

ಬೆಂಗಳೂರು ಗ್ರಾಮಾಂತರ: ಜನಸಾಮಾನ್ಯರಿಗೆ ಆರ್ಥಿಕ ಹೊರೆಯಾಗದಂತೆ ಸರ್ಕಾರವೇ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನೀಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್‌ನಾರಾಯಣ ತಿಳಿಸಿದರು.
ದೊಡ್ಡಬಳ್ಳಾಪುರ ತಾಲೂಕು ಘಾಟಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ಶನಿವಾರ ಮಹಾತ್ಮಗಾಂಧಿ ಸೇವಾ ಟ್ರಸ್ಟ್ ಆಯೋಜಿಸಿದ್ದ ಉಚಿತ ಆಂಬುಲೆನ್ಸ್ ಹಾಗೂ ಆಹಾರ ಮತ್ತು ಔಷಧ ಸಾಮಗ್ರಿಗಳ ಕಿಟ್ ವಿತರಣೆ ಹಾಗೂ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡಗಳನ್ನು ನೆಟ್ಟು ಮಾತನಾಡಿದರು.
ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆಗಳಿಗೆ ಹೆಚ್ಚಿನ ಸೌಲಭ್ಯ, ವೈದ್ಯ ಹಾಗೂ ಅರೆ ವೈದ್ಯಕೀಯ ಸಿಬ್ಬಂದಿ ನೇಮಕ ಮಾಡಲಾಗುವುದು. ದೊಡ್ಡಬಳ್ಳಾಪುರ ತಾಲೂಕಿನ 100 ಹಾಸಿಗೆಯ ಸಾರ್ವಜನಿಕ ಆಸ್ಪತ್ರೆಗೆ ಸಿ.ಎಸ್.ಆರ್. ನಿಧಿಯಲ್ಲಿ ಸಿಟಿ ಸ್ಕ್ಯಾನ್ ಅಳವಡಿಸಲು ಸೂಚಿಸಲಾಗಿದೆ ಎಂದರು.
ತಾಲೂಕುಗಳಲ್ಲಿ ಉತ್ತಮ ಆರೋಗ್ಯ ಸೇವೆ ಒದಗಿಸಲು ನೆರವಾಗುವ ನಿಟ್ಟಿನಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಬೆಡ್‌ಗಳು ಹಾಗೂ ಐಸಿಯು ಬೆಡ್ ಹೆಚ್ಚಿಸಲಾಗುವುದು ಎಂದರು.
ಬ್ಲ್ಯಾಕ್ ಫಂಗಸ್‌ಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಈವರೆಗೂ ಔಷಧದ ತೊಂದರೆ ಸಂಭವಿಸಿಲ್ಲ. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಶಕ್ತಿ ಮೀರಿ ಔಷಧಗಳನ್ನು ರಾಜ್ಯಕ್ಕೆ ಸರಬರಾಜಾಗುವಂತೆ ಕ್ರಮ ವಹಿಸಿದ್ದಾರೆ ಹಾಗೂ ರಾಜ್ಯ ಸರ್ಕಾರವೂ 30 ಕೋಟಿ ರೂ.ಗಳ ವೆಚ್ಚದಲ್ಲಿ ಒಂದು ಲಕ್ಷ ಚುಚ್ಚುಮದ್ದು ಖರೀದಿಸಲು ಅನುಮೋದನೆ ನೀಡಿದೆ ಎಂದರು.
ಅವಧೂತ ಶ್ರೀ ವಿನಯ್ ಗುರೂಜಿ ಮಾತನಾಡಿ, ಈಗಾಗಲೇ ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ಸೇವಾ ಟ್ರಸ್ಟ್‌ನಿಂದ ಸಂಕಷ್ಟದಲ್ಲಿರುವವರಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಆಹಾರ ಸಾಮಗ್ರಿ ಕಿಟ್ ಹಾಗೂ ಔಷಧ ಕಿಟ್ ವಿತರಣೆ ಮಾಡಲಾಗಿದ್ದು, ದೊಡ್ಡಬಳ್ಳಾಪುರ ತಾಲೂಕಿನಲ್ಲಿಯೂ ಎರಡು ಉಚಿತ ಆಂಬುಲೆನ್ಸ್, ಆಹಾರ ಸಾಮಗ್ರಿಗಳ ಕಿಟ್, ಔಷಧ ಕಿಟ್ ಹಾಗೂ 20 ಆಕ್ಸಿಜನ್ ಕಾನ್ಸನ್‌ಟ್ರೇಟರ್‌ಗಳ ವಿತರಣೆ ಮಾಡಲಾಗಿದೆ ಎಂದರು.
ಕರೊನಾ ಸೋಂಕು ಹರಡದಂತೆ ತಡೆಯುವುದು ಪ್ರತಿಯೊಬ್ಬರ ಕರ್ತವ್ಯ. ಸಾರ್ವಜನಿಕರ ಸಹಕಾರ ಅತ್ಯಗತ್ಯ. ಇಂತಹ ಸಂದಿಗ್ಧ ಸಂದರ್ಭದಲ್ಲಿ ಸ್ಥಿತಿವಂತರು ನಿರಾಶ್ರಿತರಿಗೆ ಸಹಾಯ ಮಾಡಲು ಮುಂದಾಗಬೇಕು ಎಂದು ತಿಳಿಸಿದರು.
ಪರಿಸರವನ್ನು ಈಗಾಗಲೇ ಸ್ವಾರ್ಥಕ್ಕಾಗಿ ನಾಶ ಮಾಡಿದ್ದೇವೆ, ಇನ್ನು ಮುಂದಾದರೂ ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕಿದ್ದು, ಅಕೇಶಿಯಾ ಹಾಗೂ ನೀಲಗಿರಿ ಮರಗಳನ್ನು ತೆರವುಗೊಳಿಸಿ ಹಣ್ಣಿನ ಗಿಡ ಬೆಳೆಸಬೇಕು ಎಂದರು.
ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕ್ಷೇತ್ರದಲ್ಲಿ ಹಣ್ಣಿನ ಗಿಡ ನೆಡಲಾಯಿತು. ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮ ಹಾಗೂ ಮಹಾತ್ಮ ಗಾಂಧಿ ಸೇವಾ ಟ್ರಸ್ಟ್ ಅಧ್ಯಕ್ಷ ಡಾ.ಬೇಳೂರು ರಾಘವೇಂದ್ರಶೆಟ್ಟಿ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಪಂ ಸಿಇಒ ಎಂ.ಆರ್.ರವಿಕುಮಾರ್, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಡಾ.ಅಂಥೋನಿ ಮರಿಯಪ್ಪನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಅರುಳ್‌ಕುಮಾರ್, ಡಿವೈಎಸ್ಪಿ ಟಿ.ರಂಗಪ್ಪ, ತಹಸೀಲ್ದಾರ್ ಶಿವರಾಜ, ಮುಜರಾಯಿ ತಹಸೀಲ್ದಾರ್ ಅನಿತಾಲಕ್ಷ್ಮೀ ಇದ್ದರು.