

ಅರಕಲಗೂಡು: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ ಗುಣಮಟ್ಟದ ಶಿಕ್ಷಣ ಪಡೆದು ಉನ್ನತ ಹುದ್ದೆಗೇರಲು ಪ್ರಯತ್ನ ಮಾಡಬೇಕು ಎಂದು ಶಾಸಕ ಎ.ಮಂಜು ಸಲಹೆ ನೀಡಿದರು.
ತಾಲೂಕಿನ ಹೆಬ್ಬಾಲೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕ್ರೀಡೆ, ಸಾಂಸ್ಕೃತಿಕ, ಸಹ ಪಠ್ಯ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ನಗರ ಪ್ರದೇಶಗಳ ಮಕ್ಕಳೊಂದಿಗೆ ಪೈಪೋಟಿ ನೀಡಲು ಕಲಿಕೆಗೆ ಹೆಚ್ಚು ಒತ್ತು ನೀಡಬೇಕು. ಶಿಕ್ಷಣದೊಂದಿಗೆ ಸಹ ಪಠ್ಯ ಚಟುವಟಿಕೆಗಳ ಕಡೆಗೂ ಆದ್ಯತೆ ನೀಡುವ ಮೂಲಕ ಪ್ರತಿಭೆ ಮೈಗೂಡಿಸಿಕೊಳ್ಳಬೇಕು. ಇದರಿಂದ ಭವಿಷ್ಯದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯವಾಗಲಿದೆ ಎಂದು ಕಿವಿಮಾತು ಹೇಳಿದರು.
ಸಮಾಜದ ಬದಲಾವಣೆ ಶಿಕ್ಷಣದಿಂದ ಮಾತ್ರ ಸಾಧ್ಯ. ಹೀಗಾಗಿ ಎಲ್ಲ ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಮುಂದಿನ ಜೀವನ ರೂಪಿಸಿಕೊಳ್ಳಲು ನೆರವಾಗಬೇಕು ಎಂದರು.
ಗ್ರಾಪಂ ಅಧ್ಯಕ್ಷೆ ಗೌರಮ್ಮ, ಉಪಾಧ್ಯಕ್ಷೆ ಜಯಲಕ್ಷ್ಮೀ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಜಯರಾಮ್, ಸದಸ್ಯರು ಇದ್ದರು.
ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು.