

ವಿಜಯಪುರ: ಸಾರ್ವಜನಿಕರಿಗೆ ಕುಡಿಯುವ ನೀರು ಹಾಗೂ ಅಗತ್ಯ ಮೂಲಸೌಲಭ್ಯ ಒದಗಿಸಬೇಕು. ಎಲ್ಲ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದುಕೊಂಡು ಕುಂದುಕೊರತೆಯ ಬಗ್ಗೆ ಸಾರ್ವಜನಿಕರಿಂದು ದೂರು ಸ್ವೀಕರಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಚಡಚಣ ಪಟ್ಟಣ ಹಾಗೂ ಬರಡೋಲ ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿದ ಅವರು, ಚಡಚಣ ತಹಸೀಲ್ದಾರ್ ಕಚೇರಿಯಲ್ಲಿ ಅಧಿಕಾರಿಗಳ ಜತೆ ಚರ್ಚಿಸಿ ಸೂಚನೆ ನೀಡಿ, ಯಾವುದೇ ಗೊಂದಲವಾಗದ ರೀತಿಯಲ್ಲಿ ಸಮಸ್ಯೆಗಳನ್ನು ಬಗೆಹರಿಸಬೇಕು. ಅಗತ್ಯ ದಾಖಲೆ ಹೊಂದುವ ಕುರಿತು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.
ನಂತರ ಪಟ್ಟಣ ಪಂಚಾಯಿತಿಗೆ ಭೇಟಿ ನೀಡಿ, ಅಲ್ಲಿನ ಕಾರ್ಯ ನಿರ್ವಹಣೆ ಪರಿಶೀಲಿಸಿದರು. ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಮುಂಚೆ ಪರಿಶೀಲನೆ ನಡೆಸಬೇಕು. ಪಟ್ಟಣದ ಸ್ವಚ್ಚತೆಗೆ ಆದ್ಯತೆ ನೀಡುವಂತೆ ಮುಖ್ಯಾಧಿಕಾರಿಗೆ ಸೂಚಿಸಿದರು.
ಬರಡೋಲ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮ ಒನ್ ಕೇಂದ್ರದಲ್ಲಿ ಗೃಹಲಕ್ಷ್ಮಿ ಯೋಜನೆ ಸೇರಿದಂತೆ ವಿವಿಧ ಯೋಜನೆಯ ಲಾನುಭವಿಗಳ ಅರ್ಜಿ ಸ್ವೀಕರಿಸುವ ಕುರಿತು ಪರಿಶೀಲನೆ ನಡೆಸಿ, ಯಾವುದೇ ಗೊಂದಲ ಮಾಡಿಕೊಳ್ಳದೇ ಕಾರ್ಯನಿರ್ವಹಿಸಬೇಕು. ಅಗತ್ಯ ದಾಖಲೆ ಹೊಂದುವ ಕುರಿತು ಮನವರಿಕೆ ಮಾಡಿಕೊಡಬೇಕು ಎಂದರು.
ನಂತರ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿದ ಅವರು, ರೈತರಿಗೆ ಸಮರ್ಪಕ ರಸಗೊಬ್ಬರ, ಬಿತ್ತನೆ ಬೀಜ ಕೊರತೆಯಾಗದಂತೆ ದಾಸ್ತಾನು ಹೊಂದಿರಬೇಕು. ಸಕಾಲದಲ್ಲಿ ರೈತರಿಗೆ ರಸಗೊಬ್ಬರ ಹಾಗೂ ಬಿತ್ತನೆ ಬೀಜ ವಿತರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಿನಿ ವಿಧಾನಸೌಧ ನಿರ್ಮಿಸಲು ಮೀಸಲಿಟ್ಟ ಸ್ಥಳ ಪರಿಶೀಲನೆ ನಡೆಸಿ ಕಟ್ಟಡ ನಿರ್ಮಾಣಕ್ಕೆ ಕಾನೂನಿನ ತೊಂದರೆಗಳಿದ್ದಲ್ಲಿ ಆದಷ್ಟು ಶೀಘ್ರ ಸರಿಪಡಿಸಲು ಸೂಚಿಸಿದರು.
ಇಂಡಿ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ, ಚಡಚಣ ತಹಸೀಲ್ದಾರ್ ಸಂಜಯ ಇಂಗಳೆ, ಉಪತಹಸೀಲ್ದಾರ್, ಪುರಸಭೆ ಮುಖ್ಯಾಧಿಕಾರಿ, ಕಂದಾಯ ನಿರೀಕ್ಷಕ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.