

ಹಾಸನ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಹೋಲ್‌ಸೇಲ್ ದರದಲ್ಲಿ ಅಂಗಡಿಗಳಿಗೆ ಮಾರಾಟ ಮಾಡಲು ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಶುಕ್ರವಾರ ಸಂಜೆ ಪರಿಸರ ಇಲಾಖೆ ಮತ್ತು ನಗರಸಭೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಸುಮಾರು 10 ಲಕ್ಷ ರೂ. ಮೌಲ್ಯದ ಪ್ಲಾಸ್ಟಿಕ್ ವಶಕ್ಕೆ ಪಡೆದಿದ್ದಾರೆ.
ನಗರದ ಕೋರ್ಟ್ ಹಿಂಭಾಗದ ಗೋದಾಮಿನಲ್ಲಿ ಬದ್ರಿನಾಥ್ ಎಂಬ ವ್ಯಕ್ತಿ ಪ್ಲಾಸ್ಟಿಕ್ ಸಂಗ್ರಹಿಸಿ ಇಟ್ಟಿದ್ದ. ಅಂಗಡಿಗಳಿಗೆ ಹೋಲ್ ಸೇಲ್ ದರದಲ್ಲಿ ನಿಷೇಧಿತ ಪ್ಲಾಸ್ಟಿಕ್ ಪದಾರ್ಥಗಳಾದ ಕ್ಯಾರಿಬ್ಯಾಗ್, ಲೋಟ ಸೇರಿದಂತೆ ಇನ್ನಿತರ ವಸ್ತುಗಳನ್ನು ಮಾರಾಟ ಮಾಡಲು ಸಂಗ್ರಹಿಸಿ ಇಟ್ಟುಕೊಂಡಿದ್ದರು ಎಂದು ತಿಳಿದು ಬಂದಿದೆ. ಖಚಿತ ಮಾಹಿತಿ ಮೇರೆಗೆ ನಗರಸಭೆ ಹಾಗೂ ಪರಿಸರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಸುಮಾರು ಮೂರು ಟ್ರಾೃಕ್ಟರ್‌ನಷ್ಟು ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡು ಗೋದಾಮಿಗೆ ಬೀಗ ಹಾಕಿ ಪ್ರಕರಣ ದಾಖಲಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ನಗರಸಭೆ ಅಧ್ಯಕ್ಷ ಆರ್. ಮೋಹನ್, ನಗರಸಭೆ ವತಿಯಿಂದ ಪ್ಲಾಸ್ಟಿಕ್ ನಿಷೇಧಿಸುವಂತೆ ಸಾಕಷ್ಟು ಅರಿವು ಮೂಡಿಸುತ್ತಿದ್ದರು ಕೂಡ ಈ ರೀತಿ ಘಟನೆಗಳು ಆಗುತ್ತಿವೆ. ನಾವು ಹಲವು ಕಡೆ ದಾಳಿ ಮಾಡಿದ್ದೇವೆ. ಆದರೂ ಮತ್ತೆ ಮತ್ತೆ ಈ ರೀತಿಯ ಪ್ರಕರಣಗಳು ನಡೆಯುತ್ತವೆ. ಸಾರ್ವಜನಿಕರು ಕೂಡ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಬಳಸುತ್ತಿದ್ದಾರೆ. ಇದರ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು ಎಂದು ಹೇಳಿದರು.
ನಗರಸಭೆ ಆಯುಕ್ತ ಸತೀಶ್ ಮಾತನಾಡಿ, ಜಿಲ್ಲಾ ನ್ಯಾಯಾಲಯದ ಹಿಂಭಾಗದ ಗೋದಾಮಿನಲ್ಲಿ ಪ್ಲಾಸ್ಟಿಕ್ ಸಂಗ್ರಹ ಮಾಡಿರುವ ಬಗ್ಗೆ ಸಿಕ್ಕ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡಿದ್ದು, ನಂತರ ಇವುಗಳನ್ನು ಪರಿಸರ ಇಲಾಖೆಗೆ ಹಸ್ತಾಂತರಿಸಲಾಗುವುದು ಎಂದು ಹೇಳಿದರು.
ದಾಳಿಯ ಸಂದರ್ಭದಲ್ಲಿ ನ್ಯಾಯಾಧೀಶ ರವಿಕಾಂತ್, ಪರಿಸರ ಮಾಲಿನ್ಯ ಅಧಿಕಾರಿಗಳು ಹಾಗೂ ನಗರಸಭೆ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.