ಗಸ್ತಿಗೆ ವಾಹನ, ಇಂಧನದ ಕೊರತೆ ಇಲ್ಲ, ಎಸ್‌ಪಿ

CTD SP RANJITKUMAR BANDARU
Published on

ಚಿತ್ರದುರ್ಗ: ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುವುದಾಗಿ ಎಸ್‌ಪಿ ರಂಜಿತ್‌ಕುಮಾರ್ ಬಂಡಾರು ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಪರಾಧ ಕೃತ್ಯ, ಅಪಘಾತಗಳ ನಿಯಂತ್ರಣ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿ ರಾತ್ರಿ ಗಸ್ತಿನೆಡೆ ವಿಶೇಷ ನಿಗಾ ವಹಿಸಲಾಗುವುದು. ಗಸ್ತಿಗೆ ವಾಹನ ಮತ್ತು ಇಂಧನದ ಕೊರತೆ ಇಲ್ಲ, ಸಮಸ್ಯೆ ಇದ್ದರೆ ನಿವಾರಿಸಿ ಗಸ್ತಿಗೆ ಅಗತ್ಯ ಸೌಕರ್ಯ ಒದಗಿಸುವುದಾಗಿ ತಿಳಿಸಿದರು.
ಪೊಲೀಸರು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳಬೇಕು. ಶಿಸ್ತಿನ ವರ್ತನೆ, ಪೊಲೀಸ್ ವೃತ್ತಿಪರತೆ, ತನಿಖಾ ಕೌಶಲವೃದ್ಧಿಗೆ ಆದ್ಯತೆ ಕೊಡುವ ಮೂಲಕ ತಪ್ಪಿಸ್ಥರ ಶಿಕ್ಷೆ ಪ್ರಮಾಣ ಹೆಚ್ಚಿಸುವುದು ತಮ್ಮ ಗುರಿಯಾಗಿದೆ. ಪೊಲೀಸರ ಕಲ್ಯಾಣ ಕಾರ‌್ಯಕ್ರಮಗಳಿಗೂ ಆದ್ಯತೆ ನೀಡುವುದಾಗಿ ಹೇಳಿದರು.
ಜೂಜು, ಕಳ್ಳತನ, ಕೊಲೆ, ಸುಲಿಗೆ, ಗಾಂಜಾ ಸಹಿತ ಮಾದಕ ವಸ್ತುಗಳ ಮಾರಾಟ, ಸೇವನೆಯಂಥ ಮತ್ತಿತರ ಕೃತ್ಯ, ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಪ್ರಕರಣಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದರು.
ಮಾದಕ ವಸ್ತು ಸೇವನೆ ಕೂಡ ಅಪರಾಧವಾಗಿದೆ. ಈ ನಿಟ್ಟಿನಲ್ಲಿ ಪಾಲಕರು ತಮ್ಮ ಮಕ್ಕಳ ಮೇಲೆ ನಿಗಾ ವಹಿಸಬೇಕು. ವಿದ್ಯಾರ್ಥಿಗಳು ತಮ್ಮ ಭವಿಷ್ಯ ಹಾಳು ಮಾಡಿಕೊಳ್ಳಬಾರದು. ಮಕ್ಕಳ ಮತ್ತು ಮಹಿಳೆಯರ ರಕ್ಷಣೆಗೆ ಒತ್ತು ನೀಡಲಾಗುವುದು. ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇವುಗಳೆಡೆ ನಾಗರಿಕರಲ್ಲಿ ಜಾಗೃತಿ ಮೂಡಿಸಬೇಕಿದೆ. ವಿವಿಧ ಇಲಾಖೆಗಳ ಸಮನ್ವಯತೆಯೊಂದಿಗೆ ಸಂಚಾರ ವ್ಯವಸ್ಥೆ ಸುಗಮಗೊಳಿಸಲಾಗುವುದು. ಟ್ರಾಫಿಕ್ ಸಿಗ್ನಲ್‌ಗಳ ವೈಜ್ಞಾನಿಕ ನಿರ್ವಹಣೆಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net