

ಮೈಸೂರು: ಉಚಿತವಾಗಿ 200 ಯೂನಿಟ್ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ಜನಸಾಮಾನ್ಯರ ಕತ್ತಲೆಯ ಬದುಕು ಹೊಸ ಬೆಳಕಿನೊಂದಿಗೆ ಪ್ರಜ್ವಲಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.
ಸೆಸ್ಕ್ ವತಿಯಿಂದ ಕಲಾಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.
ಗೃಹಜ್ಯೋತಿ ಯೋಜನೆಯಿಂದ ರಾಜ್ಯದ 1.42 ಕೋಟಿ ಕುಟುಂಬಗಳಿಗೆ 200 ಯೂನಿಟ್‌ವರೆಗೆ ಉಚಿತವಾಗಿ ವಿದ್ಯುತ್ ದೊರೆಯಲಿದೆ. ಒಂದು ವರ್ಷದ ಸರಾಸರಿ ಬಳಕೆಯ ಶೇ.10ರಷ್ಟು ಹೆಚ್ಚಿನ ವಿದ್ಯುತ್ ಅನ್ನು ಉಚಿತವಾಗಿ ನೀಡಲಾಗುತ್ತಿದೆ. ಇದು ಎಲ್ಲ ವರ್ಗದ ಜನರಿಗೆ ತಲುಪುವ ಯೋಜನೆಯಾಗಿದೆ. ಇದು ಜನರನ್ನು ಕತ್ತಲೆಯಿಂದ ಬೆಳಕಿನೆಡೆಗೆ ಕೊಂಡೊಯ್ಯುವ ಯೋಜನೆಯಾಗಿದೆ ಎಂದರು.
ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‌ವರೆಗಿನ ಬಳಕೆಯ ಮಿತಿಯಲ್ಲಿ ಆರ್ಥಿಕ ವರ್ಷ 2022-23ರಲ್ಲಿ ಸರಾಸರಿ ಬಳಕೆಯ ಯೂನಿಟ್‌ಗಳ ಮೇಲೆ ಶೇ.10ರಷ್ಟು ಹೆಚ್ಚಿನ ಬಳಕೆಯ ಮಿತಿಯನ್ನು ನಿಗದಿಪಡಿಸಿದ್ದು, ಅದಕ್ಕೆ ಅನುಗುಣವಾಗಿ ವಿದ್ಯುತ್ ಬಿಲ್ ಮೊತ್ತವನ್ನು ಉಚಿತವಾಗಿ ಒದಗಿಸಲಾಗುವುದು ಎಂದು ಮಾಹಿತಿ ನೀಡಿದರು.
2022-23ನೇ ಸಾಲಿನ ವಿದ್ಯುತ್ ಬಳಕೆಯ ವಾರ್ಷಿಕ ಸರಾಸರಿ ಲಭ್ಯವಿಲ್ಲದ ಗ್ರಾಹಕರಿಗೆ ರಾಜ್ಯದ ಸರಾಸರಿಯಾದ 53 ಯೂನಿಟ್+ ಶೇ.10ರಷ್ಟು ಹೆಚ್ಚುವರಿಯಾಗಿ ಅಂದರೆ ಐದು ಯೂನಿಟ್ ಹೊಂದಿಗೆ 58 ಯೂನಿಟ್ ಮಿತಿಯನ್ನು ನಿಗದಿಪಡಿಸಲಾಗಿದೆ ಎಂದರು.
ಪ್ರಸ್ತುತ ಜಾರಿಯಲ್ಲಿರುವ ಅಮೃತ ಜ್ಯೋತಿ, ಭಾಗ್ಯಜ್ಯೋತಿ ಮತ್ತು ಕುಟೀರ ಜ್ಯೋತಿ ಯೋಜನೆಗಳನ್ನು ಗೃಹಜ್ಯೋತಿ ಯೋಜನೆಯಲ್ಲಿ ವಿಲೀನಗೊಳಿಸಲಾಗಿದೆ. ಭಾಗ್ಯಜ್ಯೋತಿ ಮತ್ತು ಕುಟೀರ ಜ್ಯೋತಿ ಯೋಜನೆಯಡಿ ಈಗಾಗಲೇ 40 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಈ ಗ್ರಾಹಕರಿಗೆ ಗೃಹಜ್ಯೋತಿ ಯೋಜನೆ ಅಡಿ ಪ್ರತಿ ತಿಂಗಳಿಗೆ ರಾಜ್ಯದ ಸರಾಸರಿ ಬಳಕೆಯಾದ 53 ಯೂನಿಟ್ + ಶೇ.10ರಷ್ಟು ಹೆಚ್ಚುವರಿಯಾಗಿ ಐದು ಯೂನಿಟ್ ಒಳಗೊಂಡಂತೆ 58 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು ಎಂದರು.
ಸೆಸ್ಕ್ ವ್ಯಾಪ್ತಿಯಲ್ಲಿ 25,09,366 ಗೃಹ ಬಳಕೆದಾರರ ಪೈಕಿ 20,30,041 ಗ್ರಾಹಕರು ನೋಂದಣಿಯಾಗಿದ್ದು, 4,79,325 ಗ್ರಾಹಕರ ನೋಂದಣಿ ಬಾಕಿ ಇದೆ. ಮೈಸೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಶೇ.79.73ರಷ್ಟು ಯೋಜನೆಯ ಪ್ರಗತಿ ಸಾಧಿಸಲಾಗಿದೆ. ಬಾಕಿ ಇರುವ 1,98,429 ಸಂಖ್ಯೆಯ ಗ್ರಾಹಕರಿಂದ ಅರ್ಜಿಗಳ ನೋಂದಣಿ ಪ್ರಕ್ರಿಯೆ ಜಾರಿಯಲ್ಲಿದ್ದು, ಆ.15ರ ಒಳಗೆ ಶೇ.100ರಷ್ಟು ಅರ್ಜಿ ನೋಂದಣಿ ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಗ್ರಾಹಕರು ಸೇವಾಸಿಂಧು ವೆಬ್‌ಸೈಟ್ ಮುಖಾಂತರ ನೇರವಾಗಿ ನೋಂದಣಿ ಮಾಡಿಕೊಳ್ಳಬಹುದು. ಜತೆಗೆ, ಪ್ರತಿ ನಿಗಮದ ಶಾಖೆ, ಉಪ ವಿಭಾಗ, ವಿಭಾಗ, ವೃತ್ತ ಕಚೇರಿಗಳಲ್ಲಿ ಪ್ರತ್ಯೇಕ ಅರ್ಜಿ ನೋಂದಣಿ ಕೌಂಟರ್ ತೆರೆಯಲಾಗಿದೆ. ಗ್ರಾಮ ಒನ್, ನಾಡಕಚೇರಿ, ಬಾಪೂಜಿ ಸೇವಾ ಕೇಂದ್ರಗಳಲ್ಲೂ ಅರ್ಜಿ ನೋಂದಾಯಿಸಬಹುದಾಗಿದೆ ಎಂದರು.
ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ 5 ಗ್ಯಾರಂಟಿ ಯೋಜನೆಗಳ ಕುರಿತು ಭರವಸೆ ನೀಡಲಾಗಿತ್ತು. ಪ್ರತಿಪಕ್ಷದವರು ಇದನ್ನು ತಮಾಷೆ ಮಾಡಿದ್ದರು. ಆದರೆ ಅಧಿಕಾರಕ್ಕೆ ಬಂದ ಬಳಿಕ ಇವುಗಳನ್ನು ಹಂತ ಹಂತವಾಗಿ ಜಾರಿಗೆ ತರಲಾಗಿದೆ. ಸರ್ಕಾರದ ಯೋಜನೆಗಳ ಲಾಭ ಪಡೆಯುವ ಪ್ರತಿ ಕುಟುಂಬಕ್ಕೆ ತಿಂಗಳಿಗೆ 5 ಸಾವಿರ ರೂ., ವರ್ಷಕ್ಕೆ 52 ಸಾವಿರ ರೂ. ಉಳಿತಾಯವಾಗಲಿದೆ. ಇದು ಆರ್ಥಿಕ ಸಬಲೀಕರಣಕ್ಕೆ ಕಾರಣವಾಗಿದ್ದು, ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಲು ನೆರವಾಗಲಿದೆ. ಎಲ್ಲ ಕುಟುಂಬದಲ್ಲೂ ಏಕರೂಪ ಆರ್ಥಿಕ ವ್ಯವಸ್ಥೆ ತರಲು ಪೂರಕವಾಗಿದೆ ಎಂದು ವಿಶ್ಲೇಷಿಸಿದರು.
ಶಕ್ತಿ ಯೋಜನೆಯಿಂದ ಮಹಿಳೆಯರು ಉಚಿತ ಪ್ರಯಾಣ ಮಾಡಿ ಧಾರ್ಮಿಕ ಹಾಗೂ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುವ ಮೂಲಕ ಸಂತೋಷ ಪಡುತ್ತಿದ್ದಾರೆ. ಇದು ಸಹ ಮಹಿಳಾ ಸಬಲೀಕರಣಕ್ಕೆ ಸಹಕಾರಿಯಾಗಿದೆ. ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ನೀಡುವ ಉದ್ದೇಶ ಇತ್ತು. ಆದರೆ ಅಕ್ಕಿಯ ಕೊರತೆ ಇರುವುದರಿಂದ ಈಗ 5 ಕೆಜಿ ಅಕ್ಕಿ ಹಾಗೂ 5 ಕೆಜಿಗೆ ಅಕ್ಕಿಗೆ ಹಣ ನೀಡಲಾಗುತ್ತಿದೆ ಎಂದರು.
ಪಶು ಸಂಗೋಪನಾ ಹಾಗೂ ರೇಷ್ಮೆ ಇಲಾಖೆಯ ಸಚಿವ ಕೆ.ವೆಂಕಟೇಶ್ ಮಾತನಾಡಿ, ಗೃಹಜ್ಯೋತಿ ಯೋಜನೆಯಡಿ ಅರ್ಜಿ ನೋಂದಣಿಗೆ ಯಾವುದೇ ಕಾಲಮಿತಿ ನಿಗದಿ ಮಾಡಿಲ್ಲ. ಆದ್ದರಿಂದ ವಿದ್ಯುತ್ ಬಳಕೆದಾರರು ಈಗಲೂ ನೋಂದಣಿ ಮಾಡಿ ಯೋಜನೆ ಲಾಭ ಪಡೆದುಕೊಳ್ಳಬಹುದು ಎಂದರು.
ವಿಧಾನಸಭೆ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ 5 ಗ್ಯಾರಂಟಿ ಯೋಜನೆ ಜಾರಿ ತರಲಾಗಿದೆ. ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿಯೊಂದಿಗೆ ಹೆಚ್ಚುವರಿ 5 ಕೆಜಿಯ ಹಣವನ್ನು ಶೇ.95ರಷ್ಟು ಫಲಾನುಭವಿಗಳಿಗೆ ತಲುಪಿಸಲಾಗಿದೆ. ತಾಂತ್ರಿಕ ಸಮಸ್ಯೆ ಶೇ.5ರಷ್ಟು ಫಲಾನುಭವಿಗಳಿಗೆ ಸೌಲಭ್ಯ ದೊರೆತಿಲ್ಲ. ಆ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದರು.
ಮೇಯರ್ ಶಿವಕುಮಾರ್, ಶಾಸಕ ಡಿ.ರವಿಶಂಕರ್, ವಿಧಾನ ಪರಿಷತ್ ಸದಸ್ಯರಾದ ಎಚ್.ವಿಶ್ವನಾಥ್, ಮರಿತಿಬ್ಬೇಗೌಡ, ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಉಪ ಮೇಯರ್ ಜಿ.ರೂಪಾ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್.ಶ್ರೀಧರ್ ಮತ್ತಿತರರು ಉಪಸ್ಥಿತರಿದ್ದರು.