ಗೌಡರ ನೇತೃತ್ವದಲ್ಲಿ ದೆಹಲಿಯಲ್ಲಿ ಶಾಸಕರ ಸಭೆ: ನಾಳೆ ಕೇಂದ್ರದ ಸಚಿವರ ಭೇಟಿ

ಗೌಡರ ನೇತೃತ್ವದಲ್ಲಿ ದೆಹಲಿಯಲ್ಲಿ ಶಾಸಕರ ಸಭೆ: ನಾಳೆ ಕೇಂದ್ರದ ಸಚಿವರ ಭೇಟಿ
Published on

ಹಾಸನ: ಜಿಲ್ಲೆ ಹಾಗೂ ನೆರೆಹೊರೆಯ ಜಿಲ್ಲೆಗಳಲ್ಲಿ ಆಗಬೇಕಿರುವ ವಿವಿಧ ಅಭಿವೃದ್ಧಿ ಕಾಮಗಾರಿ ಹಾಗೂ ಅನುದಾನ ಬಿಡುಗಡೆ ಸಂಬಂಧ ಬುಧವಾರ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಹಾಸನ ಹಾಗೂ ಮಂಡ್ಯ ಜಿಲ್ಲೆಯ ಜೆಡಿಎಸ್ ಶಾಸಕರು ಕೇಂದ್ರದ ಹಲವು ಸಚಿವರನ್ನು ಭೇಟಿ ಮಾಡಲಿದ್ದಾರೆ.
ಈ ಹಿನ್ನೆಲೆಯಲ್ಲಿ ಮಂಗಳವಾರ ದೆಹಲಿಯಲ್ಲಿ ದೇವೇಗೌಡರ ನಿವಾಸದಲ್ಲಿ ಜೆಡಿಎಸ್ ಶಾಸಕರು ಸಭೆ ನಡೆಸಿದರು. ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ನನೆಗುದಿಗೆ ಬಿದ್ದಿರುವ ಹಾಗೂ ಹೊಸ ರಾಷ್ಟ್ರೀಯ ಹೆದ್ದಾರಿಗಳು, ರೈಲ್ವೆ ಯೋಜನೆಗಳು ಹಾಗೂ ಕೊಬ್ಬರಿಗೆ ಬೆಂಬಲ ಬೆಲೆ ನೀಡಿ ಖರೀದಿ ಮಾಡುವ ಸಂಬಂಧ ಸಚಿವರ ಬಳಿಗೆ ನಿಯೋಗ ತೆರಳಿ ಮನವಿ ಮಾಡುವ ಸಂಬಂಧ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಅದರಂತೆ ಬುಧವಾರ ಜೆಡಿಎಸ್ ನಿಯೋಗ ಕೇಂದ್ರದ ಭೂ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಕೇಂದ್ರದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ಕೃಷಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದೆ.
ಸಭೆಯಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ, ಜಿಲ್ಲೆಯ ಶಾಸಕರಾದ ಎಚ್.ಡಿ.ರೇವಣ್ಣ, ಸಿ.ಎನ್.ಬಾಲಕೃಷ್ಣ, ಎಚ್.ಪಿ.ಸ್ವರೂಪ್ ಪ್ರಕಾಶ್ ಹಾಗೂ ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ಶಾಸಕ ಎಚ್.ಟಿ.ಮಂಜು ಮೊದಲಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net