ಗೌರವದಿಂದ ಸಿದ್ದರಾಮಯ್ಯ ರಾಜೀನಾಮೆ ನೀಡಲಿ

CTD BJP
Published on

ಚಿತ್ರದುರ್ಗ: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿರುವುದರಿಂದ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಸಂಸದ ಗೋವಿಂದ ಎಂ.ಕಾರಜೋಳ ಆಗ್ರಹಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಗರಡಿಯಲ್ಲಿ ಬೆಳೆದಿರುವ ಸಿದ್ದರಾಮಯ್ಯ ಈಗ ಎಲ್ಲವನ್ನೂ ಮರೆತಿದ್ದಾರೆ. ಹೆಗಡೆ ತಮ್ಮ ವಿರುದ್ಧ ಟೆಲಿಫೋನ್ ಕದ್ದಾಲಿಕೆ ಆರೋಪ ಕೇಳಿ ಬಂದಾಗ ಹೊಸದಿಲ್ಲಿಯಿಂದ ನೇರ ರಾಜಭವನಕ್ಕೆ ಆಗಮಿಸಿ ರಾಜೀನಾಮೆ ಸಲ್ಲಿಸಿದ್ದರು ಎಂದು ತಿಳಿಸಿದರು.
ಸ್ವಾತಂತ್ರಾೃನಂತರದಲ್ಲಿ ಕೌಟುಂಬಿಕ ಸ್ವಾರ್ಥಕ್ಕಾಗಿ ರಾಜೀನಾಮೆ ಸಲ್ಲಿಸಬೇಕಾದ ಪರಿಸ್ಥಿತಿ ಒಬ್ಬ ಸಿಎಂಗೆ ಎದುರಾಗಿರುವುದು ದೇಶದಲ್ಲಿ ಇದೇ ಮೊದಲು. ಮುಡಾ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಗಳಲ್ಲಿ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಸಿದ್ದರಾಮಯ್ಯ ಗೌರವದಿಂದ ರಾಜೀನಾಮೆ ನೀಡಿ ನಿಷ್ಪಕ್ಷಪಾತ ತನಿಖೆಗೆ ಸಹರಿಸಬೇಕು ಎಂದರು.
ಮಾಹಿತಿ ಹಕ್ಕು ಕಾರ್ಯಕರ್ತರ ಹೋರಾಟಕ್ಕೆ ಜಯ ಸಿಕ್ಕಿದೆ. ಸಚಿವರು ಸಿಎಂ ಬೆಂಬಲಕ್ಕೆ ನಿಲ್ಲುವ ಬದಲು ರಾಜೀನಾಮೆ ಕೊಡುವಂತೆ ತಿಳಿ ಹೇಳಬೇಕು ಎಂದು ತಿಳಿಸಿದರು.
ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಮಾತನಾಡಿ, ಹಳೇ ಪ್ರಕರಣವೆಂದು ಅರ್ಕಾವತಿ ಬಡಾವಣೆ ರೀ ಡು ವಿಚಾರದಲ್ಲಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ತಾವು ಅಧಿಕಾರದಲ್ಲಿದ್ದಾಗ ಅದನ್ನು ಯಾಕೆ ಪ್ರಸ್ತಾಪಿಸಲಿಲ್ಲವೆಂದು ಬಿಜೆಪಿಯನ್ನು ಅವರು ಪ್ರಶ್ನಿಸಿದ್ದಾರೆ. 2013ರಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ, ಒಂದು ಎಕರೆ ಒಂದು ಗುಂಟೆ ಜಮೀನು ‘ಡಿ’ ನೋಟಿಫಿಕೇಶನ್‌ಗೆ ಸಂಬಂಧಿಸಿದಂತೆ ಕ್ರಮ ಜರುಗಿಸದೆ ಈಗ ಯಾಕೆ ಕೆದಕಿದ್ದೀರಿ ಎಂದು ಸಿದ್ದರಾಮಯ್ಯರನ್ನು ನಾನು ಕೇಳಲು ಬಯಸುತ್ತೇನೆ. ತಮ್ಮ ವರ್ಚಸ್ಸು ವೃದ್ಧಿಸಿಕೊಳ್ಳಲು ಅವರು ರಾಜೀನಾಮೆ ಕೊಡಲಿ ಎಂದು ಆಗ್ರಹಿಸಿದರು.
ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ, ಹೈಕೋರ್ಟ್ ತೀರ್ಪು ವಿರುದ್ಧ ಕಾನೂನಾತ್ಮಕ ಹೋರಾಟ ಮುಂದುವರಿಸಲು ಸಿದ್ದರಾಮಯ್ಯಗೆ ಸಾಂವಿಧಾನಿಕ ಹಕ್ಕಿದೆ. ಆದರೆ ಅಧಿಕಾರದಲ್ಲಿ ಮುಂದುವರಿಯಲು ಯಾವುದೇ ನೈತಿಕ ಹಕ್ಕಿಲ್ಲ. ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಿಲ್ಲವೆಂದು ಸಮರ್ಥಿಸಿಕೊಳ್ಳುತ್ತಿರುವ ಅವರ ರಾಜೀನಾಮೆಗೆ ಒತ್ತಾಯಿಸಿ ರಾಜ್ಯಾದ್ಯಂತ ಬಿಜೆಪಿ ಹೋರಾಟ ನಡೆಸಲಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ರಾಜ್ಯ ಖನಿಜ ನಿಗಮದ ಮಾಜಿ ಅಧ್ಯಕ್ಷ ಎಸ್.ಲಿಂಗಮೂರ್ತಿ, ಮಾಜಿ ಶಾಸಕ ಎಸ್.ಕೆ.ಬಸವರಾಜನ್,ಮುಖಂಡರಾದ ಕೆ.ಮಲ್ಲಿಕಾರ್ಜುನ್, ದಗ್ಗೆ ಶಿವಪ್ರಕಾಶ್, ನಾಗರಾಜ್‌ಬೇದ್ರೆ, ಛಲವಾದಿ ತಿಪ್ಪೇಸ್ವಾಮಿ ಇದ್ದರು.
==
ಕೋಟ್ …
ತಪ್ಪೇ ಮಾಡಿಲ್ಲವೆಂದು ಭಂಡತನದ ಸಮರ್ಥನೆ ಬೇಡ. ಕಾಂಗ್ರೆಸ್ ಜಾರಿಗೊಳಿಸಿರುವ ಪಾರದರ್ಶಕ ಕಾಯ್ದೆಯೊಳಗೆ ಅವರದ್ದೇ ಪಕ್ಷದ ಮುಖ್ಯಮಂತ್ರಿ ಈಗ ಸಿಲುಕಿದ್ದಾರೆ.
ಗೋವಿಂದ ಎಂ.ಕಾರಜೋಳ, ಸಂಸದ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net