

ಸೋಮವಾರಪೇಟೆ: ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ವತಿಯಿಂದ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಆಯೋಜಿಸಿದ್ದ ಗಣಿತ ಸ್ಪರ್ಧೆಯ ವಿಜೇತ ಮಕ್ಕಳಿಗೆ ಗುರುವಾರ ದೊಡ್ಡಮಳ್ತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಎಂ.ಗೋಪಾಲಕೃಷ್ಣ ಬಹುಮಾನ ವಿತರಿಸಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅನೇಕ ಯೋಜನೆಗಳನ್ನು ರೂಪಿಸಿದೆ. ಪಾಲಕರು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು. ಹೆಚ್ಚಿನ ಜ್ಞಾನ ಪಡೆದ ಶಿಕ್ಷಕರು ಸರ್ಕಾರಿ ಶಾಲೆಯಲ್ಲಿ ಇದ್ದಾರೆ. ಉತ್ತಮವಾಗಿ ಕಲಿಸುತ್ತಿದ್ದಾರೆ. ಮಕ್ಕಳೂ ಕಲಿಕೆಗೆ ಹೆಚ್ಚಿನ ಸಮಯವನ್ನು ಮೀಸಲಿಡಬೇಕು ಎಂದು ಹೇಳಿದರು.
ಮುಖ್ಯಶಿಕ್ಷಕಿ ತಂಗಮ್ಮ, ಪಂಚಾಯಿತಿ ಕಾರ್ಯದರ್ಶಿ ಕೆ.ವಿ.ಹರೀಶ್, ಶಿಕ್ಷಕರಾದ ಶಿವಶಂಕರ್, ಮೋಹನ್‌ಕುಮಾರಿ ಇತರರಿದ್ದರು.