ಗಾಂಧಿ ಜಯಂತಿಗೆ ಸಿದ್ಧತೆ ಕೈಗೊಳ್ಳಲು ಸಲಹೆ

ಗಾಂಧಿ ಜಯಂತಿಗೆ ಸಿದ್ಧತೆ ಕೈಗೊಳ್ಳಲು ಸಲಹೆ
Published on

ಹಾಸನ : ಜಿಲ್ಲಾಡಳಿತದ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ದಿ. ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜನ್ಮ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅರ್ಚನಾ ಎಂ.ಎಸ್ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಡೆದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಭಾರತದ ಮಾಜಿ ಪ್ರಧಾನ ಮಂತ್ರಿಗಳಾದ ದಿ. ಲಾಲ್ ಬಹಾದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಅ.2 ರಂದು ಬೆಳಗ್ಗೆ 8.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಏರ್ಪಡಿಸುವಂತೆ ಸೂಚಿಸಿದರು.

ಕಾರ್ಯಕ್ರಮದಲ್ಲಿ ಸರ್ವ ಧರ್ಮ ಪ್ರಾರ್ಥನೆ, ಸ್ವಾತಂತ್ರ್ಯ ಹೋರಾಟಗಾರರಿಂದ ಭಾಷಣ, ಮಕ್ಕಳ ವೇಷ ಭೂಷಣ ಸ್ಪರ್ಧೆ, ಚಿತ್ರ ರಚನಾ ಸ್ಪರ್ಧೆ, ಪ್ರಬಂಧ, ಕಿರು ನಾಟಕ ಮತ್ತು ಭಜನೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.


ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಗಾಂಧೀಜಿಯವರ ಅಪರೂಪದ ಛಾಯಾಚಿತ್ರ ಪ್ರದರ್ಶನವನ್ನು ಆಯೋಜಿಸಬೇಕು ಹಾಗೂ ಕಾರ್ಯಕ್ರಮಕ್ಕೆ ಎಲ್ಲಾ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು ಎಂದು ತಿಳಿಸಿದರು.

ಜಯಂತಿ ದಿನದಂದು ಮದ್ಯ ಮತ್ತು ಮಾಂಸ ಮಾರಾಟ ನಿಷೇಧಿಸಿದ್ದು ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದರು.


ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಅವರು ಮಾತನಾಡಿ ಸಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತದಿಂದ ಬಹುಮಾನ ವಿತರಣೆಗೆ ಕ್ರಮ ವಹಿಸಬೇಕು ಎಂದರು.

ಸ್ವಾತಂತ್ರ್ಯ ಹೋರಾಟಗಾರ ಎಚ್.ಎಂ ಶಿವಣ್ಣ ಅವರು ಸಹ ಹಲವು ಸಲಹೆಗಳನ್ನು ನೀಡಿದರು.


ಸಭೆಯಲ್ಲಿ ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಹಾಲಿಂಗಯ್ಯ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ .ಎಸ್ ಪ್ರಕಾಶ್, ನಗರಸಭೆ ಪೌರಯುಕ್ತ ಪರಮೇಶ್ವರಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ದಿಲೀಪ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net