

ತುಮಕೂರು;ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಸರ್ಕಾರದಿಂದ ನೀಡುವ ಸೌಲಭ್ಯ ಹಾಗೂ ಕಾನೂನು ಸೇವೆಗಳ ಬಗ್ಗೆ ದಲಿತ ಕಾಲನಿಗಳಲ್ಲಿ ಅರಿವು ಮೂಡಿಸಲು ಜಿಲ್ಲಾಡಳಿತ ಮುಂದಾಗಿದೆ.
ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಜಾಗೃತಿ ಉಸ್ತುವಾರಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಶುಭಕಲ್ಯಾಣ್, ಸರ್ಕಾರದಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನೀಡುತ್ತಿರುವ ಸವಲತ್ತುಗಳ ಬಗೆಗಿನ ಮಾಹಿತಿ ಕೊರತೆಯಿಂದ ಅರ್ಹರಿಗೆ ಸೌಲಭ್ಯ ದೊರೆಯುತ್ತಿಲ್ಲ. ಈ ನಿಟ್ಟಿನಲ್ಲಿ ಸರ್ಕಾರಿ ಯೋಜನೆಗಳ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಎಸ್ಸಿ, ಎಸ್ಟಿ ಸಮುದಾಯದವರು ಗಂಗಾಕಲ್ಯಾಣ ಯೋಜನೆಯಡಿ ಕೊರೆಸಲಾದ ಕೊಳವೆ ಬಾವಿಗಳಲ್ಲಿ ನೀರು ಸಿಗದಿದ್ದರೂ ಪೈಪ್ಗಳು, ಮೋಟಾರ್ ಪಂಪ್ ಸೇರಿ ವಿದ್ಯುತ್ ಪರಿವರ್ತಕಗಳನ್ನು ರೈತರಿಗೆ ನೀಡಲಾಗಿದೆ ಎಂದು ಸುಳ್ಳು ದಾಖಲೆ ಸೃಷ್ಟಿಸುತ್ತಿರುವ ದೂರುಗಳಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಶುಭಕಲ್ಯಾಣ್ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಜಿಪಂ ಸಿಇಒ ಜಿ.ಪ್ರಭು ಮಾತನಾಡಿ, ಜಿಲ್ಲೆಯಲ್ಲಿ ಮೊದಲ ಬಾರಿಗೆ ಆಶ್ರಯ ಯೋಜನೆಯಡಿ ನಿವೇಶನ ರಹಿತ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಯಾ ತಾಲೂಕಿನ ತಹಸೀಲ್ದಾರ್ ಮತ್ತು ತಾಪಂ ಇಒಗಳ ಸಮ್ಮುಖದಲ್ಲಿ ಗ್ರಾಮಸಭೆ ನಡೆಸಿ ಫಲಾನುಭವಿಗಳನ್ನು ಆಯ್ಕೆ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಿ ಅರ್ಹರಿಗೆ ನಿವೇಶನ ದೊರಕಿಸಿಕೊಡಲಾಗುವುದು. ಎಸ್ಸಿ, ಎಸ್ಟಿ ಸಮುದಾಯದವರಿಗೆ ಮೀಸಲಾತಿ ಆಧಾರದ ಮೇಲೆ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.
ಇನಾಂ ಜಮೀನುಗಳ ಉಳುಮೆಗೆ ಸಂಬಂಧಪಟ್ಟಂತೆ ಬಿತ್ತನೆ ಬೀಜ ಹಾಗೂ ಕೃಷಿ ಸಲಕರಣೆಗಳನ್ನು ಕೃಷಿ ಇಲಾಖೆಯಿಂದ ನೀಡದಿರುವ ಬಗ್ಗೆ ಸಮಿತಿ ಸದಸ್ಯರು ಅಸಮಾಧಾನ ಹೊರಹಾಕಿದರು. ಈ ವೇಳೆ ಜಂಟಿ ಕೃಷಿ ನಿರ್ದೇಶಕ ರಮೇಶ್, ಕೃಷಿ ಇಲಾಖೆಯಿಂದ ಬಿತ್ತನೆ ಬೀಜ ಹಾಗೂ ಕೃಷಿ ಸಲಕರಣೆ ಪಡೆಯಲು ಫಲಾನುಭವಿಗಳು ಫ್ರೂಟ್ಸ್ ಐಡಿ ಹೊಂದಿರುವುದು ಕಡ್ಡಾಯವಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪಂಗಡದವರ ಇನಾಂ ಜಮೀನುಗಳಿಗೆ ಸಹಾಯಧನ ಆಧಾರದಲ್ಲಿ ಬಿತ್ತನೆ ಬೀಜ ಹಾಗೂ ಕೃಷಿ ಸಲಕರಣೆ ನೀಡಲು ಕೇಂದ್ರ ಕಚೇರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ
ಎಂದು ಮಾಹಿತಿ ನೀಡಿದರು.
ಕಾರ್ಮಿಕ ಅಧಿಕಾರಿಗೆ ಎಚ್ಚರಿಕೆ : ಜಿಲ್ಲೆಯಲ್ಲಿ ಕಾರ್ಮಿಕ ನೀತಿ ಉಲ್ಲಂಘಿಸಿ ಕೆಲವು ಕೈಗಾರಿಕೆಗಳಲ್ಲಿ ಸಮಯ ಮೀರಿ ಕಾರ್ಮಿಕರಿಂದ ದುಡಿಸಿಕೊಳ್ಳುತ್ತಿದ್ದರೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಸಮಿತಿ ಸದಸ್ಯರು ಆರೋಪಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ಕೈಗಾರಿಕೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಡಿಸಿ ಶುಭಕಲ್ಯಾಣ್ ಖಡಕ್ ಎಚ್ಚರಿಕೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಪಾಲಿಕೆ ಆಯುಕ್ತೆ ಬಿ.ವಿ.ಆಶ್ವಿಜ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಉಪ ವಿಭಾಗಾಧಿಕಾರಿಗಳಾದ ಗೋಟೂರು ಶಿವಪ್ಪ, ಬಿ.ಕೆ.ಸಪ್ತಶ್ರೀ, ಜಿಲ್ಲಾಮಟ್ಟದ ಅಧಿಕಾರಿಗಳು, ದಲಿತ ಮುಖಂಡರು ಉಪಸ್ಥಿತರಿದ್ದರು.