ಗಣರಾಜ್ಯೋತ್ಸವ ಅದ್ದೂರಿ ಆಚರಣೆಗೆ ತಯಾರಿ

kdr meet
ಕಡೂರು ತಾಪಂನಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯಲ್ಲಿ ಪ್ರಭಾರ ತಹಸೀಲ್ದಾರ್ ಮಂಜುನಾಥಸ್ವಾಮಿ ಮಾತನಾಡಿದರು. ಇಒ ಸಿ.ಆರ್.ಪ್ರವೀಣ್ ಇದ್ದರು.
Published on

ಕಡೂರು: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಆಡಳಿತದಿಂದ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪ್ರಭಾರ ತಹಸೀಲ್ದಾರ್ ಮಂಜುನಾಥ್‌ಸ್ವಾಮಿ ತಿಳಿಸಿದರು.

ತಾಪಂನಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಅಂದು ಪಟ್ಟಣದ ವಿವಿಧ ಶಾಲಾ ಕಾಲೇಜು ಮಕ್ಕಳಿಂದ ಡಾ. ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ರಾಷ್ಟ್ರಧ್ವಜಾರೋಹಣ ನಡೆದ ನಂತರ ಪಥಸಂಚಲನ, ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಶಾಲಾ ಮಕ್ಕಳಿಗೆ ಭಾಷಣ ಮಾಡಲು ಅವಕಾಶ ಕಲ್ಪಿಸಿಕೊಡಲಾಗುತ್ತದೆ. ಪಥಸಂಚಲನದಲ್ಲಿ 600ಕ್ಕೂ ಹೆಚ್ಚು ಮಕ್ಕಳು, ಮಾಜಿ ಸೈನಿಕರು, ಪೊಲೀಸರು ಕವಾಯತು ನಡೆಸಲಿದ್ದಾರೆ ಎಂದರು.

ಸಂಜೆ ಗಣಪತಿ ಪೆಂಡಾಲ್ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಶಾಲಾ ಮಕ್ಕಳಿಗೆ ಸೀಮಿತವಾಗಿತ್ತು. ಆದರೆ ಈ ಬಾರಿ ಸ್ಥಳೀಯ ಸಂಘ, ಸಂಸ್ಥೆಗಳ ಕಲಾವಿದರಿಗೂ ಅವಕಾಶ ಕಲ್ಪಿಸಲಾಗಿದೆ. ಕಡೂರು ಬಿಇಒ ಕಚೇರಿ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದರು.

ಪುರಸಭೆ ಆಡಳಿತ ಕುಡಿಯುವ ನೀರಿನ ವ್ಯವಸ್ಥೆ ಮಾಡಲಿದ್ದು, ಮೆಸ್ಕಾಂನಿಂದ ವಿಶೇಷ ವೃತ್ತಗಳು, ಗಣೇಶ-ಆಂಜನೇಯ ಸ್ವಾಮಿ ದೇವಾಲಯದಿಂದ ಬಸವೇಶ್ವರ ವೃತ್ತದ ಮೂಲಕ ಸಂಗೊಳ್ಳಿ ರಾಯಣ್ಣ, ಕನಕ ವೃತ್ತದವರೆಗೂ ವಿದ್ಯುತ್ ದೀಪಾಲಂಕಾರ ಮಾಡಲು ಸೂಚಿಸಲಾಗುವುದು ಎಂದರು. ತಾಪಂ ಇಒ ಸಿ.ಆರ್.ಪ್ರವೀಣ್, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net