

ವಿಜಯಪುರ: ಜಿಲ್ಲಾಡಳಿತದ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆ.30ರಂದು ಬೆಳಗ್ಗೆ 11ಗಂಟೆಗೆ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ರಾಜ್ಯ ಸರ್ಕಾರದ ಮಹತ್ವದ ಐದನೇ ಗ್ಯಾರಂಟಿ ಗೃಹಲಕ್ಷ್ಮೀ ಯೋಜನೆಗೆ ವಿದ್ಯುಕ್ತ ಚಾಲನೆ ದೊರೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಯೋಜನೆಗೆ ಚಾಲನೆ ನೀಡಲಿದ್ದಾರೆ.
ಈ ಕುರಿತು ಮಂಗಳವಾರ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮದ ಪೂರ್ವಸಿದ್ದತಾ ಕಾರ್ಯವನ್ನು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹಾಗೂ ಇತರೆ ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಜುಲೈ 19ರಿಂದ ನೋಂದಣಿ ಕಾರ್ಯ ಆರಂಭಗೊಂಡಿತ್ತು. ಮನೆ ಯಜಮಾನಿಗೆ ಪ್ರತಿ ತಿಂಗಳು 2ಸಾವಿರ ರೂ. ನಗದು ನೀಡುವ ಈ ಯೋಜನೆಗೆ ಆ.28ರವರೆಗೆ 4,29,783 ಮಹಿಳೆಯರು ಹೆಸರು ನೊಂದಾಯಿಸಿದ್ದರು. ಜಿಲ್ಲೆಯಲ್ಲಿ 5,20, 906 ಮಹಿಳೆಯರು ನೋಂದಾವಣೆಗೆ ಅರ್ಹತೆ ಹೊಂದಿದ್ದಾರೆ. ಪ್ರತಿ ತಿಂಗಳು 103.60 ಕೋಟಿ ರೂ. ಅನುದಾನದ ಅಗತ್ಯವಿದೆ. ಶೇ. 82.51 ರಷ್ಟು ಸಾಧನೆಯಾಗಿದೆ. ಆಗಸ್ಟ್ ತಿಂಗಳ ಕಂತಿನನಂತೆ 84,06,92,000 ರೂ. ಅನುದಾನದಂತೆ 4,23,590 ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಿದೆ.
ಜಿಲ್ಲೆಯಲ್ಲಿ ಒಟ್ಟು 211 ಗ್ರಾಮ ಪಂಚಾಯತಿಗಳಲ್ಲಿ ಹಾಗೂ 15 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 47 ಕಾರ್ಯಕ್ರಮ ಏಕಕಾಲದಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರತಿಯೊಂದು ಕಾರ್ಯಕ್ರಮಕ್ಕೆ ಕನಿಷ್ಟ 200 ರಿಂದ 2000 ಫಲಾನುಭವಿಗಳು ಭಾಗವಹಿಸಲು ಮೂಲ ಸೌಕರ್ಯಗಳಾದ ಆಸನ ವ್ಯವಸ್ಥೆ, ಕುಡಿವ ನೀರು, ಶೌಚಗೃಹ ಸೇರಿದಂತೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ನಡೆಯುವ 258 ಕಾರ್ಯಕ್ರಮಗಳಲ್ಲಿ 10-10 ಅಳತೆಯ ಎಲ್‌ಇಡಿ ಪರದೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮದ ಸ್ಥಳದಿಂದ ಸ್ಥಳೀಯ ಕಾರ್ಯಕ್ರಮದ ಸ್ಥಳದೊಂದಿಗೆ ಪರಸ್ಪರ ಸಂವಾದ ನಡೆಸಲು ಜಿಲ್ಲೆಯ ಇಂಡಿ ತಾಲೂಕಿನ ಚವಡಿಹಾಳ ಗ್ರಾಮ ಪಂಚಾಯಿತಿ ಹಾಗೂ ಕಂದಗಲ್ಲ ಹನುಮಂತರಯ ರಂಗ ಮಂದಿರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಫಲಾನುಭವಿ ಆಯ್ಕೆ ಮಾಡಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ.
ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ, ತಾಲ್ಲೂಕು ಮಟ್ಟದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಹಾಗೂ ಗ್ರಾಮ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗುತ್ತಿದೆ.
ಕಾರ್ಯಕ್ರಮದ ವೇಳೆ ನೋಂದಣಿಯಾದ ಎಲ್ಲಾ ಫಲಾನುಭವಿಗಳ ಖಾತೆಗೆ ನಗದು ವರ್ಗಾವಣೆ ಆಗಿರುವ ಬಗ್ಗೆ ಏಕಕಾಲದಲ್ಲಿ ಅವರ ಮೊಬೈಲ್ ಸಂಖ್ಯೆ ಸಂದೇಶ ರವಾನಿಸಲು ವ್ಯವಸ್ಥೆ ಮಾಡಲಾಗಿದೆ.
ಪ್ರತಿ ಮನೆಯಂಗಳದಲ್ಲಿ ಹಾಗೂ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಗೃಹಲಕ್ಷ್ಮೀ ಯೋಜನೆಯ ಚಿಹ್ನೆಯ ಸುತ್ತ ನಾನೇ ಯಜಮಾನಿ-ನಾನೇ ನಾಯಕಿ ಎಂದು ರಂಗೋಲಿ ಬಿಡಿಸಲು ತಿಳಿಸಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ಸ್ವಚ್ಚತಾ ವಾಹನಗಳ ಧ್ವನಿವರ್ಧಕದ ಮೂಲಕ ಹಾಗೂ ಮನೆ ಮನೆಗೆ ಕರಪತ್ರ ವಿತರಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಹಾಗೂ ಸಾರ್ವಜನಿಕರು ಭಾಗವಹಿಸಲು ಮನವಿ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಕೆ. ಚವ್ಹಾಣ ತಿಳಿಸಿದ್ದಾರೆ.