಪ್ರತಿಜ್ಞಾವಿಧಿ ಬೋಧಿಸಲಾಯಿತು. ನ್ಯಾಯಾಧೀಶರಾದ ಭಾನುಮತಿ, ದೇವರಾಜ್, ಜಿಲ್ಲಾ ಮಾನಸಿಕ ಆರೋಗ್ಯ ತಜ್ಞ ಡಾ.ಶಿವಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕ ರಮೇಶ್, ತಾಲೂಕು ಆರೋಗ್ಯಾಧಿಕಾರಿ ಡಾ ಮಂಜುಳಾ ಇತರರಿದ್ದರು.