ಗಡಿಗ್ರಾಮಗಳ ಅಭಿವೃದ್ಧಿಗೆ ಕ್ರಮ : ಶಾಸಕ ಡಾ.ಮಂತರ್‌ಗೌಡ ಭರವಸೆ

images
Published on

ಕೊಡಗು : ಕುಶಾಲನಗರ ತಾಲೂಕಿನ ಗಡಿಗ್ರಾಮಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಡಾ.ಮಂತರ್‌ಗೌಡ ಹೇಳಿದರು.


ಶಿರಂಗಾಲ, ತೊರೆನೂರು ಹಾಗೂ ಹೆಬ್ಬಾಲೆ ಗ್ರಾಮಗಳಲ್ಲಿ ಬುಧವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಏರ್ಪಡಿಸಿದ್ದ ಕೃತಜ್ಞತಾ ಸಭೆಯಲ್ಲಿ ಪಾಲ್ಗೊಂಡು ಗೆಲುವಿಗೆ ಕಾರಣರಾದ ಮತದಾರರಿಗೆ ಕೃತಜ್ಞತೆ ಅರ್ಪಿಸಿದರು.


ಚುನಾವಣೆ ಸಂದರ್ಭದಲ್ಲಿ ನಾವು ನೀಡಿದ್ದ 5 ಗ್ಯಾರಂಟಿಗಳನ್ನು ಈಡೇರಿಸುತ್ತೇವೆ. ಇದರಲ್ಲಿ ಯಾವುದೇ ಅನುಮಾನ ಬೇಡ. ವಿರೋಧ ಪಕ್ಷದವರು ಇಲ್ಲಸಲ್ಲದ ಹೇಳಿಕೆಗಳನ್ನು ನೀಡುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಈ ಹಿಂದೆ ಬಿಜೆಪಿಯವರು ನೀಡಿದ್ದ ಭರವಸೆಗಳನ್ನು ಏಕೆ ಈಡೇರಿಸಲಿಲ್ಲ ಎಂದು ಖಾರವಾಗಿ ಪ್ರಶ್ನಿಸಿದರು.


ಶಾಸಕರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಪ್ರತಿ ಗ್ರಾಮದಲ್ಲೂ ಕಾರ್ಯಕರ್ತರು ವಾದ್ಯಗೋಷ್ಠಿ, ಡೊಳ್ಳು ಕುಣಿತ ಸಮೇತ ಮೆರವಣಿಗೆ ನಡೆಸಿದರು. ಶಾಸಕರನ್ನು ಸನ್ಮಾನಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಡಾ.ಮಂತರ್‌ಗೌಡ ವಿವಿಧ ಗ್ರಾಮದ ಹಲವು ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದರು.


ಗ್ರಾಮ ಪಂಚಾಯಿತಿ ಸದಸ್ಯರಾದ ಟಿ.ಪಿ.ಹಮೀದ್, ಅರುಣ್ ರಾವ್, ಅನಂತ್, ಶಿವಕುಮಾರ, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಶಿರಂಗಾಲ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎನ್.ರಮೇಶ್, ಸಹಕಾರ ಸಂಘದ ಮಾಜಿ ಅಧ್ಯಕ್ಷ ಎಸ್.ಎಸ್. ಚಂದ್ರಶೇಖರ್, ತೊರೆನೂರು ಸಹಕಾರ ಸಂಘದ ಮಾಜಿ ಅಧ್ಯಕ್ಷ ಕೆ.ಎಸ್.ಕೃಷ್ಣೇಗೌಡ, ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎಸ್.ಮಂಜುನಾಥ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net