

ಕೋಲಾರ: ಕೆಜಿಎಫ್ ನಗರಸಭೆ ವ್ಯಾಪ್ತಿಯಲ್ಲಿ ಕೈಗೊಂಡಿರುವ ನಗರೋತ್ಥೋನ, ಅಮೃತಸಿಟಿ ಯೋಜನೆಯ ಕಾಮಗಾರಿಗಳು ಕಳಪೆಯಾಗಿದ್ದು, ಸಕಾಲಕ್ಕೆ ಪೂರ್ಣಗೊಂಡಿಲ್ಲ. ಈ ಕುರಿತು ಗಮನಹರಿಸಿ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮಜರುಗಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರನ್ನು ಒತ್ತಾಯಿಸಿರುವುದಾಗಿ ಶಾಸಕಿ ಎಂ.ರೂಪಕಲಾ ತಿಳಿಸಿದರು. ನಗರದ ಜಿಲ್ಲಾಡಳಿತ ಭವನದಲ್ಲಿ ಕೆಜಿಎಫ್ ಕ್ಷೇತ್ರದ ಅಭಿವೃದ್ಧಿ ಕುರಿತು ಮಂಗಳವಾರ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ನಗರಸಭೆ ವ್ಯಾಪ್ತಿಯ ಟೆಂಡರ್ಗಳನ್ನು ಹೊರ ರಾಜ್ಯದ ಗುತ್ತಿಗೆದಾರರು ಪಡೆದುಕೊಂಡಿದ್ದಾರೆ. ಅವರು ಮಾಡಿರುವ ಕಳಪೆ ಕೆಲಸಕ್ಕೆ ಸಾರ್ವಜನಿಕರಿಗೆ ನಾವು ಉತ್ತರ ಕೊಡಲಾಗುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳಿಗೆ ಗಂಭೀರತೆಯಿಲ್ಲವಾಗಿದೆ. ಇದೆಲ್ಲದರ ಕುರಿತು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಕೋರಿರುವುದಾಗಿ ಹೇಳಿದರು. ನಗರದಲ್ಲಿ 75 ಕಿ.ಮೀ ಯುಜಿಡಿ ಕಾಮಗಾರಿ ನಡೆಸಲಾಗಿದೆ. ಶುದ್ಧ ನೀರಿನ ಘಟಕಗಳನ್ನು ಸಹ ನಿರ್ಮಿಸಲಾಗಿದೆ. 150 ಕೋಟಿ ರೂ. ವೆಚ್ಚದಲ್ಲಿ ನೀರಾವರಿ ಕಾಮಗಾರಿಗಳನ್ನು ಕೈಗೊಳ್ಳಾಗಿದೆ. ಆದರೆ ಇದುವರೆಗೂ ಕೆಲಸಗಳನ್ನು ಮುಗಿಸಲು ಸಾಧ್ಯವಾಗಿಲ್ಲ. ಕಾಲಮಿತಿಯೊಳಗೆ ಕಾಮಗಾರಿ ಮುಗಿಸದೆ ರಿವೈಸ್ ಹಣಕ್ಕೆ ಬೇಡಿಕೆ ಇಡುತ್ತಾರೆ. ಇದರ ಕಡೆ ಗಮನಹರಿಸಬೇಕು ಎಂದು ಒತ್ತಾಯಿಸಿರುವುದಾಗಿ ತಿಳಿಸಿದರು. ಕೇಂದ್ರ ಸರ್ಕಾರದ ಅಧೀನದಲ್ಲಿರುವ 2 ಸಾವಿರ ಎಕರೆ ಬಿಇಎಂಎಲ್ ಜಾಗದಲ್ಲಿ ಕೈಗಾರಿಕೆ ಸ್ಥಾಪನೆ ಮಾಡಲು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಕೇಂದ್ರ ಹಾಗೂ ರಾಜ್ಯ ಸಚಿವರು ಹಾಗೂ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕೈಗಾರಿಕೆ ಸ್ಥಾಪನೆಗೆ ಸರ್ಕಾರಕ್ಕೆ ಕೂಡಲೇ ಪ್ರಸ್ತಾವನೆ ಸಲ್ಲಿಸಬೇಕು. ವಸತಿ ರಹಿತರಿಗೆ ಸೂರು ಕಲ್ಪಿಸಲು 15 ಎಕರೆ ಜಾಗ ಗುರುತಿಸಲಾಗಿದ್ದು, ಮಂಜೂರು ಮಾಡಿಕೊಡಲಾಗುವುದು ಎಂದು ಡಿಸಿ ಭರವಸೆ ನೀಡಿದರು ಎಂದು ರೂಪಕಲಾ ತಿಳಿಸಿದರು. ನಗರಸಭೆ ಅಧ್ಯಕ್ಷ ವಿ.ಮುನಿಸ್ವಾಮಿ, ಪೌರಾಯುಕ್ತ ನವೀನ್ ಚಂದ್ರ ಹಾಜರಿದ್ದರು.
ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಪಂಗಡ ಕಾಲೋನಿ ಅಭಿವೃದ್ಧಿಗೆ ಸರ್ಕಾರ 3 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಆದರೆ ಅಧಿಕಾರಿಗಳು ನನ್ನ ಗಮನಕ್ಕೆ ತರದೆ ಕ್ರಿಯಾಯೋಜನೆ ತಯಾರಿಸಿದ್ದಾರೆ. ಹೊರಗಿನ ವ್ಯಕ್ತಿಗಳ ಒತ್ತಡಗಳಿಗೆ ಮಣಿದು ಅವರು ನೀಡಿರುವ ಕ್ರಿಯಾಯೋಜನೆಗೆ ಅನುಮೋದನೆ ನೀಡಲು ಹಿರಿಯ ಅಧಿಕಾರಿಗಳು ಮುಂದಾಗಿದ್ದಾರೆ. ಜಿಲ್ಲಾಧಿಕಾರಿ ಕೂಡಲೇ ಈ ಅನುಮೋದನೆಯನ್ನು ರದ್ದುಗೊಳಿಸಿ ನಾನು ತಯಾರಿಸಿಕೊಡುವ ಕ್ರಿಯಾಯೋಜನೆಗೆ ಅನುಮೋದನೆ ನೀಡಬೇಕು. ಈ ವಿಚಾರದಲ್ಲಿ ರ್ನಿಲಕ್ಷ$್ಯ ತೋರಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಜರುಗಿಸಬೇಕು. ಎಂ.ರೂಪಕಲಾ, -ಶಾಸಕಿ.
ಜಾತಿ ಪ್ರಮಾಣ ಪತ್ರ ವಿತರಣೆಗೆ ಕ್ರಮ: ಕೆಜಿಎಫ್ ತಾಲೂಕಿನಲ್ಲಿ ಮುಂಡಾಲ ಜಾತಿಯವರಿಗೆ ಜಾತಿ ಪ್ರಮಾಣ ಪತ್ರವನ್ನು ತಹಸೀಲ್ದಾರ್ ನೀಡುತ್ತಿಲ್ಲ. ಇದರಿಂದಾಗಿ ಆ ಸಮುದಾಯದ ಮಕ್ಕಳ ವಿದ್ಯಾಭ್ಯಾಸಕ್ಕೆ, ಉದ್ಯೋಗ ಪಡೆದುಕೊಳ್ಳಲು ತೊಂದರೆಯಾಗುತ್ತಿದೆ. ಹಿಂದಿನ ತಹಸೀಲ್ದಾರ್ಗಳು ವಿತರಣೆ ಮಾಡುತ್ತಿದ್ದರು. ಈಗಿನ ತಹಸೀಲ್ದಾರ್ ಜನರನ್ನು ಸಬೂಬು ಹೇಳಿ ಕಳುಹಿಸುತ್ತಿದ್ದಾರೆ ಎಂದು ಶಾಸಕಿ ತಿಳಿಸಿದಾಗ ಜಿಲ್ಲಾಧಿಕಾರಿ ವೆಂಕಟ್ ರಾಜಾ ಕೂಡಲೇ ತಹಸೀಲ್ದಾರ್ ಅವರನ್ನು ಕರೆಸಿ ಜಾತಿ ಪ್ರಮಾಣ ಪತ್ರ ನೀಡಲು ಸೂಚಿಸಿದ್ದಾರೆ.