

ಹಾಸನ: ಬೇಲೂರು ತಾಲ್ಲೂಕಿನ ಗೋಣಿಸೋಮನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೂರು ವರ್ಷ ತುಂಬಿದ ಹಿನ್ನಲೆ ಡಿ. 24 ರಂದು ಶತಮಾನೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಶತಮಾನೋತ್ಸವ ಸಮಿತಿ ಉಪಾಧ್ಯಕ್ಷ ಗಂಗಣ್ಣ ಅವರು ತಿಳಿಸಿದರು.
ಗ್ರಾಮದಲ್ಲಿ ಶಾಲೆ ಆರಂಭವಾಗಿ 100 ವರ್ಷ ಕಳೆದಿದ್ದು, ಸಾವಿರಾರು ಜನರು ವಿದ್ಯೆ ಕಲಿತು ವಿವಿಧ ಹುದ್ದೆ ಅಲಂಕರಿಸಿದ್ದಾರೆ. ವಿದ್ಯಾ ದೇಗುಲಕ್ಕೆ ನೂರು ವರ್ಷ ತುಂಬಿದ ಹಿನ್ನಲೆಯಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಪುಷ್ಪಗಿರಿ ಮಹಾಸಂಸ್ಥಾನ ಮಠದ ಶ್ರೀ ಸೋಮಶೇಖರ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಶಾಸಕ ಹೆಚ್.ಕೆ.ಸುರೇಶ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದರು.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೇರಿ ಅನೇಕರು ಭಾಗವಹಿಸಲಿದ್ದಾರೆ,ರಕ್ತದಾನ, ಆರೋಗ್ಯ ತಪಾಸಣಾ ಶಿಬಿರ ಹಾಗು ಹಳೆ ವಿದ್ಯಾರ್ಥಿಗಳ ಸಂಘದಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಶತಮಾನೋತ್ಸವ ಸಮಿತಿಯ ಅಧ್ಯಕ್ಷ ರಾಜೇಗೌಡ, ಲೋಕೇಶ್, ಹರೀಶ್ ಇತರರು ಇದ್ದರು.