

ಹನೂರು: ಗುಣಮಟ್ಟ ಕಾಯ್ದುಕೊಳ್ಳುವ ಮೂಲಕ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಜನರಿಗೆ ಅನುಕೂಲ ಕಲ್ಪಿಸಬೇಕು ಎಂದು ಶಾಸಕ ಎಂ.ಆರ್ ಮಂಜುನಾಥ್ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣ ಸಮೀಪದ ಆರ್.ಎಸ್.ದೊಡ್ಡಿಯಲ್ಲಿ ಗುರುವಾರ ಅಲ್ಪ ಸಂಖ್ಯಾತರ ಕಾಲನಿಗಳ ಸಮಗ್ರ ಅಭಿವೃದ್ಧಿ ಯೋಜನೆಯಡಿ 60 ಲಕ್ಷ ರೂ.ವೆಚ್ಚದಲ್ಲಿನ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪ ಸಂಖ್ಯಾತರು ವಾಸಿಸುತ್ತಿದ್ದಾರೆ. ಆದರೆ ಕೆಲವು ಗ್ರಾಮದ ಕಾಲನಿಗಳಲ್ಲಿ ಅಗತ್ಯ ಮೂಲ ಸೌಕರ್ಯವಿಲ್ಲ. ಇದರಿಂದ ತುಂಬಾ ತೊಂದರೆ ಎದುರಿಸುತ್ತಿದ್ದರು. ಗ್ರಾಮಗಳಿಗೆ ಭೇಟಿ ನೀಡಿದ್ದ ವೇಳೆ ಅಗತ್ಯ ಮೂಲ ಸೌಕರ್ಯ ಒದಗಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದರು. ಈ ಬಗ್ಗೆ ಅಗತ್ಯ ಕ್ರಮ ವಹಿಸಿ ಸರ್ಕಾರಕ್ಕೆ ಅನುದಾನ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದರ ಪರಿಣಾಮ ಅಲ್ಪಸಂಖ್ಯಾತರ ಕಾಲನಿಗಳ ಸಮಗ್ರ ಅಭಿವೃದ್ಧಿ ಯೋಜನೆಯಡಿ 3 ಕೋಟಿ ರೂ.ಅನುದಾನ ದೊರಕಿದ್ದು, ಇದರಲ್ಲಿ ಕ್ಷೇತ್ರ ವ್ಯಾಪ್ತಿಯ ಆರ್.ಎಸ್.ದೊಡ್ಡಿಯಲ್ಲಿ 60 ಲಕ್ಷ ರೂ., ವಡ್ಡರದೊಡ್ಡಿಯಲ್ಲಿ 30 ಲಕ್ಷ ರೂ., ಕೌದಳ್ಳಿಯಲ್ಲಿ 20 ಲಕ್ಷ ರೂ., ಮಾರ್ಟಳ್ಳಿಯಲ್ಲಿ 60 ಲಕ್ಷ ರೂ., ಬಂಡಳ್ಳಿಯಲ್ಲಿ 30 ಲಕ್ಷ ರೂ., ತೊಮಿಯಾರ್‌ಪಾಳ್ಯದಲ್ಲಿ 25 ಲಕ್ಷ ರೂ., ಪ್ರಕಾಶ್‌ಪಾಳ್ಯದಲ್ಲಿ 30 ಲಕ್ಷ ರೂ.ಹಾಗೂ ಜಾಗೇರಿಯಲ್ಲಿ 15 ಲಕ್ಷ ರೂ.ವೆಚ್ಚದಲ್ಲಿ ಸಿಸಿ ರಸ್ತೆ, ಚರಂಡಿ ಹಾಗೂ ಇನ್ನಿತರ ಅಗತ್ಯ ಮೂಲ ಸೌಕರ್ಯ ಸಂಬಂಧ ಕಾಮಗಾರಿಯನ್ನು ಕೈಗೊಳ್ಳಲು ಅನುದಾನ ಹಂಚಿಕೆ ಮಾಡಲಾಗಿದ್ದು, ಇದೀಗ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗುತ್ತಿದೆ.
ಸಂಬಂಧಪಟ್ಟವರು ಸ್ಥಳೀಯರ ಸಹಕಾರ ಪಡೆದು ಗುಣಮಟ್ಟವನ್ನು ಕಾಯ್ದುಕೊಳ್ಳುವುದರ ಮೂಲಕ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು. ಈ ಬಗ್ಗೆ ಅಧಿಕಾರಿಗಳು ಆಗಾಗ್ಗೆ ಪರಿಶೀಲಿಸಿ ಅಗತ್ಯ ಕ್ರಮವಹಿಸಬೇಕು ಎಂದು ಸೂಚಿಸಿದರು.
ಕೂಡಲೇ ಕ್ರಮವಹಿಸಿ: ಗ್ರಾಮಸ್ಥರು ಮಾತನಾಡಿ, ಬಡಾವಣೆಯಲ್ಲಿ ಕಳೆದ ಒಂದು ತಿಂಗಳ ಹಿಂದೆ ನಿರ್ಮಿಸಿರುವ ಸಿಸಿ ರಸ್ತೆ ಕಾಮಗಾರಿ ಅವೈಜ್ಞಾನಿಕದಿಂದ ಕೂಡಿದೆ. ಇದರಿಂದ ಮಳೆ ನೀರು ರಸ್ತೆಯಲ್ಲೇ ನಿಲ್ಲುವಂತಾಗಿ ಸಂಚರಿಸಲು ತುಂಬಾ ಸಮಸ್ಯೆಯಾಗಿದೆ. ಈ ಬಗ್ಗೆ ಸಂಬಂಧಪಟ್ಟವರಿಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಕ್ರಮವಹಿಸಿಲ್ಲ. ಆದ್ದರಿಂದ ಈ ಬಗ್ಗೆ ಗಮನಹರಿಸುವಂತೆ ಮನವಿ ಮಾಡಿದರು. ಕೂಡಲೇ ಸ್ಥಳಕ್ಕೆ ತೆರಳಿದ ಶಾಸಕರು ಪರಿಶೀಲಿಸಿ ಈ ಬಗ್ಗೆ ಕೂಡಲೇ ಅಗತ್ಯ ಕ್ರಮವಹಿಸಿ ವೈಜ್ಞಾನಿಕವಾಗಿ ರಸ್ತೆ ನಿರ್ಮಿಸುವಂತೆ ಸಂಬಂಧಪಟ್ಟವರಿಗೆ ಸೂಚಿಸಿದರು.
ಪಪಂ ಅಧ್ಯಕ್ಷೆ ಮಮ್ತಾಜ್‌ಬಾನು, ಉಪಾಧ್ಯಕ್ಷ ಆನಂದ್‌ಕುಮಾರ್, ಸದಸ್ಯರಾದ ಮಹೇಶ್, ಚಿಕ್ಕತಾಯಮ್ಮ, ಕೆಆರ್‌ಐಡಿಎಲ್ ಎಇಇ ಚಿಕ್ಕಲಿಂಗಯ್ಯ, ಮುಖ್ಯಾಧಿಕಾರಿ ಮಹೇಶ್‌ಕುಮಾರ್, ಮುಖಂಡರಾದ ಸಫಿವುಲ್ಲಾ, ವಿಜಯಕುಮಾರ್ ಮತ್ತಿತರರಿದ್ದರು.