ಗಿರೀಶ್ ಕುಟುಂಬಕ್ಕೆ ಸಾಂತ್ವನ ಹೇಳಿದ ಸಂಕೇತ್ ಪೂವಯ್ಯ

ಚಿತ್ರ 05ಎಸ್ ಡಿ ಪಿ 10-
Published on

ಸಿದ್ದಾಪುರ: ಮಡಿಕೇರಿ ಸಮೀಪದ ಕೆದಕಲ್ ಬಳಿ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಗಿರೀಶ್ ಅವರ ಮಾಲ್ದಾರೆ ಹಂಚಿತ್ತಿಟ್ಟು ಮನೆಗೆ ಕೆಪಿಸಿಸಿ ವಕ್ತಾರ ಮೇರಿಯಂಡ ಸಂಕೇತ್ ಪೂವಯ್ಯ ಸೋಮವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.


ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರ ನಿರ್ದೇಶನದ ಮೇರೆಗೆ ಹಂಚಿತ್ತಿಟ್ಟು ಹಾಡಿಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಾಗಿದೆ. ಶಾಸಕರು ಸರ್ಕಾರದ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿ ಮಾಡಿ ಬಲಿ ತೆಗೆದುಕೊಂಡಿರುವ ಕಾಡಾನೆಯನ್ನು ತಕ್ಷಣ ಸೆರೆ ಹಿಡಿಯಲು ಮಡಿಕೇರಿ ಹಾಗೂ ವಿರಾಜಪೇಟೆ ಕ್ಷೇತ್ರದ ಇಬ್ಬರೂ ಶಾಸಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದರು.


ಜಿಲ್ಲೆಯಲ್ಲಿ ಆನೆ-ಮಾನವ ಸಂಘರ್ಷದಿಂದ ಜನರು ಆತಂಕದಲ್ಲಿ ಜೀವನ ನಡೆಸುವಂತಾಗಿದೆ. ಅಧಿಕಾರಿಗಳು ಸಾರ್ವಜನಿಕರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗೆ ಸೂಕ್ತ ರಕ್ಷಣೆ ನೀಡಬೇಕಾಗಿದೆ. ಈಗಾಗಲೇ ಇಬ್ಬರೂ ಶಾಸಕರು ಆನೆ-ಮಾನವ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಶಾಶ್ವತ ಯೋಜನೆಗಳ ಬಗ್ಗೆ ಸದನದಲ್ಲಿ ಮಾತನಾಡಿದ್ದಾರೆ. ಮುಖ್ಯಮಂತ್ರಿ ಹಾಗೂ ಅರಣ್ಯ ಸಚಿವರ ಗಮನಕ್ಕೂ ತರಲಾಗಿದ್ದು ಅರಣ್ಯ ಸಚಿವರು ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವೈಜ್ಞಾನಿಕವಾಗಿ ಕಾಡುಪ್ರಾಣಿಗಳ ಹಾವಳಿಯನ್ನ ತಡೆಗಟ್ಟುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಲು ಮುಂದಾಗಿದ್ದಾರೆ. ಸರ್ಕಾರ ಶಾಶ್ವತ ಯೋಜನೆಗಳ ಬಗ್ಗೆ ಗಂಭೀರವಾಗಿ ಪರಿಗಣಿಸಿದ್ದು ಸದ್ಯದಲ್ಲೇ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದು ಸಂಕೇತ್ ಪೂವಯ್ಯ ವಿಶ್ವಾಸ ವ್ಯಕ್ತಪಡಿಸಿದರು.


ಎಸಿಎಫ್ ಗೋಪಾಲ್, ಆರ್‌ಎಫ್‌ಒ ದೇವಯ್ಯ, ಡಿಆರ್‌ಎಫ್‌ಒ ರಂಜನ್, ವಲಯ ಕಾಂಗ್ರೆಸ್ ಅಧ್ಯಕ್ಷ ಸಜಿ ತೋಮಸ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗಣೇಶ್ ಸೇರಿದಂತೆ ಅರಣ್ಯ ಇಲಾಖೆಯ ಆರ್‌ಆರ್‌ಟಿ ಸಿಬ್ಬಂದಿ ಇದ್ದರು.

ಆನೆ ದಾಳಿಯಿಂದ ಮೃತಪಟ್ಟ ಗಿರೀಶ್ ಅವರ ಮನೆಗೆ ಸೋಮವಾರ ರಾತ್ರಿ ಭೇಟಿ ನೀಡಿದ್ದ ಸಂಕೇತ್ ಪೂವಯ್ಯ ಅವರು ಕುಟುಂಬದವರಿಗೆ ಸಾಂತ್ವನ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net